ಭಾನುವಾರ, ಜನವರಿ 16, 2022
28 °C

ಕೋವಿಡ್ ಪರಿಹಾರ ಪರಿಶೀಲನೆಗೆ ಸಮಿತಿ ರಚನೆ: ಗುಜರಾತ್ ಸರ್ಕಾರಕ್ಕೆ ‘ಸುಪ್ರೀಂ’ ಚಾಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani
ನವದೆಹಲಿ: ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ವಿತರಿಸಲು ತನ್ನ ತೀರ್ಪಿಗೆ ಅನುಗುಣವಲ್ಲದ ರೀತಿಯಲ್ಲಿ ಪರಿಶೀಲನಾ ಸಮಿತಿಯನ್ನು ರಚಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಸೋಮವಾರ ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
 
‘ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ವಿತರಣೆಗೆ ಸಂಬಂಧಿಸಿದಂತೆ ವಿವಿಧ ರಾಜ್ಯ ಸರ್ಕಾರಗಳಿಂದ ದತ್ತಾಂಶ ಮತ್ತು ಕುಂದುಕೊರತೆ ಪರಿಹಾರ ಸಮಿತಿಗಳನ್ನು ರಚಿಸುವ ಬಗ್ಗೆ ಮಾಹಿತಿಯನ್ನು ಒದಗಿಸಬೇಕು’ ಎಂದು ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
 
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಶಿಫಾರಸಿನಂತೆ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ₹ 50 ಸಾವಿರ ಪರಿಹಾರ ನೀಡಲು ಅ. 4ರಂದು ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿತ್ತು.
 
ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಬಿ.ವಿ. ನಾಗರತ್ನ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ಗುಜರಾತ್ ಸರ್ಕಾರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಸುಪ್ರೀಂ ಕೋರ್ಟ್ ನಿರ್ದೇಶನದ ನಂತರ ತಿದ್ದುಪಡಿ ನಿರ್ಣಯವನ್ನು ಹೊರಡಿಸಲಾಗಿದೆ ಎಂದು ತಿಳಿಸಿದರು.
 
ಆದರೆ, ತನ್ನ ತೀರ್ಪಿಗೆ ಅನುಗುಣವಲ್ಲದ ರೀತಿಯಲ್ಲಿ ಪರಿಶೀಲನಾ ಸಮಿತಿಯನ್ನು ರಚಿಸಿರುವುದನ್ನು ನ್ಯಾಯಾಲಯವು ಗಮನಿಸಿದೆ ಎಂದು ನ್ಯಾಯಪೀಠವು ತಿಳಿಸಿತು.
 
ತಿದ್ದುಪಡಿ ನಿರ್ಣಯದಲ್ಲಿನ ಕೆಲ ಲೋಪವನ್ನು ತುಷಾರ್ ಮೆಹ್ತಾ ಒಪ್ಪಿಕೊಂಡರು. ಆಗ ನ್ಯಾಯಪೀಠವು ಗುಜರಾತ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತು. ನಂತರ ಪ್ರಕರಣದ ವಿಚಾರಣೆಯನ್ನು ನ. 29ಕ್ಕೆ ಮುಂದೂಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು