ಬುಧವಾರ, ಫೆಬ್ರವರಿ 1, 2023
16 °C

ಲಖಿಂಪುರ –ಖೇರಿ ಪ್ರಕರಣ: ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಲಖಿಂಪುರ –ಖೇರಿ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಎಂಟು ವಾರಗಳ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಬುಧವಾರ ಆದೇಶ ಹೊರಡಿಸಿದೆ. 

ದೆಹಲಿ, ಉತ್ತರ ಪ್ರದೇಶದಲ್ಲಿ ಉಳಿಯಬಾರದು ಮತ್ತು ಜಾಮೀನಿನ ಮೇಲೆ ಬಿಡುಗಡೆಯಾದ ಒಂದು ವಾರದೊಳಗೆ ಉತ್ತರ ಪ್ರದೇಶವನ್ನು ತೊರೆಯುವಂತೆ ಮಿಶ್ರಾಗೆ ಸುಪ್ರೀಂ ಕೋರ್ಟ್ ಷರತ್ತು ವಿಧಿಸಿದೆ. 

ಇದೇ ವೇಳೆ ತಾವು ಉಳಿದುಕೊಳ್ಳುವ ಸ್ಥಳದ ಬಗ್ಗೆ ಸಂಬಂಧಪಟ್ಟ ನ್ಯಾಯಾಲಯಕ್ಕೆ ತಿಳಿಸುವಂತೆ ಆಶಿಶ್ ಮಿಶ್ರಾಗೆ ಕೋರ್ಟ್ ನಿರ್ದೇಶನ ನೀಡಿದೆ. 

ಆಶಿಶ್ ಮಿಶ್ರಾ ಅಥವಾ ಆತನ ಕುಟುಂಬದವರು ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ವಿಚಾರಣೆಯನ್ನು ವಿಳಂಬಗೊಳಿಸಲು ಪ್ರಯತ್ನಿಸಿದರೆ ಜಾಮೀನು ರದ್ದತಿಗೆ ಕಾರಣವಾಗಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಲಖಿಂಪುರ– ಖೇರಿ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಮಗ ಆಶಿಶ್‌ ಮಿಶ್ರಾ ಮತ್ತು ಇತರ 12 ಮಂದಿಯ ವಿರುದ್ಧ ಲಖನೌ ಜಿಲ್ಲಾ ನ್ಯಾಯಾಲಯ ದೋಷಾರೋಪ ಹೊರಿಸಿದೆ.

ಪ್ರಕರಣದ ಪ್ರಮುಖ ಆರೋಪಿ ಆಶಿಶ್‌ ಮಿಶ್ರಾ ಮತ್ತು ಉಳಿದ ಆರೋಪಿಗಳ ವಿರುದ್ಧ 302 (ಕೊಲೆ), 120 ಬಿ (ಕ್ರಿಮಿನಲ್‌ ಪಿತೂರಿ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ ಆರೋಪ ಹೊರಿಸಲಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಕಾಯ್ದೆ ರದ್ದಿಗೆ ಆಗ್ರಹಿಸಿ ಪ್ರತಿಭಟಿಸುತ್ತಿದ್ದವರ ಮೇಲೆ 2021ರ ಅಕ್ಟೋಬರ್‌ನಲ್ಲಿ ಕಾರು ಹರಿಸಿ ನಾಲ್ವರು ರೈತರು ಸೇರಿ ಒಟ್ಟು 8 ಮಂದಿಯನ್ನು ಹತ್ಯೆ ಮಾಡಿದ ಎಂಬ ಆರೋಪ ಆಶಿಶ್‌ ಮೇಲಿದೆ. ಪ್ರಕರಣ ಸಂಬಂಧ ಫೆಬ್ರುವರಿಯಲ್ಲಿ ಲಖನೌ ಪೀಠದ ಅಲಹಾಬಾದ್‌ ಹೈಕೋರ್ಟ್‌ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು