ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ಬಗ್ಗೆ ಮಹತ್ವದ ಆದೇಶ ನೀಡಿದ ಸುಪ್ರೀಂಕೋರ್ಟ್

ಹೈಕೋರ್ಟ್‌ ಒಪ್ಪಿಗೆ ಇಲ್ಲದೇ ಸರ್ಕಾರಗಳು ಪ್ರಕರಣಗಳನ್ನು ಹಿಂಪಡೆಯುವಂತಿಲ್ಲ
Last Updated 10 ಆಗಸ್ಟ್ 2021, 10:06 IST
ಅಕ್ಷರ ಗಾತ್ರ

ನವದೆಹಲಿ: ಸಂಸದರು ಹಾಗೂ ಶಾಸಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಗಳನ್ನು ಆಯಾ ರಾಜ್ಯಗಳ ಹೈಕೋರ್ಟ್‌ಗಳ ಅನುಮತಿ ಇಲ್ಲದೆಯೇ ಹಿಂಪಡೆಯುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಮಂಗಳವಾರ ಮಹತ್ವದ ಆದೇಶ ನೀಡಿದೆ.

ಅಲ್ಲದೇ, ಸಂಸದರು ಹಾಗೂ ಶಾಸಕರ ವಿರುದ್ಧದ ಪ್ರಕರಣಗಳ ವಿಚಾರಣೆ ಮುಗಿಯುವವರೆಗೆ, ಅವರ ವಿರುದ್ಧದ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಲಯಗಳ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಬಾರದು ಎಂದೂ ಸುಪ್ರೀಂಕೋರ್ಟ್‌ ಹೇಳಿದೆ.

ಬಿಜೆಪಿ ಮುಖಂಡ ಹಾಗೂ ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ್ದ ಪಿಐಎಲ್‌ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ, ನ್ಯಾಯಮೂರ್ತಿಗಳಾದ ವಿನೀತ್‌ ಸರನ್ ಹಾಗೂ ಸೂರ್ಯಕಾಂತ್ ಅವರಿರುವ ನ್ಯಾಯಪೀಠ ಈ ಆದೇಶ ನೀಡಿದೆ.

ರಾಜಕಾರಣಿಗಳ ವಿರುದ್ಧದ ಪ್ರಕರಣಗಳ ಮೇಲ್ವಿಚಾರಣೆಗಾಗಿ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಪೀಠ ಸ್ಥಾಪಿಸುವ ಚಿಂತನೆ ನಡೆದಿದೆ ಎಂದೂ ನ್ಯಾಯಪೀಠ ಹೇಳಿದೆ.

ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದರೆ, ಅವುಗಳ ಕುರಿತು ನಿಗದಿತ ನಮೂನೆಯಲ್ಲಿ ಮಾಹಿತಿ ಸಲ್ಲಿಸುವಂತೆ ಎಲ್ಲ ಹೈಕೋರ್ಟ್‌ಗಳ ರಿಜಿಸ್ಟ್ರಾರ್ ಜನರಲ್‌ ಅವರಿಗೆ ನಿರ್ದೇಶನ ನೀಡಲಾಗಿದೆ. ಬಾಕಿ ಇರುವ ಪ್ರಕರಣಗಳ ಸಂಖ್ಯೆ ಹಾಗೂ ಅವುಗಳ ವಿಚಾರಣೆ ಯಾವ ಹಂತಗಳಲ್ಲಿದೆ ಎಂಬ ಮಾಹಿತಿ ನೀಡುವಂತೆಯೂ ನ್ಯಾಯಪೀಠ ಸೂಚಿಸಿದೆ.

ಸಂಸದರು, ಶಾಸಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಗಳ ತ್ವರಿತ ವಿಚಾರಣೆಗೆ ನಿರ್ದೇಶನ ನೀಡುವಂತೆ ಕೋರಿ ಅಶ್ವಿನಿ ಉಪಾಧ್ಯಾಯ 2016ರಲ್ಲಿ ಪಿಐಎಲ್‌ ಸಲ್ಲಿಸಿದ್ದರು. ಶಿಕ್ಷೆಗೆ ಗುರಿಯಾದ ರಾಜಕಾರಣಿಗಳು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಶಾಶ್ವತ ನಿಷೇಧ ಹೇರಬೇಕು ಎಂದೂ ಅವರು ಅರ್ಜಿಯಲ್ಲಿ ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT