ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತನಿಖಾ ಸಂಸ್ಥೆಗಳು ವ್ಯಕ್ತಿ ಗುರಿಯಾಗಿಸುವುದು ಒಕ್ಕೂಟ ವ್ಯವಸ್ಥೆಗೆ ಹಾನಿ: ರಾವುತ್

Last Updated 27 ಜೂನ್ 2021, 12:22 IST
ಅಕ್ಷರ ಗಾತ್ರ

ಮುಂಬೈ: ಕೇಂದ್ರದ ತನಿಖಾ ಸಂಸ್ಥೆಗಳು ಮಹಾರಾಷ್ಟ್ರದಲ್ಲಿನ ಆಡಳಿತಾರೂಢ ಮೈತ್ರಿಕೂಟದ ನಾಯಕರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿರುವುದು ದೇಶದ ಒಕ್ಕೂಟ ವ್ಯವಸ್ಥೆಗೆ ಮಾಡುತ್ತಿರುವ ಹಾನಿ ಎಂದು ಶಿವಸೇನೆ ಸಂಸದ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಅವರಿಗೆ ಸಮನ್ಸ್‌ ನೀಡಿರುವ ಕುರಿತು ಪ್ರಶ್ನಿಸಿದ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.

ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರವು ಶಾಸಕರಿಗೆ ಅನಗತ್ಯವಾಗಿ ಇ.ಡಿ. ಕಿರುಕುಳ ನೀಡುತ್ತಿದೆ ಎಂಬುದನ್ನು ಎತ್ತಿ ತೋರಿಸಿದೆ. ಒಂದು ವೇಳೆ ದೂರುಗಳಿದ್ದಲ್ಲಿ ರಾಜ್ಯದ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ) ಅಥವಾ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತನಿಖೆ ಕೈಗೊಳ್ಳಬಹುದು. ಆದರೆ, ಉದ್ದೇಶಪೂರ್ವಕವಾಗಿ ನಾಯಕರನ್ನು ಗುರಿಯಾಗಿಸಲು ಕೇಂದ್ರದ ಏಜೆನ್ಸಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ಇದು ಇಲ್ಲಿ ಸರ್ಕಾರ ರಚಿಸಲಾಗದ ಅಸಮರ್ಥತೆಯ ಬಗೆಗಿನ ಹತಾಶೆಯನ್ನು ತೋರಿಸುತ್ತದೆ ಮತ್ತು ಇದು ಒಕ್ಕೂಟ ವ್ಯವಸ್ಥೆಗೆ ಹಾನಿಯನ್ನುಂಟು ಮಾಡುತ್ತದೆ' ಎಂದು ರಾವುತ್ ಆರೋಪಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ದೇವೇಂದ್ರ ಫಡಣವಿಸ್ ಅವರು ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಕೋಟಾವನ್ನು ಪುನಃಸ್ಥಾಪಿಸಲು ವಿಫಲವಾದರೆ ರಾಜಕೀಯದಿಂದ ಹೊರಗುಳಿಯುವುದಾಗಿ ಹೇಳಿರುವ ವಿಚಾರವಾಗಿ ಪ್ರತಿಕ್ರಿಯಿಸಿ, '2014 ರಲ್ಲಿ ಬಿಜೆಪಿ ಮುಖಂಡರು ಅಧಿಕಾರ ವಹಿಸಿಕೊಂಡ ನಂತರ ನಡೆದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ 'ಧಂಗರ್' ಸಮುದಾಯಕ್ಕೆ ಕೋಟಾ ಪಡೆಯುವುದಾಗಿ ಹೇಳಿದ್ದರು. ಆಗ ಐದು ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಏನು ಮಾಡಲಾಗಲಿಲ್ಲ' ಎಂದು ಹೇಳಿದರು.

'ಸಾಮಾಜಿಕ ಸಮಾನತೆಯನ್ನು ಖಾತರಿಪಡಿಸುವುದಕ್ಕಾಗಿ ಮೀಸಲಾತಿಯು ಅಸ್ತಿತ್ವದಲ್ಲಿದ್ದು, ದಯವಿಟ್ಟು ಸಾಮಾಜಿಕ ವ್ಯವಸ್ಥೆಯನ್ನು ರಾಜಕೀಯಗೊಳಿಸಬೇಡಿ. ನೀವು ಅಧಿಕಾರದಲ್ಲಿದ್ದರೂ ಅಥವಾ ವಿರೋಧ ಪಕ್ಷದಲ್ಲಿದ್ದರೂ ಕೂಡ ಸಮಾಜದ ವಂಚಿತ ವರ್ಗಗಳ ಸಮಸ್ಯೆಗಳನ್ನು ಪರಿಹರಿಸಲು ಜವಾಬ್ದಾರಿಯುತ ನಾಯಕರಾಗಿ ಪ್ರಯತ್ನಿಸಬೇಕು' ಎಂದರು.

ಒಬಿಸಿ ಕೋಟಾ ವಿಚಾರದ ಬಗ್ಗೆ ರಾಜ್ಯದ ವಿವಿಧ ಭಾಗಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಗಳ ಬಗ್ಗೆ ಕೇಳಿದ್ದಕ್ಕೆ ಉತ್ತರಿಸಿದ ಅವರು, 'ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಆಡಳಿತ ಪಕ್ಷ ಅಥವಾ ವಿರೋಧ ಪಕ್ಷದಲ್ಲಿದ್ದರೂ ಕೂಡ ಜವಾಬ್ದಾರಿಯುತವಾಗಿ ವರ್ತಿಸುವ ಅಗತ್ಯವಿದೆ. ಪ್ರತಿಯೊಬ್ಬರೂ ಕೋವಿಡ್ ನಿಯಮಗಳನ್ನು ಪಾಲಿಸುವ ಅಗತ್ಯವಿದೆ' ಎಂದು ರಾವುತ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT