ನವದೆಹಲಿ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (ಕೆಎಸ್‌ಡಿಎಲ್) ಲಂಚ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿರುವ ಲೋಕಾಯುಕ್ತದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಂಗೀಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಪೀಠದ ಮುಂದೆ ತುರ್ತು ವಿಚಾರಣೆಗೆ ಲೋಕಾಯುಕ್ತ ವಕೀಲರು ಮನವಿ ಮಾಡಿದ್ದರು. ಆದರೆ, ಸಾಂವಿಧಾನಿಕ ಪೀಠದ ಪ್ರಕರಣಗಳ ಕುರಿತಂತೆ ವಿಚಾರಣೆ ನಡೆಸುತ್ತಿರುವುದರಿಂದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠದ ಮುಂದೆ ವಿಷಯ ಪ್ರಸ್ತಾಪಿಸಲು ಸಿಜೆಐ ಸೂಚಿಸಿದರು.
ತಕ್ಷಣ ನ್ಯಾಯಮೂರ್ತಿ ಕೌಲ್ ನೇತೃತ್ವದ ಪೀಠಕ್ಕೆ ಧಾವಿಸಿದ ಲೋಕಾಯುಕ್ತ ಪರ ವಕೀಲರು, ತುರ್ತು ವಿಚಾರಣಾ ಪಟ್ಟಿಗೆ ಸೇರಿಸಲು ಮನವಿ ಮಾಡಿದರು. ಆದರೆ, ಅರ್ಜಿಯ ಶೀಘ್ರ ಇತ್ಯರ್ಥದ ಅಗತ್ಯ ಏನು ಎಂದು ನ್ಯಾಯಮೂರ್ತಿ ಕೌಲ್, ವಕೀಲರನ್ನು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ವಕೀಲರು, ಆರೋಪಿಯು ಹಾಲಿ ಶಾಸಕರಾಗಿದ್ದು, ಅವರ ಬಳಿಯಿದ್ದ ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ವಕೀಲರ ಮನವಿ ಪುರಸ್ಕರಿಸಿದ ನ್ಯಾಯಮೂರ್ತಿ ಕೌಲ್, ಸಾಧ್ಯವಾದಷ್ಟು ಬೇಗ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಸೂಚಿಸಿದರು.
ಮಧ್ಯಾಹ್ನ 2ಗಂಟೆಗೆ ವಿಚಾರಣೆ ನಡೆಸುವಂತೆ ವಕೀಲರು ಮರು ಮನವಿ ಮಾಡಿದಾಗ, ಇದು ಜಾಮೀನು ರದ್ದು ಅರ್ಜಿಯಾಗಿರುವುದರಿಂದ ಬಿಡುವಿನ ಸಮಯದಲ್ಲಿ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.