ಭಾನುವಾರ, ಜೂನ್ 26, 2022
27 °C

ಉದ್ಯೋಗದ ಅರ್ಜಿ ಮೇಲೆ ಅಭ್ಯರ್ಥಿಗೆ ಕಾನೂನು ಹಕ್ಕಿಲ್ಲ: ‘ಸುಪ್ರೀಂ’

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಯು ನೇಮಕಾತಿ ಪ್ರಕ್ರಿಯೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು ಎಂದು ಒತ್ತಾಯಿಸುವ ಕಾನೂನುಬದ್ಧ ಹಕ್ಕನ್ನು ಹೊಂದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಅವರನ್ನೊಳಗೊಂಡ ನ್ಯಾಯಪೀಠವು, ಆಯ್ಕೆ ಪಟ್ಟಿಗೆ ತಮ್ಮನ್ನೇ ಸೇರಿಸಬೇಕು ಎಂಬುದರ ಬಗ್ಗೆಯೂ ಅಭ್ಯರ್ಥಿಗೆ ಯಾವುದೇ ಹಕ್ಕು ಇಲ್ಲ ಎಂದು ಹೇಳಿದೆ.

‘ಇದು ನೇರ ನೇಮಕಾತಿಯ ಪ್ರಕರಣವಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿ ನೇಮಕಾತಿ ಪ್ರಕ್ರಿಯೆಯನ್ನು ಅದರ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು ಎಂದು ಒತ್ತಾಯಿಸಲು ಕಾನೂನುಬದ್ಧ ಹಕ್ಕನ್ನು ಹೊಂದಿಲ್ಲ. ಆಯ್ಕೆ ಪಟ್ಟಿಯಲ್ಲಿ ಅಭ್ಯರ್ಥಿಯನ್ನು ಸೇರಿಸಿದರೂ ಅಂತಹ ಹಕ್ಕನ್ನು ಅಭ್ಯರ್ಥಿಗೆ ನೀಡಲಾಗುವುದಿಲ್ಲ’ ಎಂದು ನ್ಯಾಯಪೀಠ ಹೇಳಿದೆ.

ರಾಜ್ಯ ಕಾರ್ಮಿಕರ ವಿಮಾ ನಿಗಮದಿಂದ ನಡೆಸಲ್ಪಡುವ ಕಾಲೇಜುಗಳಿಗೆ ಸಹ ಪ್ರಾಧ್ಯಾಪಕರ ಹುದ್ದೆಗಳ ಜೊತೆಗೆ ಇತರ ಹುದ್ದೆಗಳನ್ನು ಭರ್ತಿ ಮಾಡಲು 2018ರ ಮಾರ್ಚ್ 1 ರಂದು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಜಾಹೀರಾತುಗಳನ್ನು ಹೊರಡಿಸಲಾಗಿತ್ತು. 2018ರ ಮಾರ್ಚ್ 21 ರಂದು ಆಡಳಿತಾತ್ಮಕ ಕಾರಣಗಳಿಗಾಗಿ ಸಹ ಪ್ರಾಧ್ಯಾಪಕ ಮತ್ತು ಪ್ರಾಧ್ಯಾಪಕರ ಹುದ್ದೆಗೆ ಸಂಬಂಧಿಸಿದಂತೆ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿತ್ತು. ಜಾಹೀರಾತಿನ ಪ್ರಕಾರ ಸಹ ಪ್ರಾಧ್ಯಾಪಕರ ಹುದ್ದೆಯನ್ನು ಭರ್ತಿ ಮಾಡಲು ನಿರ್ದೇಶನಗಳನ್ನು ಕೋರಿ ಅರ್ಜಿದಾರರಲ್ಲಿ ಒಬ್ಬರು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಯ ಮೊರೆ ಹೋಗಿದ್ದರು. ನ್ಯಾಯಮಂಡಳಿಯು ಅವರ ಪರವಾಗಿ ಆದೇಶವನ್ನು ಜಾರಿಗೊಳಿಸಿತ್ತು.

ಈ ಆದೇಶವನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದ್ದು, ರಿಟ್ ಅರ್ಜಿಯನ್ನು ವಜಾಗೊಳಿಸಿತ್ತು. 45 ದಿನಗಳಲ್ಲಿ ನೇಮಕಾತಿಯನ್ನು ಮುಕ್ತಾಯಗೊಳಿಸುವಂತೆ ಹೈಕೋರ್ಟ್ ನೀಡಿರುವ ನಿರ್ದೇಶನವು ಸಮರ್ಥನೀಯವಲ್ಲ ಎಂದೂ ಸುಪ್ರೀಂ ಕೋರ್ಟ್ ಹೇಳಿದೆ.

‘ಜಾಹೀರಾತನ್ನು ತಡೆಹಿಡಿಯಲಾಗಿರುವುದರಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿರುವ ಸಾಧ್ಯತೆಯಿದೆ. ಆದ್ದರಿಂದ 45 ದಿನಗಳೊಳಗೆ ವಿಚಾರಣೆ ಮುಗಿಸುವ ನಿರ್ದೇಶನ ಸಮರ್ಥನೀಯವಲ್ಲ’ ಎಂದು ನ್ಯಾಯಪೀಠ ಹೇಳಿದೆ.

‘ಎಲ್ಲರೂ ಅರ್ಜಿ ಸಲ್ಲಿಸಿದ್ದಾರೆ ಎಂಬ ಅಂಶವನ್ನು ನಿರ್ಲಕ್ಷ್ಯ ಮಾಡದೇ ಮೇಲ್ಮನವಿದಾರರು ನ್ಯಾಯೋಚಿತ ನಿರ್ಧಾರ ತೆಗೆದುಕೊಳ್ಳಬೇಕು. ಈ ಕುರಿತು ತೀರ್ಪು ಅನ್ನು ಬದಿಗಿಡುತ್ತೇವೆ. ಎಲ್ಲಾ ಸಂಬಂಧಿತ ಅಂಶಗಳನ್ನು ಪರಿಗಣಿಸಿ ಎರಡು ತಿಂಗಳ ಅವಧಿಯೊಳಗೆ ನಿರ್ಧಾರ ತೆಗೆದುಕೊಳ್ಳಬೇಕು’ ಎಂದು ನ್ಯಾಯಪೀಠವು ಮೇಲ್ಮನವಿದಾರರಿಗೆ ನಿರ್ದೇಶಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು