ಪುಣೆ: ಕಿರುಕುಳ ಮತ್ತು ಬ್ಲಾಕ್‌ಮೇಲ್‌ಗೆ ಬೇಸತ್ತು 19 ವರ್ಷದ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಣೆಯ ದತ್ತವಾಡಿಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ಬೆಳಕಿಗೆ ಬಂದ ಎರಡನೇ ಪ್ರಕರಣ ಇದಾಗಿದೆ ಎಂದು ಗುರುವಾರ ಪೊಲೀಸರು ಹೇಳಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿಯು ವಿದ್ಯಾರ್ಥಿ ಸೆಪ್ಟೆಂಬರ್ 28 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಬ್ಲಾಕ್‌ಮೇಲ್ ಮಾಡುತ್ತಿದ್ದ ಎಂದು ಅವರ ಸಹೋದರ ಪೊಲೀಸರಿಗೆ ತಿಳಿಸಿದ್ದಾರೆ.
‘ಆಕ್ಷೇಪಾರ್ಹ ಚಿತ್ರಗಳನ್ನು ಬಹಿರಂಗ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪಿ, ಮೂರು ಬಾರಿ ತಲಾ ₹4,500 ಸುಲಿಗೆ ಮಾಡಿದ್ದಾನೆ’ ಎಂದು ಅವರ ಸಹೋದರ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ದತ್ತವಾಡಿಯಲ್ಲಿರುವ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅವರು ಹೇಳಿದ್ದಾರೆ.
ಘಟನೆ ಸಂಬಂಧ, ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ದತ್ತವಾಡಿ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಧನಕವಾಡಿ ಪ್ರದೇಶದ 23 ವರ್ಷದ ವ್ಯಕ್ತಿಯೊಬ್ಬರು ನಗ್ನ ವಿಡಿಯೊ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದರು. ಮಹಿಳೆಯ ಸೋಗಿನಲ್ಲಿ ವ್ಯಕ್ತಿಯನ್ನು ಪರಿಚಯಿಸಿಕೊಂಡು ನಗ್ನ ವಿಡಿಯೊ ಚಿತ್ರೀಕರಿಸಿದ್ದ ಆರೋಪಿಗಳು, ಅದನ್ನು ಇಟ್ಟುಕೊಂಡು ಬ್ಲಾಕ್‌ಮೇಲ್ ಮಾಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.