ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋನಿಯಾ, ಪವಾರ್, ಮಮತಾ ಬ್ಯಾನರ್ಜಿಗೆ ಕರೆ ಮಾಡಿ ಬೆಂಬಲ ಕೋರಿದ ದ್ರೌಪದಿ ಮುರ್ಮು

Last Updated 24 ಜೂನ್ 2022, 15:47 IST
ಅಕ್ಷರ ಗಾತ್ರ

ನವದೆಹಲಿ: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಪ್ರತಿಪಕ್ಷಗಳ ಪ್ರಮುಖ ನಾಯಕರಿಗೆ ದೂರವಾಣಿ ಕರೆ ಮಾಡಿ ತಮ್ಮ ಉಮೇದುವಾರಿಕೆಗೆ ಬೆಂಬಲ ಕೋರಿದ್ದಾರೆ.

ಮೂವರೂ ಮುರ್ಮು ಅವರಿಗೆ ಶುಭ ಹಾರೈಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಮುರ್ಮು ಅವರು ವೈಯಕ್ತಿಕವಾಗಿ ಬೆಂಬಲ ಕೋರಿ ಪ್ರತಿಪಕ್ಷಗಳ ವಿವಿಧ ನಾಯಕರಿಗೆ ಕರೆ ಮಾಡಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದ್ರೌಪದಿ ಮುರ್ಮು ಅವರು ಶುಕ್ರವಾರ ನಾಮಪತ್ರವನ್ನು ಚುನಾವಣಾಧಿಕಾರಿ ಪಿ.ಸಿ. ಮೋದಿ ಅವರಿಗೆ ಸಲ್ಲಿಸಿದರು. ಕೇಂದ್ರ ಸಚಿವರಾದ ರಾಜನಾಥ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಹಲವು ನಾಯಕರು ಮುರ್ಮು ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಯೋಗಿ ಆದಿತ್ಯನಾಥ್, ಶಿವರಾಜ್ ಸಿಂಗ್ ಚೌಹಾಣ್, ಮನೋಹರ್ ಲಾಲ್ ಕಟ್ಟರ್, ಜೈರಾಂ ಠಾಕೂರ್, ಪುಷ್ಕರ್ ಸಿಂಗ್ ಧಾಮಿ ಹಾಗೂ ಎನ್‌ಡಿಎ ಮಿತ್ರಪಕ್ಷಗಳಾದ ವೈಎಸ್‌ಆರ್‌ಸಿಪಿ, ಬಿಜೆಡಿ, ಎಐಎಡಿಎಂಕೆ ಮುಖಂಡರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬೆಂಬಲ ಕೋರಿದ ನಡ್ಡಾ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶುಕ್ರವಾರ ವಿರೋಧ ಪಕ್ಷಗಳ ನಾಯಕರಿಗೆ ಕರೆ ಮಾಡಿ, ದ್ರೌಪದಿ ಮುರ್ಮು ಅವರಿಗೆ ಬೆಂಬಲ ಕೋರಿದರು.

ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅಧೀರ್ ರಂಜನ್ ಚೌಧರಿ, ಮಾಜಿ ಪ್ರಧಾನಿ ಮತ್ತು ಜೆಡಿಎಸ್ ನಾಯಕ ಎಚ್.ಡಿ. ದೇವೇಗೌಡ, ನ್ಯಾಷನಲ್ ಕಾನ್ಫರೆನ್ಸ್‌ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಸೇರಿದಂತೆ ವಿರೋಧ ಪಕ್ಷಗಳ ಕೆಲವು ನಾಯಕರಿಗೆ ಕರೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT