ಗುಜರಾತ್ ಹೈಕೋರ್ಟ್ ನಿರ್ದೇಶನಕ್ಕೆ ಸುಪ್ರೀಂಕೋರ್ಟ್ ತಡೆ

ನವದೆಹಲಿ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ನಿಯಮ ಉಲ್ಲಂಘಿಸಿದವರನ್ನು ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಸಮುದಾಯ ಸೇವೆಗಳಿಗೆ ಒಳಪಡಿಸುವಂತೆ ಗುಜರಾತ್ ಹೈಕೋರ್ಟ್ ನೀಡಿದ್ದ ನಿರ್ದೇಶನವನ್ನು ಸುಪ್ರೀಂಕೋರ್ಟ್ ಗುರುವಾರ ತಡೆಹಿಡಿದಿದೆ.
‘ಈ ಆದೇಶವು ಬಹಳ ಕಠಿಣವಾಗಿದೆ. ನಿಯಮ ಉಲ್ಲಂಘಿಸಿದವರನ್ನು ಕೋವಿಡ್ ಆರೈಕೆ ಕೇಂದ್ರದ ಸೇವೆಗಳಲ್ಲಿ ಒಳಪಡಿಸುವುದರಿಂದ ಅವರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ’ ಎಂದು ಗುಜರಾತ್ ಸರ್ಕಾರ ಅರ್ಜಿ ಸಲ್ಲಿಸಿತ್ತು.
ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್. ಸುಭಾಷ್ ರೆಡ್ಡಿ ಮತ್ತು ಎಂ.ಆರ್ ಶಾ ಅವರ ಪೀಠವು ಗುಜರಾತ್ ಹೈಕೋರ್ಟ್ ನಿರ್ದೇಶನವನ್ನು ತಡೆ ಹಿಡಿದಿದೆ. ಅಲ್ಲದೆ ಗುಜರಾತ್‌ನಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಅನುಸರಿಸುತ್ತಿಲ್ಲ ಎಂಬುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡಿರುವ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸಲಾಗುತ್ತಿದೆಯೇ ಎಂಬುದರ ಬಗ್ಗೆ ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಅವರು ಗಮನ ಹರಿಸಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.
ಈ ಬಗ್ಗೆ ಪೊಲೀಸ್ ಮತ್ತು ಸರ್ಕಾರಿ ಅಧಿಕಾರಿಗಳು ಕೂಡ ಪರಿಶೀಲಿಸಬೇಕು. ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.