ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ಈವರೆಗೆ 50 ಲಕ್ಷಕ್ಕೂ ಹೆಚ್ಚು ಮುನ್ನೆಚ್ಚರಿಕೆ ಡೋಸ್ ವಿತರಣೆ: ಮಾಂಡವಿಯ

Last Updated 18 ಜನವರಿ 2022, 16:13 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಈವರೆಗೆ 50 ಲಕ್ಷಕ್ಕೂ ಹೆಚ್ಚು ಮುನ್ನೆಚ್ಚರಿಕೆ ಡೋಸ್ (ಬೂಸ್ಟರ್ ಡೋಸ್) ಕೋವಿಡ್ ಲಸಿಕೆ ಅನ್ನು ಆರೋಗ್ಯ ಕಾರ್ಯಕರ್ತರು, ಮುಂಚೂಣಿಯ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗಿದೆ.

ಇದೊಂದು ಮೈಲಿಗಲ್ಲು ಎಂದು ಕರೆದಿರುವ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯ, ಎಲ್ಲಾ ಅರ್ಹರು ಮುನ್ನೆಚ್ಚರಿಕೆ ಡೋಸ್‌ ಪಡೆಯುವಂತೆ ಮನವಿ ಮಾಡಿದ್ದಾರೆ.

'ಮತ್ತೊಂದು ದಿನ, ಮತ್ತೊಂದು ಮೈಲಿಗಲ್ಲು. ಜ. 10 ರಿಂದ 50 ಲಕ್ಷಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟವರು ಮುನ್ನೆಚ್ಚರಿಕೆ ಡೋಸ್ ಅನ್ನು ಸ್ವೀಕರಿಸಿದ್ದಾರೆ. ಅರ್ಹರಾಗಿರುವ ಎಲ್ಲರಿಗೂ ತಮ್ಮ ಮುನ್ನೆಚ್ಚರಿಕೆ ಡೋಸ್ ಅನ್ನು ಶೀಘ್ರವಾಗಿ ಪಡೆಯಲು ನಾನು ವಿನಂತಿಸುತ್ತೇನೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.

ಒಟ್ಟಾರೆಯಾಗಿ 50,84,410 ಮುನ್ನೆಚ್ಚರಿಕೆ ಡೋಸ್‌ಗಳನ್ನು ಈವರೆಗೆ ನೀಡಲಾಗಿದೆ. ಇದರಲ್ಲಿ ಆರೋಗ್ಯ ಕಾರ್ಯಕರ್ತರಿಗೆ 19,92,671 ಡೋಸ್‌ಗಳು, ಮುಂಚೂಣಿ ಕಾರ್ಯಕರ್ತರಿಗೆ 16,85,446 ಡೋಸ್‌ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ 14,06,293 ಜನರಿಗೆ ಡೋಸ್‌ ನೀಡಲಾಗಿದೆ.

ರಾಷ್ಟ್ರೀಯ ಲಸಿಕಾ ಅಭಿಯಾನದ ಅಡಿಯಲ್ಲಿ ದೇಶದಲ್ಲಿ ಈವರೆಗೆ 158.04 ಕೋಟಿಗೂ ಹೆಚ್ಚು ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಮಂಗಳವಾರ ಬೆಳಗ್ಗಿನ ಆರೋಗ್ಯ ಸಚಿವಾಲಯದ ವರದಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶಾದಾದ್ಯಂತ ಸುಮಾರು 80 ಲಕ್ಷ ಡೋಸ್‌ಗಳನ್ನು ನೀಡಲಾಗಿದೆ.

ಡಿಸೆಂಬರ್ 25 ಕ್ರಿಸ್‌ಮಸ್ ದಿನದಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ್ದ ಪ್ರಧಾನಿ ಮೋದಿ, ಆರೋಗ್ಯ ಕಾರ್ಯಕರ್ತರು, ಮುಂಚೂಣಿಯ ಸೇನಾನಿಗಳು, ಜತೆಗೆ 60 ವರ್ಷ ಮೇಲ್ಪಟ್ಟವರಿಗೆ ವೈದ್ಯರ ಶಿಫಾರಸಿನ ಮೇರೆಗೆ ಜ. 10ರಿಂದ ಮುನ್ನಚ್ಚೆರಿಕೆ ಡೋಸ್ ನೀಡಲಾಗುವುದು ಎಂದು ಹೇಳಿದ್ದರು.

ಈ ಮಧ್ಯೆ 15 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಮೊದಲ ಡೋಸ್ ಆಗಿ ಒಟ್ಟು 3,59,30,929 ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಈ ವಯಸ್ಸಿನವರಿಗೆ ಲಸಿಕೆ ನೀಡುವ ಕಾರ್ಯಕ್ರಮವು ಜ. 3 ರಂದು ಪ್ರಾರಂಭವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT