ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೂ ಹೋರಾಟ: ರಾಹುಲ್‌ ಗಾಂಧಿ

ನವದೆಹಲಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ
Last Updated 15 ಜನವರಿ 2021, 10:04 IST
ಅಕ್ಷರ ಗಾತ್ರ

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಕಾಂಗ್ರೆಸ್ ಪಕ್ಷ ಶುಕ್ರವಾರ ನವದೆಹಲಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತು.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶವ್ಯಾಪಿ ನಡೆಯುತ್ತಿರುವ ಆಂದೋಲನದ ಭಾಗವಾಗಿ ದೆಹಲಿ ಎಲ್‌ ಜಿ ನಿವಾಸದ ಹೊರಗೆ ನಡೆದ ಪ್ರತಿಭಟನೆಯಲ್ಲಿ ರಾಹುಲ್‌ ಗಾಂಧಿಯವರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ‘ಹೊಸ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವವರೆಗೂ ತಮ್ಮ ಪಕ್ಷ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ‘ ಎಂದು ಹೇಳಿದರು. ‌

‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಮೂರು ಕಾನೂನುಗಳು ರೈತರಿಗೆ ಯಾವುದೇ ರೀತಿಯಲ್ಲಿ ನೆರವಾಗುವುದಿಲ್ಲ, ಬದಲಿಗೆ ರೈತರ ಬದುಕನ್ನೇ ಮುಗಿಸಿಬಿಡುತ್ತವೆ. ಈ ಕಾಯ್ದೆಗಳು ಅಂಬಾನಿ ಮತ್ತು ಅದಾನಿಯವರಂತಹ ಕಾರ್ಪೊರೇಟ್‌ಗಳಿಗೆ ಅನುಕೂಲ ಮಾಡಿಕೊಡುವ ಗುರಿ ಹೊಂದಿವೆ‘ ಎಂದು ಆರೋಪಿಸಿದ ರಾಹುಲ್‌ ಗಾಂಧಿ, ‘ಇದೇ ಕಾರಣಕ್ಕಾಗಿ ನಾವು ರೈತರ ಪರ ಹೋರಾಟವನ್ನು ಬೆಂಬಲಿಸುತ್ತಿದ್ದೇವೆ‘ ಎಂದು ಹೇಳಿದರು.

ಬಿಜೆಪಿ ಸರ್ಕಾರ ರೈತ ವಿರೋಧಿ ಕಾನೂನುಗಳನ್ನು ಹಿಂದಕ್ಕೆ ಪಡೆಯಬೇಕು. ಎಲ್ಲಿವರೆಗೂ ಈ ಕಾಯ್ದೆಗಳನ್ನು ರದ್ದುಗೊಳಿಸುವುದಿಲ್ಲವೋ, ಅಲ್ಲಿವರೆಗೂ ಪಕ್ಷ ಹೋರಾಟ ಮುಂದುವರಿಸಲಿದೆ ಎಂದು ಪುನರುಚ್ಚರಿಸಿದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ರೈತರಿಂದ ಭೂಮಿಯನ್ನು ಕಸಿದುಕೊಳ್ಳಲು ಪ್ರಯತ್ನಿಸಿತು. ಆಗ ಕಾಂಗ್ರೆಸ್‌ ಪಕ್ಷ ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಈಗ ಬಿಜೆಪಿ ಮತ್ತು ಇತರೆ ಎರಡು ಮೂರು ಮಿತ್ರ ಪಕ್ಷಗಳು ಈ ಮೂರು ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ಮತ್ತೊಮ್ಮೆ ರೈತರ ಮೇಲೆ ಮುಗಿಬೀಳಲು ಮುಂದಾಗಿವೆ‘ ಎಂದು ದೂರಿದರು.

ಕಾಂಗ್ರೆಸ್ ಪಕ್ಷದ ದೇಶದ ಎಲ್ಲ ರಾಜ್ಯಧಾನಿಗಳಲ್ಲೂ ಈ ಪ್ರತಿಭಟನೆಯನ್ನು ನಡೆಸಲು ನಿರ್ಧರಿಸಿದೆ. ರಾಜಭವನಕ್ಕೆ ಮುತ್ತಿಗೆ ಹಾಕಲಿದೆ. ಇದೇ ವೇಳೆ ನಮ್ಮ ಪಕ್ಷ ತೈಲ ಬೆಲೆ ಏರಿಕೆ ವಿರುದ್ಧವೂ ಹೋರಾಟ ನಡೆಸಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT