ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಶನಿವಾರ ತಡ ರಾತ್ರಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ ಲಷ್ಕರ್–ಎ–ತಯಬಾ (ಎಲ್‌ಇಟಿ) ಉಗ್ರ ಸಂಘಟನೆಗೆ ಸೇರಿದ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆ ದ್ರಬಗಾಮ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ. ಉಗ್ರರು ಪರಾರಿಯಾಗದಂತೆ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು. ಭಾನುವಾರ ಬೆಳಗಿನವರೆಗೂ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು ಮೂವರು ಉಗ್ರರು ಗುಂಡಿಗೆ ಬಲಿಯಾಗಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎನ್‌ಕೌಂಟರ್ ಆಗಿರುವ ಮೂವರೂ ಸ್ಥಳೀಯರಾಗಿದ್ದು, ಎಲ್‌ಇಟಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ.
'ಅವರಲ್ಲಿ ಒಬ್ಬನನ್ನು ಜುನೈದ್ ಶೀರ್ಗೋಜ್ರಿ ಎಂದು ಗುರುತಿಸಲಾಗಿದೆ. ಅವನು ಇದೇ ಮೇ 13ರಂದು ಪೊಲೀಸ್ ಅಧಿಕಾರಿ ರಿಯಾದ್ ಅಹ್ಮದ್ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದ.ಇನ್ನಿಬ್ಬರು ಫಾಜಿಲ್ ನಜೀರ್ ಭಟ್ ಮತ್ತು ಇರ್ಫಾನ್ ಅಹ್ಮದ್ ಮಲಿಕ್ ಎಂದು ಗುರುತಿಸಲಾಗಿದೆ' ಎಂದು ಟ್ವೀಟಿಸಿದ್ದಾರೆ.
ಉಗ್ರರ ಇರುವಿಕೆಯ ಬಗ್ಗೆ ಮಾಹಿತಿಯನ್ನು ಆಧರಿಸಿ ಶನಿವಾರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದವು. ಅದೇ ವೇಳೆ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಎರಡು ಎಕೆ 47 ರೈಫಲ್‌ಗಳು, ಒಂದು ಪಿಸ್ತೂಲ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿರುವುದಾಗಿ ಐಜಿಪಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.