ಸೋಮವಾರ, ಮೇ 17, 2021
23 °C

ಆಮ್ಲಜನಕ ಉತ್ಪಾದನೆ ಹೆಚ್ಚಳಕ್ಕೆ ಪ್ರಧಾನಿ ನರೇಂದ್ರ ಮೋದಿ ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್‌ನ ಹೊಸ ಪ್ರಕರಣಗಳು ವಿಪರೀತ ಮಟ್ಟದಲ್ಲಿ ಏರಿಕೆಯಾಗುತ್ತಿರುವ 12 ರಾಜ್ಯಗಳ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಸಚಿವಾಲಯಗಳ ಜತೆ ಶುಕ್ರವಾರ ಸಭೆ ನಡೆಸಿದ್ದಾರೆ. ಈ ರಾಜ್ಯಗಳಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಆಗುವ ಅಪಾಯವಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. ಹೀಗಾಗಿ, ‘ದೇಶದಲ್ಲಿ ವೈದ್ಯಕೀಯ ಗುಣಮಟ್ಟದ ಆಮ್ಲಜನಕದ ಉತ್ಪಾದನೆಯನ್ನು ಹೆಚ್ಚಿಸಿ’ ಎಂದು ಮೋದಿ ಅವರು ಸೂಚನೆ ನೀಡಿದ್ದಾರೆ.

ಅತಿಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿರುವ ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್, ಉತ್ತರ ಪ್ರದೇಶ, ದೆಹಲಿ. ಛತ್ತೀಸಗಡ, ಕರ್ನಾಟಕ, ಕೇರಳ, ತಮಿಳುನಾಡು, ಪಂಜಾಬ್‌, ಹರಿಯಾಣ ಮತ್ತು ರಾಜಸ್ಥಾನದಲ್ಲಿನ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಈ ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ಅಗತ್ಯವಿರುವ ಆಮ್ಲಜನಕದ ಪ್ರಮಾಣದ ಅಂದಾಜನ್ನು ಪ್ರಧಾನಿಗೆ ವಿವರಿಸಲಾಗಿದೆ. ಏಪ್ರಿಲ್ 20ರ ವೇಳೆಗೆ 4,880 ಟನ್‌, ಏಪ್ರಿಲ್ 25ರ ವೇಳೆಗೆ 5,619 ಟನ್ ಮತ್ತು ಏಪ್ರಿಲ್ 30 ವೇಳೆಗೆ  6,593 ಟನ್‌ ಆಮ್ಲಜನಕವನ್ನು ಹಂಚಿಕೆ ಮಾಡಲಾಗಿದೆ ಎಂದು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ

ದೇಶದ ಎಲ್ಲಾ ಆಮ್ಲಜನಕ ಘಟಕಗಳ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವಂತೆ ಪ್ರಧಾನಿ ಅವರು ಸೂಚಿಸಿದ್ದಾರೆ. ಈ ಘಟಕಗಳು 24 ಗಂಟೆಯೂ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಕೈಗಾರಿಕಾ ಆಮ್ಲಜನಕದ ಸಿಲಿಂಡರ್‌ಗಳನ್ನು, ವೈದ್ಯಕೀಯ ಆಮ್ಲಜನಕದ ಸಿಲಿಂಡರ್‌ಗಳಾಗಿ ಪರಿವರ್ತಿಸಲು ಅನುಮತಿ ನೀಡಲಾಗಿದೆ. ವಿದೇಶಗಳಿಂದ ಆಮ್ಲಜನಕ ಆಮದು ಮಾಡಿಕೊಳ್ಳಲು ಸಾಧ್ಯವೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಲು ವಾಣಿಜ್ಯ ಸಚಿವಾಲಯಕ್ಕೆ ಸೂಚಿಸಲಾಗಿದೆ ಎಂದು ಪ್ರಧಾನಿ ಕಾರ್ಯಾಲಯವು ಮಾಹಿತಿ ನೀಡಿದೆ.

ಕೈಗಾರಿಕಾ ವಲಯಕ್ಕೆ ಲಭ್ಯವಾಗುತ್ತಿರುವ ಹೆಚ್ಚುವರಿ ಆಮ್ಲಜನಕವನ್ನು ವೈದ್ಯಕೀಯ ವಲಯಕ್ಕೆ ಪೂರೈಕೆ ಮಾಡುವಂತೆ ಸಭೆಯಲ್ಲಿ ಸೂಚಿಸಲಾಗಿದೆ. ಆಮ್ಲಜನಕದ ಟ್ಯಾಂಕರ್‌ಗಳ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆಯಾಗದಂತೆ ಕ್ರಮ ತೆಗೆದುಕೊಳ್ಳಿ ಎಂದು ರಾಜ್ಯಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕ ಆರೋಗ್ಯ ರಕ್ಷಣೆಗೆ ಸಂಬಂಧಿಸಿದ ವಸ್ತುಗಳ ತಯಾರಿಕೆ ಮತ್ತು ಪೂರೈಕೆ ಮೇಲೆ ಯಾವುದೇ ನಿರ್ಬಂಧ ಹೇರಬಾರದು ಎಂದೂ ತಿಳಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು