ಮಾನಸಿಕ ಆರೋಗ್ಯ ಸಂಸ್ಥೆಗಳಲ್ಲಿ ಕನಿಷ್ಠ ಮಾನದಂಡಕ್ಕೆ ಒತ್ತಾಯಿಸಿ ಪಿಐಎಲ್ ಸಲ್ಲಿಕೆ

ನವದೆಹಲಿ: ಮಾನಸಿಕ ಆರೋಗ್ಯ ಕಾಯ್ದೆಯಡಿ ವಿವಿಧ ವರ್ಗದ ಮಾನಸಿಕ ಆರೋಗ್ಯ ಸಂಸ್ಥೆಗಳಲ್ಲಿ ಕನಿಷ್ಠ ಮಾನದಂಡಗಳನ್ನು ಕಾಯ್ದುಕೊಳ್ಳಲು ನಿಯಮಗಳನ್ನು ರೂಪಿಸುವಂತೆ ಕೋರಿ ಸಲ್ಲಿಸಲಾಗಿರುವ ಪಿಐಎಲ್ ಕುರಿತು ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ಎನ್ ಪಟೇಲ್, ನ್ಯಾಯಮೂರ್ತಿ ಪ್ರತೀಕ್ ಜಲಾನ್ ಅವರ ಪೀಠವು ಫೆಬ್ರುವರಿ 5ರೊಳಗೆ ನಿಯಮಗಳ ರೂಪಿಸುವ ಬಗ್ಗೆ ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.
‘ಈ ಹಿಂದೆಯೂ ಇದೇ ರೀತಿಯ ಅರ್ಜಿಯನ್ನು ಸಲ್ಲಿಸಲಾಗಿತ್ತು.ಆಗ ಹೈಕೋರ್ಟ್ ಈ ಬಗ್ಗೆ ಪರಿಶೀಲನೆ ನಡೆಸಿ ನಿರ್ಧಾರ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿ, ಅರ್ಜಿಯನ್ನು ವಜಾಗೊಳಿಸಿತ್ತು. ಆದರೆ ಕೇಂದ್ರ ಈ ಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಳ್ಳಲಿಲ್ಲ’ ಎಂದು ವಕೀಲ ಮತ್ತು ಮಾನಸಿಕ ಆರೋಗ್ಯ ಕಾರ್ಯಕರ್ತ ಗೌರವ್ ಕುಮಾರ್ ಬನ್ಸಾಲ್ ಅವರು ಪಿಐಎಲ್‌ನಲ್ಲಿ ಹೇಳಿದ್ದಾರೆ.
ಮಾನಸಿಕ ಆರೋಗ್ಯ ಸಂಸ್ಥೆಗಳಲ್ಲಿ ಕನಿಷ್ಠ ಮಾನದಂಡಗಳನ್ನು ಕಾಯ್ದುಕೊಳ್ಳಲು ನಿಯಮಗಳನ್ನು ರೂಪಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಅಕ್ಟೋಬರ್ 12 ರಂದು ಹೈ ಕೋರ್ಟ್ ಸೂಚಿಸಿತ್ತು. ಅದರಂತೆ ಕರಡು ಸಿದ್ಧವಾಗಿದೆ. ಅದನ್ನು ಆದಷ್ಟು ಬೇಗ ಪ್ರಕಟಿಸಲಾಗುವುದು ಎಂದು ಕೇಂದ್ರ ಹೇಳಿತ್ತು.
ಈ ಹಿನ್ನೆಲೆಯಲ್ಲಿ ನಿಯಮ ಪ್ರಕಟಿಸಲು ಎಷ್ಟು ಸಮಯ ಬೇಕು ಎಂದು ತಿಳಿಸುವಂತೆ ಪೀಠವು ಸೂಚಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.