ಭಾನುವಾರ, ಏಪ್ರಿಲ್ 11, 2021
27 °C
ಹಿಂಸಾಚಾರ ಪ್ರಕರಣ

ಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ಬಂಧನ ವಾರಂಟ್‌ಗೆ ‘ಸುಪ್ರೀಂ’ ತಡೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: 2019ರ ಲೋಕಸಭಾ ಚುನಾವಣಾ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಮತ್ತು ಮಾಜಿ ಐಪಿಎಸ್ ಅಧಿಕಾರಿ ಭಾರತಿ ಘೋಷ್ ಅವರ ವಿರುದ್ಧ ಹೊರಡಿಸಲಾಗಿರುವ ಜಾಮೀನು ರಹಿತ ಬಂಧನದ ವಾರಂಟ್ ಅನ್ನು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಮುಗಿಯುವವರೆಗೂ ತಡೆ ಹಿಡಿಯುವಂತೆ ಸುಪ್ರೀಂಕೋರ್ಟ್‌ ಮಂಗಳವಾರ ನಿರ್ದೇಶಿಸಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಸ್ ಅಬ್ದುಲ್ ನಜೀರ್ ಮತ್ತು ಹೇಮಂತ್ ಗುಪ್ತಾ ಅವರನ್ನೊಳಗೊಂಡ ನ್ಯಾಯಪೀಠವು ಈ ಪ್ರಕರಣದಲ್ಲಿ ಘೋಷ್ ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೇಳಿದೆ.

ನ್ಯಾಯಾಲಯವು ಎರಡು ತಿಂಗಳ ನಂತರ ವಿಚಾರಣೆಗೆ ಈ ಪ್ರಕರಣವನ್ನು ಪಟ್ಟಿ ಮಾಡಿತು.

ಮಾಜಿ ಐಪಿಎಸ್‌ ಅಧಿಕಾರಿ ಆಗಿರುವ ಘೋಷ್‌ ಅವರು, ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಡೆರ್ಬಾ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅವರು 2019ರ ಲೋಕಸಭಾ ಚುನಾವಣೆಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಗೊಳಿಸಬೇಕು ಹಾಗೂ ಬಂಧನದ ವಾರಂಟ್‌ ತಡೆಹಿಡಿಯಬೇಕು ಎಂದು ಕೋರಿ ಸೋಮವಾರ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು.

ಡೆರ್ಬಾ ಕ್ಷೇತ್ರದಲ್ಲಿ ಘೋಷ್‌ ಅವರ ವಿರುದ್ಧ ತೃಣಮೂಲ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾಜಿ ಐಪಿಎಸ್‌ ಅಧಿಕಾರಿ ಹುಮಾಯೂನ್‌ ಕಬೀರ್‌ ಕಣಕ್ಕಿಳಿದಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು