ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವೇಷ ಭಾಷಣ ತಡೆಯಲು ಏಕೆ ಕ್ರಮ ಇಲ್ಲ: ಸುಪ್ರೀಂ ಕೋರ್ಟ್‌

ರಾಜ್ಯ ಸರ್ಕಾರಗಳನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್‌
Last Updated 26 ಏಪ್ರಿಲ್ 2022, 19:31 IST
ಅಕ್ಷರ ಗಾತ್ರ

ನವದೆಹಲಿ: ‘ದ್ವೇಷ ಭಾಷಣಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ಯಾಕೆ ಕೈಗೊಂಡಿಲ್ಲ’ ಎಂದು ರಾಜ್ಯ ಸರ್ಕಾರಗಳನ್ನು ಸುಪ್ರೀಂಕೋರ್ಟ್‌ ಮಂಗಳವಾರ ಪ್ರಶ್ನಿಸಿದೆ.

‘ದ್ವೇಷ ಭಾಷಣಗಳನ್ನು ತಡೆಯುವ ಸಂಬಂಧ ನ್ಯಾಯಾಲಯ ಮಾರ್ಗಸೂಚಿಗಳನ್ನು ನೀಡಿದ್ದರೂ, ಇಂಥ ಘಟನೆಗಳು ಸಂಭವಿಸುತ್ತಲೇ ಇವೆ’ ಎಂದೂ ಅಸಮಾಧಾನ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್‌, ಅಭಯ್ ಎಸ್.ಓಕಾ ಹಾಗೂ ಸಿ.ಟಿ.ರವಿಕುಮಾರ್‌ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.

ರೂರ್ಕಿಯಲ್ಲಿ ಬುಧವಾರ ಧರ್ಮ ಸಂಸದ್‌ ಆಯೋಜಿಸಿರುವ ಹಿನ್ನೆಲೆಯಲ್ಲಿ ಪತ್ರಕರ್ತ ಕುರ್ಬಾನ್ ಅಲಿ ಹಾಗೂ ನಿವೃತ್ತ ನ್ಯಾಯಾಧೀಶೆ ಅಂಜನಾ ಪ್ರಕಾಶ್‌ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಪೀಠ ಈ ಅಸಮಾಧಾನ ಹೊರಹಾಕಿತು.

ಉತ್ತರಾಖಂಡ ಸರ್ಕಾರದ ಪರ ವಕೀಲ, ‘ಸರ್ಕಾರ ಕ್ರಮ ಕೈಗೊಳ್ಳಲಿದ್ದು, ವಿಶ್ವಾಸ ಇಡಿ’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಪ್ರತಿಯೊಬ್ಬರ ಮೇಲೂ ವಿಶ್ವಾಸ ಇದೆ. ಆದರೆ, ವಾಸ್ತವ ಬೇರೆಯೇ ಇದೆ’ ಎಂದು ಹೇಳಿತು.

‘ಅರ್ಜಿದಾರರು ಒಂದು ಸಮುದಾಯಕ್ಕೆ ಕಳಂಕ ಹಚ್ಚಲು ಯತ್ನಿಸುತ್ತಿದ್ದಾರೆ’ ಎಂದು ಉತ್ತರಾಖಂಡ ಸರ್ಕಾರ ಪರ ವಕೀಲರು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಇದು ಯಾವ ರೀತಿಯ ವಾದ’ ಎಂದು ಪ್ರಶ್ನಿಸಿತಲ್ಲದೇ, ‘ಇಂಥ ಘಟನೆಗಳು ಮರುಕಳಿಸಿದಲ್ಲಿ ಮುಖ್ಯಕಾರ್ಯದರ್ಶಿ ಖುದ್ದು ಹಾಜರಾಗುವಂತೆ ಸೂಚಿಸಬೇಕಾಗುತ್ತದೆ’ ಎಂದು ಎಚ್ಚರಿಸಿತು.

‘ರಾಜ್ಯದಲ್ಲಿ ನಡೆಯಲಿರುವ ಧಾರ್ಮಿಕ ಸಭೆಗಳಿಗೆ ಸಂಬಂಧಿಸಿ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕೃತ ಮಾಹಿತಿಯನ್ನು ಸಲ್ಲಿಸುವಂತೆ’ ಉತ್ತರಾಖಂಡ ಸರ್ಕಾರದ ಮುಖ್ಯಕಾರ್ಯದರ್ಶಿಗೆ ನಿರ್ದೇಶನ ನೀಡಿತು.

ಅರ್ಜಿದಾರರ ಪರ ವಕೀಲ ಕಪಿಲ್‌ ಸಿಬಲ್‌ ಅವರು ಬುಧವಾರ ಆಯೋಜಿಸಿರುವ ಕಾರ್ಯಕ್ರಮದ ಬಗ್ಗೆ ನ್ಯಾಯಪೀಠದ ಗಮನ ಸೆಳೆದರು.

ಹಿಜಾಬ್‌ ಮೇಲ್ಮನವಿ: ವಿಚಾರಣೆಗೆ ಸಮ್ಮತಿ

ನವದೆಹಲಿ: ಹಿಜಾಬ್ ನಿಷೇಧಿಸಿ ಕರ್ನಾಟಕ ಸರ್ಕಾರ ಹೊರಡಿಸಿದ್ದ ಆದೇಶದ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ರಾಜ್ಯ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿರುವ ಮೇಲ್ಮನವಿಗಳನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿ ನೀಡಿದೆ.

‘ಹಿಜಾಬ್‌ ನಿಷೇಧ ವಿರೋಧಿಸಿರುವ ಅರ್ಜಿಯ ತುರ್ತು ವಿಚಾರಣೆ ಅಗತ್ಯವಿದೆ’ ಎಂದು ಅರ್ಜಿದಾರರ ಪರ ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಅವರು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹಾಗೂ ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ , ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠದೆದುರು ಮೌಖಿಕವಾಗಿ ಪ್ರಸ್ತಾಪಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ, ‘ನಾವು ಈ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುತ್ತೇವೆ. ಒಂದೆರಡು ದಿನ ಕಾಯಿರಿ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT