ಬುಧವಾರ, ಜನವರಿ 20, 2021
22 °C
ರಾಜಕೀಯ ಉದ್ದೇಶದಿಂದ ರಾಜ್ಯದ ಮುಖ್ಯ ಕಾರ್ಯದರ್ಶಿ, ಡಿಜಿಪಿಗೆ ಸಮನ್ಸ್‌

ಪಶ್ಚಿಮ ಬಂಗಾಳದಲ್ಲಿ ತುರ್ತು ಪರಿಸ್ಥಿತಿ ಹೇರುವ ಯತ್ನ: ಟಿಎಂಸಿ ಆರೋಪ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ತುರ್ತು ಪರಿಸ್ಥಿತಿ ಹೇರುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಪರೋಕ್ಷವಾಗಿ ಮಾಡುತ್ತಿದೆ ಎಂದು ಟಿಎಂಸಿ ದೂರಿದೆ.

ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ರಾಜಕೀಯ ಉದ್ದೇಶದಿಂದ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್‌ ಮಹಾನಿರ್ದೇಶಕರನ್ನು ದೆಹಲಿ ಆಗಮಿಸುವಂತೆ ಸಮನ್ಸ್‌ ನೀಡಲಾಗಿದೆ ಎಂದು ಲೋಕಸಭೆಯಲ್ಲಿನ ತೃಣಮೂಲ ಕಾಂಗ್ರೆಸ್‌ನ ಮುಖ್ಯಸಚೇತಕ ಕಲ್ಯಾಣ ಬ್ಯಾನರ್ಜಿ ದೂರಿದ್ದಾರೆ.

ಈ ವಿಷಯದ ಬಗ್ಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಭಲ್ಲಾ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯಕ್ಕೆ ಸಂಬಂಧಿಸಿದ ವಿಷಯದಲ್ಲಿ ಇಬ್ಬರು ಹಿರಿಯ ಅಧಿಕಾರಿಗಳನ್ನು ಚರ್ಚೆಗೆ ಕರೆದಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ರಾಜ್ಯಕ್ಕೆ ಸಂಬಂಧಿಸಿದ ವಿಷಯವಾಗಿದೆ. ಕೇಂದ್ರ ಗೃಹ ಸಚಿವರ ನಿರ್ದೇಶನದ ಮೇರೆಗೆ ಹಿರಿಯ ಅಧಿಕಾರಿಗಳಿಗೆ ಸಮನ್ಸ್‌ ನೀಡಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಬೆದರಿಕೆ ಹಾಕುವ ತಂತ್ರವನ್ನು ಕೇಂದ್ರ ಸರ್ಕಾರ ಅನುಸರಿಸುತ್ತಿದೆ ಎಂದು  ತಿಳಿಸಿದ್ದಾರೆ.

ಒಕ್ಕೂಟ ವ್ಯವಸ್ಥೆಯನ್ನು ಧಿಕ್ಕರಿಸಿ ಕೇಂದ್ರ ಸರ್ಕಾರವು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಧಾನಸಭೆಗೆ ಉತ್ತರದಾಯಿತ್ವವಾಗಿದೆಯೇ ಹೊರತು ನಿಮಗೆ ಅಥವಾ ನಿಮ್ಮ ಗೃಹ ಸಚಿವರಿಗೆ ಅಲ್ಲ ಎಂದು ದೂರಿದ್ದಾರೆ.

ಪ್ರಕರಣವೊಂದರಲ್ಲಿ ಅಪರಾಧಿಯಾಗಿದ್ದ ಮತ್ತು 59 ಇತರ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ ಎದುರಿಸುತ್ತಿರುವ ವ್ಯಕ್ತಿಯೊಬ್ಬ ನಡ್ಡಾ ಅವರ ಬೆಂಗಾವಲು ವಾಹನದಲ್ಲಿದ್ದ. ಈತ ರಸ್ತೆ ಬದಿಯಲ್ಲಿದ್ದ ಟಿಎಂಸಿ ಬೆಂಬಲಿಗರಿಗೆ ಪ್ರಚೋದನಾಕಾರಿ ಸನ್ನೆ ಮಾಡುತ್ತಿದ್ದ ಎಂದು ದೂರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು