ಕೋವಿಡ್ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತೆ ಪರಿಶೀಲಿಸಲು ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ: ಕೋವಿಡ್–19 ಆಸ್ಪತ್ರೆಗಳಲ್ಲಿ ಇರುವ ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.
ಆಸ್ಪತ್ರೆಗಳಲ್ಲಿ ಅಗ್ನಿ ಅವಘಡಗಳನ್ನು ತಡೆಯುವ ನಿಟ್ಟಿನಲ್ಲಿ ಈ ಪರಿಶೀಲನೆ ನಡೆಸುವಂತೆ ಅದು ಸೂಚಿಸಿದೆ.
ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠವು, ‘ಕೋವಿಡ್–19 ಆಸ್ಪತ್ರೆಗಳು ನಾಲ್ಕು ವಾರಗಳೊಳಗೆ ಅಗ್ನಿಶಾಮಕ ದಳದಿಂದ ಯಾವುದೇ ಆಕ್ಷೇಪವಿಲ್ಲ ಎಂದು ಸೂಚಿಸುವ ಎನ್‌ಒಸಿಯನ್ನು ಪಡೆಯಬೇಕು. ಇಲ್ಲದಿದ್ದರೆ ದಂಡನಾತ್ಮಕ ಕ್ರಮವನ್ನು ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿತು.
ಎನ್‌ಒಸಿ ಅವಧಿ ಮುಗಿದಿರುವ ಆಸ್ಪತ್ರೆಗಳು ಈ ನಾಲ್ಕು ವಾರಗಳಲ್ಲಿ ಅದನ್ನು ನವೀಕರಿಸಿಕೊಂಡು ಮಾಹಿತಿ ನೀಡಬೇಕು ಎಂದು ಪೀಠ ಹೇಳಿದೆ.
ಗುಜರಾತ್‌ನ ರಾಜ್‌ಕೋಟ್‌ನ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಹಲವು ರೋಗಿಗಳು ಮೃತಪಟ್ಟಿದ್ದರು. ಈ ಘಟನೆಯನ್ನು ಗಮನದಲ್ಲಿಟ್ಟುಕೊಂಡು ಪೀಠವು ರಾಜ್ಯಗಳಿಗೆ ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ನಿರ್ದೇಶನ ನೀಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.