ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಜಾಬ್: ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

Last Updated 11 ಫೆಬ್ರುವರಿ 2022, 5:59 IST
ಅಕ್ಷರ ಗಾತ್ರ

ನವದೆಹಲಿ: ಹಿಜಾಬ್ ಕುರಿತಂತೆ ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸೂಕ್ತ ಸಂದರ್ಭದಲ್ಲಿ ವಿಚಾರಣೆಕೈಗೆತ್ತಿಕೊಳ್ಳುವುದಾಗಿ ನ್ಯಾಯಾಲಯ ಹೇಳಿದೆ.

‘ಹಿಜಾಬ್ ವಿವಾದದ ಕುರಿತಂತೆ ಕರ್ನಾಟಕದಲ್ಲಿ ಏನು ಆಗುತ್ತಿದೆ ಮತ್ತು ಹೈಕೋರ್ಟ್‌ನ ವಿಚಾರಣೆಯ ಬಗ್ಗೆ ಸುಪ್ರೀಂ ಕೋರ್ಟ್ ಗಮನಿಸುತ್ತಿದೆ. ಇದನ್ನು ರಾಷ್ಟ್ರೀಯ ವಿವಾದವನ್ನಾಗಿ ಮಾಡಬೇಡಿ. ಸೂಕ್ತ ಸಂದರ್ಭದಲ್ಲಿ ಮಧ್ಯಪ್ರವೇಶಿಸುತ್ತೇವೆ’ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳು ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದ್ದಾರೆ.

ಏನಿದು ಪ್ರಕರಣ?: ಹಿಜಾಬ್ ಕುರಿತಂತೆ ಅಂತಿಮ ತೀರ್ಪು ಹೊರಬೀಳುವವರೆಗೂ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಸೂಚಕ ಉಡುಪುಗಳನ್ನು ಧರಿಸಬಾರದು ಎಂಬ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.

ವಿದ್ಯಾರ್ಥಿಯೊಬ್ಬರು ಸಲ್ಲಿಸಿರುವ ಮನವಿಯಲ್ಲಿ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಹೈಕೋರ್ಟ್‌ನ ವಿಚಾರಣೆ ಮತ್ತು ಇದಕ್ಕೆ ಸಂಬಂಧಿಸಿದಂತೆ ತ್ರಿಸದಸ್ಯ ಪೀಠದ ಮುಂದೆ ನಡೆಯುತ್ತಿರುವ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡುವಂತೆ ಕೋರಲಾಗಿದೆ.

ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದೆ ಅವರ ಮೂಲಭೂತ ಹಕ್ಕನ್ನು ಮೊಟಕುಗೊಳಿಸಲು ಹೈಕೋರ್ಟ್ ಪ್ರಯತ್ನಿಸಿದೆ ಎಂದು ಮೇಲ್ಮನವಿಯಲ್ಲಿ ಪ್ರತಿಪಾದಿಸಲಾಗಿದೆ.

ಹೈಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದು, ಶಾಲಾ ಕಾಲೇಜುಗಳನ್ನು ಆರಂಭಿಸಲು ಸೂಚಿಸಿದೆ.

ಬುಧವಾರ ರಚನೆಯಾದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ನ್ಯಾಯಮೂರ್ತಿ ಜೆಎಂ ಖಾಜಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ಹೈಕೋರ್ಟ್‌ನ ತ್ರಿಸದಸ್ಯ ಪೂರ್ಣ ಪೀಠವು, ಈ ವಿಷಯವನ್ನು ಶೀಘ್ರವಾಗಿ ಇತ್ಯರ್ಥಪಡಿಸಬೇಬೇಕೆಂದು ಹೇಳಿದ್ದು, ಅಲ್ಲಿಯವರೆಗೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡಿಕೊಳ್ಳಬೇಕೆಂದು ಹೇಳಿದೆ.

'ಪ್ರಕರಣ ಇತ್ಯರ್ಥವಾಗುವವರೆಗೆ, ಧಾರ್ಮಿಕ ಸೂಚಕ ಉಡುಪುಗಳನ್ನು ಧರಿಸಲು ಒತ್ತಾಯಿಸಬಾರದು’ಎಂದು ಅವಸ್ಥಿ ಹೇಳಿದ್ದಾರೆ.

‘ಶಾಲಾ-ಕಾಲೇಜುಗಳನ್ನು ಪ್ರಾರಂಭಿಸೋಣ. ಆದರೆ ವಿಷಯ ಇತ್ಯರ್ಥವಾಗುವವರೆಗೆ ಯಾವುದೇ ವಿದ್ಯಾರ್ಥಿಯು ಧಾರ್ಮಿಕ ಉಡುಗೆ ತೊಡಲು ಒತ್ತಾಯಿಸಬಾರದು’ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT