ಬುಧವಾರ, ಮಾರ್ಚ್ 29, 2023
32 °C

ಕೌಟುಂಬಿಕ ದೌರ್ಜನ್ಯ ಎದುರಿಸುತ್ತಿರುವ ಮಹಿಳೆಯರಿಗೆ ಮೂಲಸೌಕರ್ಯ: ಸುಪ್ರೀಂ ನೋಟಿಸ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ದೇಶದಾದ್ಯಂತ ಪರಿಣಾಮಕಾರಿ ಕಾನೂನು ನೆರವು ನೀಡುವ ಹಾಗೂ ಮೂಲ ಸೌಕರ್ಯ ಕಲ್ಪಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್‌) ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌ ಸೋಮವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಮತ್ತು ಎಸ್. ರವೀಂದ್ರ ಭಟ್ ಅವರನ್ನೊಳಗೊಂಡ ಪೀಠ ಈ ಸಂಬಂಧ ಡಿಸೆಂಬರ್ 6ರೊಳಗೆ ಪ್ರತಿಕ್ರಿಯೆ ನೀಡುವಂತೆ, ಕೇಂದ್ರ ಸರ್ಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ವಾರ್ತಾ ಮತ್ತು ಪ್ರಸಾರ ಸಚಿವಾಲಯಕ್ಕೆ ನೋಟಿಸ್‌ ನೀಡಿದೆ.

’ಈ ಅರ್ಜಿಯ ಸಂಬಂಧ ನಾವು ಪ್ರತಿವಾದಿಗಳಿಗೆ ನೋಟಿಸ್ ನೀಡಿದ್ದೇವೆ. ಆದರೆ, ರಾಜ್ಯ ಸರ್ಕಾರಗಳಿಗೆ ನೋಟಿಸ್‌ ನೀಡಿಲ್ಲ. ಈ ಪ್ರಕರಣದ ಮೇಲ್ವಿಚಾರಣೆಗಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸುತ್ತೇವೆ’ ಎಂದು ನ್ಯಾಯಾಲಯ ಹೇಳಿದೆ. 

’ಕೌಟುಂಬಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ದೇಶದಾದ್ಯಂತ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಪರಿಣಾಮಕಾರಿ ಕಾನೂನು ನೆರವು ನೀಡಲು ಮತ್ತು ದೌರ್ಜನ್ಯ ನಡೆಸಿದ ಗಂಡ ಮತ್ತು ಮಾವನ ವಿರುದ್ಧ ದೂರು ದಾಖಲಿಸಲು ಮಹಿಳೆಗೆ ಸೂಕ್ತ ರಕ್ಷಣೆ ಒದಗಿಸಲು ಕೋರಿ ’ವಿ ದಿ ವುಮೆನ್ ಆಫ್ ಇಂಡಿಯಾ’ ಸಂಸ್ಥೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ನ್ಯಾಯಪೀಠ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. 

15 ವರ್ಷಗಳ ಹಿಂದೆ ’ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005’ ಜಾರಿಗೆ ಬಂದಿದ್ದರೂ ಭಾರತದಲ್ಲಿ ಮಹಿಳೆಯರ ವಿರುದ್ಧ ನಡೆಯುತ್ತಿರುವ ಕೌಟುಂಬಿಕ ದೌರ್ಜನ್ಯ ಅತ್ಯಂತ ಸಾಮಾನ್ಯ ಅಪರಾಧವಾಗಿದೆ’ ಎಂದು ಸಂಸ್ಥೆ ಸಲ್ಲಿಸಿರುವ ಮನವಿಯಲ್ಲಿ ಉಲ್ಲೇಖಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು