ಶನಿವಾರ, ಜನವರಿ 29, 2022
19 °C

ರೈತರ ಬಗ್ಗೆ ಕೇಂದ್ರ ಸರ್ಕಾರ ' ಸೂಕ್ಷ್ಮ ಸಂವೇದನೆ' ಹೊಂದಿಲ್ಲ: ಸೋನಿಯಾ ಗಾಂಧಿ

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 'ಕೇಂದ್ರ ಸರ್ಕಾರವು ರೈತರೆಡೆಗೆ ಸೂಕ್ಷ್ಮ ಸಂವೇದನೆಯನ್ನು ಹೊಂದಿಲ್ಲ ಮತ್ತು ಪ್ರಜಾಸತ್ತಾತ್ಮಕವಲ್ಲದ ರೀತಿಯಲ್ಲಿ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿದೆ' ಎಂದಿದ್ದಾರೆ.

ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಸೋನಿಯಾ ಗಾಂಧಿ ಮಾತನಾಡಿದರು. ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮೃತರಾಗಿರುವ 700 ರೈತರಿಗೆ ನಮನ ಸಲ್ಲಿಸಿದರು. ಸಭೆಯಲ್ಲಿ ರಾಹುಲ್ ಗಾಂಧಿ ಕೂಡ ಇದ್ದರು.

ಎಂಎಸ್‌ಪಿಗೆ ಕಾನೂನಿನ ಖಾತರಿ ಬೇಕೆನ್ನುವ ರೈತರ ಬೇಡಿಕೆಗೆ ಬೇಷರತ್ ಬೆಂಬಲವನ್ನು ಮುಂದುವರಿಸಿರುವ ಅವರು, ಪ್ರತಿಭಟನೆ ವೇಳೆ ಮೃತಪಟ್ಟ ರೈತರಿಗೆ ಪಕ್ಷದ ಸದಸ್ಯರು ಗೌರವ ಸೂಚಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: 

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮೃತಪಟ್ಟ ರೈತರ ಕುಟುಂಬಗಳಿಗೆ ಅಗತ್ಯ ಪರಿಹಾರ ನೀಡುವಂತೆ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಈ ಮಧ್ಯೆ ಪಕ್ಷದ ಸಂಸದ ರಾಹುಲ್ ಗಾಂಧಿ ಅವರು ಇತ್ತೀಚೆಗಷ್ಟೇ ಲೋಕಸಭೆಯಲ್ಲಿ ಪ್ರತಿಭಟನೆ ವೇಳೆ ಮೃತಪಟ್ಟಿದ್ದ ರೈತರ ಮಾಹಿತಿಯನ್ನು ಮುಂದಿಟ್ಟಿದ್ದರು.

'ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ವಿಸ್ತೃತ ಚರ್ಚೆ ನಡೆಯಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿದ್ದರೂ ಕೇಂದ್ರ ಸರ್ಕಾರ ಅದನ್ನು ಕಡೆಗಣಿಸುತ್ತಿದೆ' ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

'ರಾಜ್ಯಸಭೆ ಕಲಾಪದಿಂದ 12 ಮಂದಿ ಸದಸ್ಯರನ್ನು ಅಮಾನತು ಮಾಡಿರುವ ವಿಚಾರವು ' ಹಿಂದೆದೂ ಕಂಡಿಲ್ಲದ ಮತ್ತು ಒಪ್ಪಿಕೊಳ್ಳಲಾಗದ್ದು' ಎಂದು ಟೀಕಿಸಿರುವ ಅವರು, ಪಕ್ಷವು ಅವರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ. ಕೇಂದ್ರವು ಕೂಡಲೇ ಅವರ ಅಮಾನತು ಆದೇಶವನ್ನು ಹಿಂಪಡೆಯಬೇಕು' ಎಂದು ಒತ್ತಾಯಿಸಿದ್ದಾರೆ.

'ತನ್ನ ಆರ್ಥಿಕ ನಷ್ಟವನ್ನು ತುಂಬಿಕೊಳ್ಳಲು ದೇಶದ ಸಾರ್ವಜನಿಕ ಆಸ್ತಿಯನ್ನು ಮಾರುತ್ತಿರುವ ಮೋದಿ ನೇತೃತ್ವದ ಸರ್ಕಾರವು ಆರೋಪಿ ಸ್ಥಾನದಲ್ಲಿದೆ' ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು