ನವದೆಹಲಿ: ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಉತ್ತರ ಪ್ರದೇಶ ಕಾಂಗ್ರೆಸ್ ನಾಯಕರ ಜೊತೆ ಸೋಮವಾರ ಚುನಾವಣಾ ತಂತ್ರಗಾರಿಕೆಯ ಸಭೆ ನಡೆಸಿದರು.
ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಪ್ರಿಯಾಂಕಾ ಅವರು, ‘ಬಿಜೆಪಿ ಸರ್ಕಾರದ ದುರಾಡಳಿತ, ಬೆಲೆ ಏರಿಕೆ, ಕಾನೂನು ಸುವ್ಯವಸ್ಥೆ ಕುಸಿತ, ಕೊರೊನಾ ನಿರ್ವಹಣೆಯಲ್ಲಿ ಸರ್ಕಾರದ ವಿಫಲತೆಯ ಬಗ್ಗೆ ಬೀದಿ ಬೀದಿಗಳಲ್ಲಿ ಜನಾಂದೋಲನ ರೂಪಿಸಬೇಕು’ ಎಂದು ಕಾಂಗ್ರೆಸ್ ಮುಖಂಡರಿಗೆ ಕರೆ ನೀಡಿದ್ದಾರೆ.
‘ಅಲ್ಲದೇ ಉತ್ತರ ಪ್ರದೇಶದಲ್ಲಿ ರೈತರ ಆದಾಯ ಕುಸಿತಗೊಂಡಿದ್ದು, ಖರ್ಚು ಹೆಚ್ಚಾಗಿದೆ. ಇದರ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು’ ಎಂಬುದಾಗಿ ಪ್ರಿಯಾಂಕಾ ಅವರು ಚರ್ಚಿಸಿದರು ಎನ್ನಲಾಗಿದೆ.
ಉತ್ತರ ಪ್ರದೇಶ ಕಾಂಗ್ರೆಸ್ ನಾಯಕರಾದ ಅಜಯ್ ಕುಮಾರ್ ಲಲ್ಲು, ಸಲ್ಮಾನ್ ಖುರ್ಷಿದ್, ರಾಜೀವ್ ಶುಕ್ಲಾ, ಪ್ರಮೋದ್ ತಿವಾರಿ, ರಷಿದ್ ಅಲ್ವಿ ಅವರು ಸಭೆಯಲ್ಲಿ ಭಾಗವಹಿಸಿದ್ದರು.
ಬರಲಿರುವ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಲ್ಲದೇ ಅಧಿಕಾರ ಹಿಡಿಯುವ ವಿಶ್ವಾಸವನ್ನು ಆ ರಾಜ್ಯದ ಕಾಂಗ್ರೆಸ್ ಮುಖಂಡರು ವ್ಯಕ್ತಪಡಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.