ನವದೆಹಲಿ: ತನ್ನ ರಾಜಕೀಯ ವಿರೋಧಿಗಳನ್ನು ಹಣಿಯಲು ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸೇರಿದಂತೆ ಒಟ್ಟು 14 ವಿರೋಧ ಪಕ್ಷಗಳು ಸಲ್ಲಿಸಿರುವ ಅರ್ಜಿಯನ್ನು ಏಪ್ರಿಲ್ 5ಕ್ಕೆ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ.
ಡಿಎಂಕೆ, ಆರ್‌ಜೆಡಿ, ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್), ತೃಣಮೂಲ ಕಾಂಗ್ರೆಸ್ (ಟಿಎಂಸಿ), ಎನ್‌ಸಿಪಿ, ಜಾರ್ಖಂಡ್ ಮುಕ್ತಿ ಮೋರ್ಚಾ, ಜೆಡಿಯು, ಸಿಪಿಎಂ, ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಸಮಾಜವಾದಿ ಪಕ್ಷ ಹಾಗೂ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಪುರಸ್ಕರಿಸಿತು.
‘ಎನ್‌ಡಿಎ ಮೈತ್ರಿಕೂಟದ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಸಿಬಿಐ, ವಿರೋಧ ಪಕ್ಷಗಳ ನಾಯಕರ ವಿರುದ್ಧ ಶೇ 95ರಷ್ಟು ಪ್ರಕರಣಗಳನ್ನು ದಾಖಲಿಸಿವೆ. ಹೀಗಾಗಿ ಬಂಧನ ಪೂರ್ವ ಹಾಗೂ ಬಂಧನ ನಂತರದಲ್ಲಿ ಜಾಮೀನಿಗಾಗಿ ಅಗತ್ಯ ಮಾರ್ಗಸೂಚಿಯನ್ನು ಪ್ರಕಟಿಸಬೇಕು’ ಎಂದೂ ಸಿಂಘ್ವಿ ಅವರು ಕೋರಿದರು.
‘ಅರ್ಜಿಯನ್ನು ಏಪ್ರಿಲ್ 5ಕ್ಕೆ ವಿಚಾರಣೆಗೆ ಪಟ್ಟಿ ಮಾಡಿರುವುದಾಗಿ’ ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಹಾಗೂ ಜೆ.ಬಿ.ಪಾರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.