ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಎ ವಿರೋಧಿ ಪ್ರತಿಭಟನಾಕಾರರ ಆಸ್ತಿ ಮುಟ್ಟುಗೋಲು ನೋಟಿಸ್ ಹಿಂಪಡೆದ ಯೋಗಿ ಸರ್ಕಾರ

Last Updated 18 ಫೆಬ್ರುವರಿ 2022, 5:23 IST
ಅಕ್ಷರ ಗಾತ್ರ

ಲಖನೌ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನಾಕಾರರಿಗೆ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ಸಂಬಂಧಿಸಿ ನೀಡಲಾಗಿದ್ದ ನೋಟಿಸ್‌ಗಳನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಹಿಂಪಡೆದಿದೆ.

2019ರ ಡಿಸೆಂಬರ್‌ನಲ್ಲಿ ನಡೆದಿದ್ದ ಸಿಎಎ ವಿರೋಧಿ ಪ್ರತಿಭಟನೆಗಳ ಸಂದರ್ಭ ಸಾರ್ವಜನಿಕ ಆಸ್ತಿ–ಪಾಸ್ತಿಗೆ ಹಾನಿ ಮಾಡಿದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಉತ್ತರ ಪ್ರದೇಶ ಸರ್ಕಾರ ನೋಟಿಸ್‌ಗಳನ್ನು ನೀಡಿತ್ತು.

ಇದಕ್ಕೆ ಸುಪ್ರೀಂ ಕೋರ್ಟ್ ಕಳೆದ ವಾರ ಅಸಮಾಧಾನ ವ್ಯಕ್ತಪಡಿಸಿತ್ತು. ಸರ್ಕಾರವು ಸರಿಯಾದ ಕ್ರಮವನ್ನು ಅನುಸರಿಸಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿತ್ತು. ಇದರ ಬೆನ್ನಲ್ಲೇ, ಎಲ್ಲ ನೋಟಿಸ್‌ಗಳನ್ನು ಹಿಂಪಡೆಯಲಾಗಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, ವಿವಿಧ ಜಿಲ್ಲೆಗಳ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟರು 274 ನೋಟಿಸ್‌ಗಳನ್ನು ನೀಡಿದ್ದರು. ಈ ಪೈಕಿ ಲಖನೌದಲ್ಲಿ 95 ನೋಟಿಸ್‌ ನೀಡಲಾಗಿತ್ತು.

‘ನೀವು ದೂರುದಾರರಾಗಿದ್ದೀರಿ, ನೀವೇ ಸಾಕ್ಷಿಯೂ ಆಗಿದ್ದೀರಿ, ನೀವೇ ಪ್ರಾಸಿಕ್ಯೂಟರ್ ಸಹ ಆಗಿದ್ದೀರಿ... ಬಳಿಕ ನೀವೇ ಜನರ ಆಸ್ತಿ ಮುಟ್ಟುಗೋಲು ಹಾಕಲು ಮುಂದಾಗುತ್ತೀರಿ. ಯಾವುದೇ ಕಾನೂನು ಇದಕ್ಕೆ ಅನುಮತಿ ನೀಡುತ್ತದೆಯೇ’ ಎಂದು ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರಿದ್ದ ಪೀಠ ಸರ್ಕಾರದ ಕಾನೂನು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿತ್ತು.

2019ರ ಡಿಸೆಂಬರ್‌ನಲ್ಲಿ ಉತ್ತರ ಪ್ರದೇಶದಲ್ಲಿ ನಡೆದಿದ್ದ ಸಿಎಎ ವಿರೋಧಿ ಪ್ರತಿಭಟನೆ ವೇಳೆ ಹಲವೆಡೆ ಸಾರ್ವಜನಿಕ ಆಸ್ತಿ–ಪಾಸ್ತಿಗೆ ಹಾನಿಯಾಗಿತ್ತು. ಈ ಹಾನಿಯನ್ನು ಪ್ರತಿಭಟನಾಕಾರರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಸರಿಪಡಿಸಿಕೊಳ್ಳುವುದಾಗಿ ಸರ್ಕಾರ ಘೋಷಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT