ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಲ್ಕಿಸ್ ಬಾನು ಪ್ರಕರಣ: ಸುಪ್ರೀಂ ಕೋರ್ಟ್‌ ಕ್ರಮಕ್ಕೆ ಟಿಆರ್‌ಎಸ್‌ ಕವಿತಾ ಒತ್ತಾಯ

Last Updated 18 ಆಗಸ್ಟ್ 2022, 10:56 IST
ಅಕ್ಷರ ಗಾತ್ರ

ಹೈದರಾಬಾದ್‌: ಬಿಲ್ಕಿಸ್ ಬಾನು ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ನಿರ್ಧಾರ ನಾಚಿಕೆಗೇಡಿನ ಸಂಗತಿ ಎಂದು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ನಾಯಕಿ ಕೆ.ಕವಿತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಮಧ್ಯಪ್ರವೇಶಿಸಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್ ಅವರ ಪುತ್ರಿಯೂ ಆಗಿರುವ ಕವಿತಾ ಮನವಿ ಮಾಡಿದ್ದಾರೆ.

‘ಅತ್ಯಾಚಾರ ಹಾಗೂ ಕೊಲೆಯಂತಹ ಘೋರ ಅಪರಾಧಗಳನ್ನು ಎಸಗಿದವರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಬಿಡುಗಡೆಯ ಭಾಗ್ಯ ದೊರೆತಿದೆ. ಈ ನಿರ್ಧಾರವು ಸ್ವಾತಂತ್ರ್ಯ ದಿನದ ದೈವತ್ವಕ್ಕೆ ಕಳಂಕ ತಂದಿದೆ’ ಎಂದು ತೆಲಂಗಾಣ ವಿಧಾನ ಪರಿಷತ್ ಸದಸ್ಯರೂ ಆಗಿರುವ ಕವಿತಾ ವಾಗ್ದಾಳಿ ನಡೆಸಿದ್ದಾರೆ.

ನಾಗರಿಕರು ಕಾನೂನಿನ ಮೇಲಿನ ನಂಬಿಕೆ ಕಳೆದುಕೊಳ್ಳಬಾರದು. ಬಿಲ್ಕಿಸ್ ಬಾನು ಅನುಭವಿಸಿದ್ದನ್ನು ಬೇರೆ ಮಹಿಳೆ ಅನುಭವಿಸಬಾರದು. ಈ ನಾಚಿಕೆಗೇಡಿನ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.

ಅತ್ಯಾಚಾರಿಗಳು ಹಾಗೂ ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳಿಗೆ ಕ್ಷಮಾದಾನ ನೀಡಬಾರದು ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿಗಳನ್ನು ನೀಡಿದ್ದರೂ ಈ ಘಟನೆ ನಡೆದಿದೆ ಎಂಬುದಾಗಿ ಅವರು ಹೇಳಿದ್ದಾರೆ.

'ಐದು ತಿಂಗಳ ಗರ್ಭಿಣಿ ಬಿಲ್ಕಿಸ್ ಬಾನು ಮತ್ತು ಆಕೆಯ 3 ವರ್ಷದ ಮಗುವಿನ ಹತ್ಯೆ ಮಾಡಿದವರನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ಗುಜರಾತ್‌ನ ಬಿಜೆಪಿ ಸರ್ಕಾರವು ಅಮಾನವೀಯತೆಯನ್ನು ಪ್ರದರ್ಶಿಸಿದೆ. ಇದು ಕಾನೂನು ಹಾಗೂ ಮಾನವೀಯತೆಯ ವಿರುದ್ಧವಾಗಿದೆ' ಎಂದು ಹರಿಹಾಯ್ದಿದ್ದಾರೆ.

‘ಜೈಲಿನಿಂದ ಬಿಡುಗಡೆಯಾದ ನಂತರ ಅತ್ಯಾಚಾರಿಗಳಿಗೆ ಸಿಕ್ಕ ಸ್ವಾಗತವು ನ್ಯಾಯಯುತ ಸಮಾಜದ ಮುಖದ ಮೇಲೆ ಹೊಡೆದಂತಹ ಘಟನೆಯಾಗಿದೆ. ಈ ಅಪಾಯಕಾರಿ ಬೆಳವಣಿಗೆ ಪರಂಪರೆಯ ರೂಪವನ್ನು ಪಡೆಯುವ ಮೊದಲು ಇದನ್ನು ನಿಲ್ಲಿಸುವುದು ನಮ್ಮ ಕರ್ತವ್ಯವಾಗಿದೆ‘ ಕವಿತಾ ಹೇಳಿದ್ದಾರೆ.

ಇದನ್ನೂ ಓದಿ–ಗುಜರಾತ್‌ನಲ್ಲಿ ಅತ್ಯಾಚಾರಿಗಳ ಬಿಡುಗಡೆ: ಪಿಎಂ ಮೋದಿ ವಿರುದ್ಧ ರಾಹುಲ್‌ ಕಿಡಿ

ಬಿಲ್ಕಿಸ್‌ ಬಾನು ಮೇಲೆ ಅತ್ಯಾಚಾರ ಮತ್ತು ಅವರ ಕುಟುಂಬದ 7 ಮಂದಿಯ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 11 ಮಂದಿ ಕೈದಿಗಳಿಗೆ ಗುಜರಾತ್‌ ಸರ್ಕಾರವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ದಿನದಂದು ಶಿಕ್ಷೆ ಅವಧಿ ಕಡಿತಗೊಳಿಸಿ, ಬಿಡುಗಡೆ ಮಾಡಿತ್ತು.

ಬಿಲ್ಕಿಸ್‌ ಬಾನು ಮೇಲೆ 2002ರ ಗೋಧ್ರಾ ಹತ್ಯಾಕಾಂಡದ ನಂತರದಲ್ಲಿ 11 ಮಂದಿ ಅತ್ಯಾಚಾರ ನಡೆಸಿದ್ದರು. ಈ ಸಂದರ್ಭದಲ್ಲಿ ಅವರು 5 ತಿಂಗಳ ಗರ್ಭಿಣಿ ಆಗಿದ್ದರು. ಅಪರಾಧಿಗಳನ್ನು ಸ್ವಾಂತಂತ್ರ್ಯದ ದಿನವೇ ಬಿಡುಗಡೆ ಮಾಡಿರುವ ಗುಜರಾತ್‌ ಸರ್ಕಾರದ ಕ್ರಮವನ್ನು ವಿರೋಧ ಪಕ್ಷಗಳು, ಸಾಮಾಜಿಕ ಕಾರ್ಯಕರ್ತರು ಖಂಡಿಸಿದ್ದಾರೆ.

ಈ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಆರೋಪದ ಮೇಲೆ 11 ಮಂದಿಗೆ 2008ರ ಜ.21 ಮುಂಬೈ ವಿಶೇಷ ಸಿಬಿಐ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಅವರ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT