ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.18ರಂದು ದೇಶವ್ಯಾಪ್ತಿ ರೈಲು ತಡೆ ಚಳವಳಿಗೆ ರೈತ ಸಂಘಟನೆಗಳ ಕರೆ

Last Updated 10 ಫೆಬ್ರುವರಿ 2021, 15:02 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರದ ವಿವಾದಿತ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿರುವ ರೈತ ಸಂಘಟನೆಗಳು, ಫೆಬ್ರುವರಿ 18ರಂದು ದೇಶವ್ಯಾಪಿ ನಾಲ್ಕು ತಾಸುಗಳ ರೈಲು ರೋಕೋ (ರೈಲು ತಡೆ) ಚಳವಳಿಯನ್ನು ಹಮ್ಮಿಕೊಳ್ಳುವುದಾಗಿ ಘೋಷಿಸಿದೆ.

ಫೆ.18ರಂದು ಮಧ್ಯಾಹ್ನ 12ರಿಂದ ಸಂಜೆ 4ರ ವರೆಗೆ ರೈಲು ತಡೆ:
ಈ ಕುರಿತು ಪ್ರಕಟಣೆ ಹೊರಡಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಫೆಬ್ರುವರಿ 18ರಂದು ಮಧ್ಯಾಹ್ನ 12ರಿಂದ ಸಂಜೆ 4ರ ವರೆಗೆ ದೇಶವ್ಯಾಪ್ತಿ ರೈಲ್ ರೋಕೋ (ರೈಲು ತಡೆ) ಚಳವಳಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದೆ.

ಫೆ.6ರಂದು ಕೇಂದ್ರ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಮೂರು ತಾಸುಗಳ ಚಕ್ಕಾ ಜಾಮ್ (ರಸ್ತೆ ತಡೆ) ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಇದರಿಂದ ದೆಹಲಿ, ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯಗಳನ್ನು ಹೊರತುಪಡಿಸಲಾಗಿತ್ತು.

ಫೆ.12ರಿಂದ ಟೋಲ್ ಸಂಗ್ರಹಣೆಗೂ ತಡೆ:
ರೈತರ ಪ್ರತಿಭಟನೆಗೆ ನೇತೃತ್ವ ವಹಿಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಈ ಕುರಿತು ಹೊರಡಿಸಿರುವ ಪ್ರಕಟಣೆಯಲ್ಲಿ, ರಾಜಸ್ಥಾನದಲ್ಲಿ ಫೆಬ್ರುವರಿ 12ರಿಂದ ಟೋಲ್ ಸಂಗ್ರಹಣೆಯನ್ನು ತಡೆಯೊಡ್ಡುವುದಾಗಿ ಘೋಷಿಸಿದೆ.

ಇತ್ಯರ್ಥಗೊಳ್ಳದ ಬಿಕ್ಕಟ್ಟು:
ಕಳೆದ ವರ್ಷ ನವೆಂಬರ್ 26ರಿಂದಲೇ ದೆಹಲಿ ಗಡಿ ಪ್ರದೇಶಗಳಲ್ಲಿ ಠಿಕಾಣಿ ಹೂಡಿರುವ ರೈತರು, ಕೊರೆಯುವ ಚಳಿಯನ್ನು ಲೆಕ್ಕಿಸದೆ ಕೃಷಿ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೇಂದ್ರ ಸರ್ಕಾರದ ಜೊತೆಗೆ 11 ಸುತ್ತಿನ ಮಾತುಕತೆ ನಡೆಸಿದರೂ ಬಿಕ್ಕಟ್ಟು ಇತ್ಯರ್ಥಗೊಂಡಿಲ್ಲ. ಈ ನಡುವೆ ಜನವರಿ 26 ಗಣರಾಜ್ಯೋತ್ಸವ ದಿನದಂದು ಹಮ್ಮಿಕೊಂಡಿದ್ದ ಟ್ರ್ಯಾಕ್ಟರ್ ಪೆರೇಡ್‌ನಲ್ಲಿ ಹಿಂಸಾಚಾರ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT