ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್ ಜಯಂತಿ: ಸಂವಿಧಾನ ಶಿಲ್ಪಿಯನ್ನು ಸ್ಮರಿಸಿದ ಪ್ರಧಾನಿ ಮೋದಿ, ರಾಹುಲ್ 

Last Updated 14 ಏಪ್ರಿಲ್ 2022, 6:40 IST
ಅಕ್ಷರ ಗಾತ್ರ

ನವದೆಹಲಿ: ಡಾ.ಬಿ.ಆರ್.ಅಂಬೇಡ್ಕರ್‌ ಅವರ 131ನೇ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.

1891ರಲ್ಲಿ ಮಹಾರಾಷ್ಟ್ರದಲ್ಲಿ ದಲಿತ ಕುಟುಂಬದಲ್ಲಿ ಜನಿಸಿದ ಅಂಬೇಡ್ಕರ್ ಅವರು, ದೇಶದ ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರವಹಿಸಿದ್ದರು.

ಅಂಬೇಡ್ಕರ್ ಅವರು ದೇಶದ ಪ್ರಗತಿಗೆ ಅಳಿಸಲಾಗದ ಕೊಡುಗೆ ನೀಡಿದ್ದಾರೆ ಎಂದು ಮೋದಿ ಸ್ಮರಿಸಿದ್ದಾರೆ.

‘ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯಂದು ಅವರಿಗೆ ನಮನ ಸಲ್ಲಿಸುತ್ತೇನೆ. ಅವರು ಭಾರತದ ಪ್ರಗತಿಗೆ ಅಳಿಸಲಾಗದ ಕೊಡುಗೆಗಳನ್ನು ನೀಡಿದ್ದಾರೆ. ನಮ್ಮ ರಾಷ್ಟ್ರಕ್ಕಾಗಿ ಅವರ ಕನಸುಗಳನ್ನು ಈಡೇರಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುವ ದಿನ ಇದಾಗಿದೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

‘ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯಂದು ಅವರಿಗೆ ನಮನ ಸಲ್ಲಿಸುತ್ತೇನೆ. ಭಾರತಕ್ಕೆ ಬಲವಾದ ಆಧಾರ ಸ್ತಂಭವಾದ ನಮ್ಮ ಪವಿತ್ರ ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಅವರಿಗೆ ನನ್ನ ನಮನಗಳು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಸಮಾಜದಲ್ಲಿ ಸಮಾನತೆಯನ್ನು ಪ್ರತಿಪಾದಿಸುವ ಜೊತೆಗೆ ಶೋಷಿತ ಸಮುದಾಯಗಳ ಪರವಾಗಿ ನಿರಂತರವಾಗಿ ಹೋರಾಡಿದ ಡಾ. ಬಿ.ಆರ್‌. ಅಂಬೇಡ್ಕರ್ ಅವರ ಸಾಧನೆ ಹಾಗೂ ದೇಶ ನಿರ್ಮಾಣದಲ್ಲಿ ಅವರು ನೀಡಿದ ಕೊಡುಗೆ ಸದಾ ಸ್ಮರಣೀಯವಾಗಿರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

‘ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೂಲಕ ಜಾತ್ಯಾತೀತ ಮತ್ತು ಸಮಾಜವಾದಿ ಪ್ರಜಾಪ್ರಭುತ್ವದ ದೇಶ ಕಟ್ಟಲು ಡಾ. ಬಿ.ಆರ್ ಅಂಬೇಡ್ಕರ್ ಎಳೆದು ತಂದು ನಿಲ್ಲಿಸಿದ ವಿಮೋಚನಾ ರಥವನ್ನು ಮುಂದಕ್ಕೆ ಒಯ್ಯಲು ನಾವೆಲ್ಲ ಕೈಜೋಡಿಸೋಣ. ನಾಡಿನ ಜನತೆಗೆ ಅಂಬೇಡ್ಕರ್ ಜಯಂತಿಯ ಶುಭಾಶಯಗಳು’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಸಂವಿಧಾನ ಶಿಲ್ಪಿ, ಮಹಾನ್‌ ಜ್ಞಾನಿ, ಈ ಯುಗದ ಶ್ರೇಷ್ಠ ದಾರ್ಶನಿಕರಾದ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಜಯಂತಿ ದಿನದಂದು ಆ ಮಹಾನ್‌ ಚೇತನಕ್ಕೆ ನನ್ನ ಭಾವಪೂರ್ಣ ಪ್ರಣಾಮಗಳು’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ನಮ್ಮ ಸಂವಿಧಾನ ರಚನೆಯಲ್ಲಿ ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು ಮಹತ್ವದ ಪಾತ್ರವಹಿಸಿದ್ದಾರೆ. ಸಮಾಜದಲ್ಲಿ ಹಿಂದುಳಿದ ವರ್ಗಗಳ ಹಕ್ಕಿಗಾಗಿ ತಮ್ಮ ಇಡೀ ಜೀವನವನ್ನು ಮುಡಿಪಿಟ್ಟ ಶ್ರೇಷ್ಠ ವ್ಯಕ್ತಿತ್ವ ಅವರದು. ರಾಜಕೀಯ ಮುತ್ಸದ್ದಿ, ಮಹಾನ್ ನಾಯಕ ಡಾ.ಬಿ‌.ಆರ್ ಅಂಬೇಡ್ಕರ್ ಅವರ ಜನ್ಮದಿನದಂದು ಗೌರವಪೂರ್ವಕ‌ ನಮನಗಳು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT