ಶುಕ್ರವಾರ, ಡಿಸೆಂಬರ್ 2, 2022
20 °C

ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟು: ಸೋನಿಯಾಗೆ ಲಿಖಿತ ವರದಿ ನೀಡಿದ ಮಾಕನ್, ಖರ್ಗೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪಕ್ಷದ ವೀಕ್ಷಕರಾದ ಅಜಯ್ ಮಾಕನ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿಗೆ ವರದಿ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಅಕ್ಟೋಬರ್‌ 17ರಂದು ಚುನಾವಣೆ ನಡೆಯಲಿದೆ. ಗಾಂಧಿ ಕುಟುಂಬದವರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ವಾದ್ರಾ ಚುನಾವಣೆಯಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.

ಈ ಚುನಾವಣೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಅವರು ಸ್ಪರ್ಧಿಸಲು ಸಜ್ಜಾಗಿದ್ದರು. ಆದರೆ, ರಾಜ್ಯದ ಮುಂದಿನ ಸಿಎಂ ಆಯ್ಕೆ ವಿಚಾರವಾಗಿ ಅಲ್ಲಿನ ಕಾಂಗ್ರೆಸ್‌ ಶಾಸಕರಲ್ಲಿ ಒಡಕು ಮೂಡಿದೆ.

ಸಚಿನ್‌ ಪೈಲಟ್‌ ಅವರನ್ನು ಮುಂದಿನ ಸಿಎಂ ಎಂದು ಘೋಷಿಸಲು ಹೈಕಮಾಂಡ್‌ ಒಲವು ತೋರಿದೆ ಎಂದು ವರದಿಯಾದ ಬೆನ್ನಲ್ಲೇ, ಗೆಹಲೋತ್‌ ಬಣದ ಶಾಸಕರು ಸಾಮೂಹಿಕ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ.

ಅಷ್ಟಲ್ಲದೆ, ಹೈಕಮಾಂಡ್‌ ವೀಕ್ಷಕರನ್ನಾಗಿ ಕಳುಹಿಸಿದ್ದ ಮಾಕನ್‌ ಮತ್ತು ಖರ್ಗೆ ಅವರು ಭಾನುವಾರ ಸಂಜೆ ಕರೆದಿದ್ದ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಗೂ ಹಾಜರಾಗದೆ ಪ್ರತ್ಯೇಕ ಸಭೆ ನಡೆಸಿದ್ದಾರೆ.

ಈ ಬೆಳವಣಿಗೆಗಳ ಬಳಿಕ ಸೋಮವಾರ ರಾಜಸ್ಥಾನದಿಂದ ದೆಹಲಿಗೆ ವಾಪಸ್‌ ಆದ ಮಾಕನ್‌ ಮತ್ತು ಖರ್ಗೆ, ಸೋನಿಯಾ ಅವರನ್ನು ಭೇಟಿಯಾಗಿ ಬಿಕ್ಕಟ್ಟಿನ ಬಗ್ಗೆ ಮಾಹಿತಿ ನೀಡಿದ್ದರು. ಬಳಿಕ ಸೋನಿಯಾ ಅವರು ಲಿಖಿತ ವರದಿ ನೀಡುವಂತೆ ಸೂಚಿಸಿದ್ದರು.

ಅದರಂತೆ ಇಂದು ಇಬ್ಬರೂ ನಾಯಕರು ವಿಸ್ತೃತ ಲಿಖಿತ ವರದಿ ನೀಡಿದ್ದಾರೆ. ಪಕ್ಷದ ಶಿಸ್ತು ಉಲ್ಲಂಘಿಸಿರುವ ಶಾಸಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಇವನ್ನೂ ಓದಿ*

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು