ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

370ನೇ ವಿಧಿ ರದ್ಧು ಬಳಿಕ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಕೃತ್ಯಗಳು ಕಡಿಮೆ: ಕೇಂದ್ರ

Last Updated 9 ಮಾರ್ಚ್ 2021, 12:19 IST
ಅಕ್ಷರ ಗಾತ್ರ

ನವದೆಹಲಿ: 2019ರ ಆಗಸ್ಟ್‌ನಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಹಿಂಸಾಚಾರ ಗಮನಾರ್ಹವಾಗಿ ಕಡಿಮೆಯಾಗಿದೆ. ಮತ್ತು 2019ಕ್ಕೆ ಹೋಲಿಸಿದರೆ 2020ರಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ಭಯೋತ್ಪಾದಕ ಘಟನೆಗಳು ಕುಸಿತ ಕಂಡಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ 2019ರಲ್ಲಿ 594 ಘಟನೆಗಳು ನಡೆದಿದ್ದರೆ, 2020ರಲ್ಲಿ 244 ಭಯೋತ್ಪಾದಕ ಘಟನೆಗಳು ವರದಿಯಾಗಿವೆ. 2019ರಲ್ಲಿ 157 ಭಯೋತ್ಪಾದಕರು ಮೃತಪಟ್ಟಿದ್ದರೆ, 2020ರಲ್ಲಿ 221 ಭಯೋತ್ಪಾದಕರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ತಿಳಿಸಿದ್ದಾರೆ.

ಫೆಬ್ರುವರಿ 2021ರವರೆಗೆ, ಕೇಂದ್ರಾಡಳಿತ ಪ್ರದೇಶದಲ್ಲಿ 15 ಭಯೋತ್ಪಾದಕ ಘಟನೆಗಳು ನಡೆದಿದ್ದು, ಇದರಲ್ಲಿ 8 ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ 2020 ರಲ್ಲಿ 33 ಭದ್ರತಾ ಸಿಬ್ಬಂದಿ ಮತ್ತು ಆರು ನಾಗರಿಕರು ಮೃತಪಟ್ಟಿದ್ದಾರೆ ಮತ್ತು 2019ರಲ್ಲಿ 27 ಭದ್ರತಾ ಸಿಬ್ಬಂದಿ ಮತ್ತು ಐದು ನಾಗರಿಕರು ಸಾವಿಗೀಡಾಗಿದ್ದಾರೆ. ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ನಂತರ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಘಟನೆಗಳ ಸಂಖ್ಯೆ ಗಮನಾರ್ಹವಾಗಿ ಕಡಿಮೆಯಾಗಿದೆ' ಎಂದು ಸಚಿವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಭಯೋತ್ಪಾದನೆಯೆಡೆಗೆ ಬಗ್ಗೆ ಶೂನ್ಯ ಸಹಿಷ್ಣುತೆ ನೀತಿಯನ್ನು ಅಳವಡಿಸಿಕೊಂಡಿದೆ. ಭದ್ರತಾ ಪಡೆಗಳ ಕೈಗಳನ್ನು ಬಲಪಡಿಸುವುದು, ರಾಷ್ಟ್ರ ವಿರೋಧಿ ಶಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸುವುದು, ಭದ್ರತಾ ಪಡೆಗಳ ಹೆಚ್ಚಳ ಮತ್ತು ಶೋಧ ಕಾರ್ಯಾಚರಣೆಗಳನ್ನು ತೀವ್ರಗೊಳಿಸುವುದು ಸೇರಿಉಗ್ರರ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ವಿವಿಧ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.

ಭಯೋತ್ಪಾದಕರಿಗೆ ಬೆಂಬಲ ನೀಡಲು ಪ್ರಯತ್ನಿಸುವ ವ್ಯಕ್ತಿಗಳ ಬಗ್ಗೆಯೂ ಭದ್ರತಾ ಪಡೆಗಳು ನಿಗಾ ಇಡುತ್ತವೆ ಮತ್ತು ಅಂಥವರ ವಿರುದ್ಧ ಕ್ರಮ ಕೈಗೊಳ್ಳುತ್ತವೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT