ಉನ್ನಾವ್‌ನಲ್ಲಿ ಮತ್ತೊಂದು ದುರಂತ: ಹೊಲದಲ್ಲಿ ದಲಿತ ಬಾಲಕಿಯರ ಶವಗಳು ಪತ್ತೆ

ಉನ್ನಾವ್(ಉತ್ತರ ಪ್ರದೇಶ): ಇಲ್ಲಿನ ಹೊಲವೊಂದರಲ್ಲಿ ಇಬ್ಬರು ಅಪ್ರಾಪ್ತ ದಲಿತ ಬಾಲಕಿಯರ ಮೃತದೇಹಗಳು ಪತ್ತೆಯಾಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ದನಕರುಗಳಿಗೆ ಮೇವು ತರಲು ಬುಧವಾರ ಸಾಯಂಕಾಲ ಹೊರಹೋದ ಮೂವರು ಬಾಲಕಿಯರು ವಾಪಸ್ಸು ಮನೆಗೆ ಹಿಂತಿರುಗಿಲ್ಲ. ಬಾಲಕಿಯರಿಗಾಗಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹೊಲಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಗಾಯಗೊಂಡ ಸ್ಥಿತಿಯಲ್ಲಿದ್ದ ಮೂವರು ಬಾಲಕಿಯರನ್ನು ಸ್ಥಳೀಯರು ಗುರುತಿಸಿದ್ದಾರೆ. ಪೊಲೀಸರ ಸಹಾಯದೊಂದಿಗೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ ಎಂಬುದಾಗಿ ಘೋಷಿಸಲಾಯಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ ಇನ್ನೊಬ್ಬ ಬಾಲಕಿಯನ್ನು ಉನ್ನಾವ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಕುಲಕರ್ಣಿ, 'ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ ಮತ್ತು ಇನ್ನೊಬ್ಬ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಸ್ಪಷ್ಟಪಡಿಸಿದ್ದಾರೆ.
ಬಾಲಕಿಯರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯರ ಸಾವಿನ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.