ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ಸಂದರ್ಭದಲ್ಲಿ ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ: ಗೆಹ್ಲೋಟ್ ಆರೋಪ

ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ ರಾಜಸ್ಥಾನ ಸಿ.ಎಂ
Last Updated 6 ಜುಲೈ 2021, 11:13 IST
ಅಕ್ಷರ ಗಾತ್ರ

ಜೈಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಮಂಗಳವಾರ ಕಿಡಿ ಕಾರಿರುವ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌, ರಾಜ್ಯಗಳಲ್ಲಿ ಚುನಾವಣೆ ಇಲ್ಲವೇ ರಾಜಕೀಯ ಬಿಕ್ಕಟ್ಟು ಉಂಟಾದಾಗ ಮೋದಿ ಸರ್ಕಾರವು ಸಿಬಿಐ, ಇಡಿ ಮತ್ತು ಆದಾಯ ತೆರಿಗೆ ಇಲಾಖೆಯಂತಹ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

‘ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲಿರುವುದರಿಂದ ಅಲ್ಲಿ ಸಿಬಿಐ ದಾಳಿಗಳನ್ನು ನಡೆಸಲು ಆರಂಭಿಸಿದೆ’ ಎಂದು ಗೆಹ್ಲೋಟ್ ಟ್ವೀಟ್‌ನಲ್ಲಿ ಹೇಳಿದ್ದಾರೆ.

‘ಈ ಹಿಂದೆ ಪಶ್ಚಿಮ ಬಂಗಾಳ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ಇತರೆಡೆಗಳಲ್ಲಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿತ್ತು’ ಎಂದೂ ಅವರು ಆರೋಪಿಸಿದ್ದಾರೆ.

‘ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ನೇತೃತ್ವದ ಸರ್ಕಾರವಿದ್ದಾಗ ಗೋಮತಿ ನದಿ ಅಭಿವೃದ್ಧಿ ಯೋಜನೆಯಲ್ಲಿ ₹ 1,437 ಕೋಟಿಗಳಷ್ಟು ಅವ್ಯವಹಾರ ನಡೆದಿದೆ ಎಂದು ಆರೋಪಿಸಿ, 16 ಸರ್ಕಾರಿ ನೌಕರರು ಸೇರಿದಂತೆ ಒಟ್ಟ 189 ಮಂದಿ ವಿರುದ್ಧ ಸಿಬಿಐ ಸೋಮವಾರ ಪ್ರಕರಣ ದಾಖಲಿಸಿದೆ’ ಎಂದು ಮೂಲಗಳು ತಿಳಿಸಿವೆ.

‘ಎಲ್ಲಾ ತನಿಖೆ ಸಂಸ್ಥೆಗಳು ವಿಶ್ವಾಸಾರ್ಹತೆ ಉಳಿಸಿಕೊಂಡು ಬಹುಮಟ್ಟಿಗೆ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತವೆ. ಆದರೆ, ಬಿಜೆಪಿಯು ತನ್ನ ರಾಜಕೀಯ ಕಾರ್ಯಸೂಚಿಯನ್ನು ಪೂರೈಸಿಕೊಳ್ಳಲು ಈ ಸಂಸ್ಥೆಗಳಿಗೆ ಆದೇಶ ನೀಡುತ್ತಿರುವುದು ಆ ಸಂಸ್ಥೆಗಳ ವಿಶ್ವಾಸಾರ್ಹತೆಗೆ ಧಕ್ಕೆ ತಂದಿದೆ’ ಎಂದು ಅಶೋಕ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.

‘ಸಮಯ ಬಂದಾಗ ಸಾರ್ವಜನಿಕರು ತನಿಖಾ ಸಂಸ್ಥೆಗಳನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳುತ್ತಿರುವ ಬಿಜೆಪಿಗೆ ಸೂಕ್ತ ಉತ್ತರ ನೀಡುತ್ತಾರೆಂದು ನನಗೆ ಖಾತ್ರಿಯಿದೆ’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT