ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸಚಿವ ಸಂಪುಟ ವಿಸ್ತರಣೆ: ಅಮಿತ್‌ ಶಾ, ಸಂತೋಷ್‌, ಮೋದಿ ಸುದೀರ್ಘ ಸಭೆ

ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ಜೋರಾಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಹಾಗೂ ಸಂಪುಟ ಸಚಿವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಇಂದು ಸಂಜೆ 5ಕ್ಕೆ ನಿಗದಿಯಾಗಿದ್ದ ಸಭೆ ರದ್ದಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಈಗಾಗಲೇ ಪ್ರಧಾನಿ ಮೋದಿ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರೊಂದಿಗೆ ಸುದೀರ್ಘ ಸಭೆಗಳನ್ನು ನಡೆಸಿದ್ದು, ಸಚಿವ ಸಂಪುಟ ವಿಸ್ತರಣೆಗೆ ಅಂತಿಮ ಸಿದ್ಧತೆ ನಡೆದಿದೆ ಎನ್ನಲಾಗಿದೆ.

'ಇಂದು ಮೋದಿ ಅವರು ಪ್ರಮುಖ ಸಚಿವರು ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಇವತ್ತಿನ ಸಭೆ ರದ್ದಾಗಿದೆ' ಎಂದು ಮೂಲಗಳಿಂದ ತಿಳಿದು ಬಂದಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಸಚಿವರ ಕಾರ್ಯವೈಖರಿ ಪರಿಶೀಲನಾ ಸಭೆಯಲ್ಲಿ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಸಚಿವರಾದ ಧರ್ಮೇಂದ್ರ ಪ್ರಧಾನ್‌, ಪ್ರಲ್ಹಾದ್‌ ಜೋಶಿ, ಪಿಯೂಷ್‌ ಗೋಯಲ್‌, ನರೇಂದ್ರ ಸಿಂಗ್‌ ತೋಮರ್‌ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇತ್ತು.

ಜೂನ್‌ 20ರಂದು ಸರ್ಕಾರದ ಕಾರ್ಯವೈಖರಿಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಸಚಿವರೊಂದಿಗೆ ಪರಿಶೀಲನಾ ಸಭೆ ನಡೆಸಿದ್ದರು.

ಅಮಿತ್ ಶಾ ಮತ್ತು ಸಂತೋಷ್‌ ಅವರು ಪ್ರಧಾನಿ ಮೋದಿ ಅವರ ನಿವಾಸದಲ್ಲಿ ಭಾನುವಾರ ಹಲವು ಗಂಟೆಗಳು ಚರ್ಚೆ ನಡೆಸಿದ್ದು, ಶೀಘ್ರದಲ್ಲೇ ಸಚಿವ ಸಂಪುಟ ಮರುರಚನೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿರುವುದಾಗಿ ಪಿಟಿಐ ವರದಿ ಮಾಡಿದೆ.

ಬುಧವಾರವೇ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂದೂ ತಿಳಿದು ಬಂದಿದೆ. ಆದರೆ, ಅಧಿಕೃತವಾಗಿ ಆ ಬಗ್ಗೆ ಮಾಹಿತಿ ದೊರೆತಿಲ್ಲ. ಎರಡನೇ ಬಾರಿಗೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಎರಡು ವರ್ಷಗಳ ಬಳಿಕ ಮೊದಲ ಬಾರಿಗೆ ಸಂಪುಟ ಮರುರಚನೆಯಾಗುತ್ತಿದೆ.

ಅಸ್ಸಾಂ ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಸರ್ಬಾನಂದ ಸೋನೊವಾಲ್‌, ಜ್ಯೋತಿರಾದಿತ್ಯ ಸಿಂದಿಯಾ, ಸುಶೀಲ್‌ ಮೋದಿ ಅವರ ಹೆಸರುಗಳು ಸಚಿವ ಸ್ಥಾನದ ಪಟ್ಟಿಯಲ್ಲಿ ಪ್ರಮುಖವಾಗಿವೆ.ದಿವಂಗತ ರಾಮ್‌ ವಿಲಾಸ್‌ ಪಾಸ್ವಾನ್‌ ಅವರ ಸೋದರ ಪಶುಪತಿ ಕುಮಾರ್‌ ಪರಾಸ್‌, ಪಶ್ಚಿಮ ಬಂಗಾಳ, ಉತ್ತರ ಪ್ರದೇಶದ ನಾಯಕರು ಹಾಗೂ ಬಿಜೆಪಿಯ ಮೈತ್ರಿ ಪಕ್ಷಗಳಾದ ಜೆಡಿ(ಯು) ಮತ್ತು ಅಪ್ನಾ ದಳದ ಪ್ರತಿನಿಧಿಗಳಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ.

ಪ್ರಸ್ತುತ ಕೇಂದ್ರ ಸಚಿವ ಸಂಪುಟವು ಮೋದಿ ಅವರನ್ನು ಹೊರತು ಪಡಿಸಿ 53 ಸಚಿವರನ್ನು ಒಳಗೊಂಡಿದೆ. ಗರಿಷ್ಠ 81 ಸಂಸದರಿಗೆ ಸಚಿವ ಸಂಪುಟ ಸೇರುವ ಅವಕಾಶವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT