ಶುಕ್ರವಾರ, ಸೆಪ್ಟೆಂಬರ್ 17, 2021
30 °C

ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ 350-400 ಸ್ಥಾನ ಗೆ‌ಲ್ಲುತ್ತೇವೆ: ಅಖಿಲೇಶ್

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಲಖನೌ: ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷವು 350ರಿಂದ 400 ಸ್ಥಾನಗಳವರೆಗೆ ಜಯ ಸಾಧಿಸಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಯಾದವ್‌, 2022ರ ವಿಧಾನಸಭೆ ಚುನಾವಣೆಯಲ್ಲಿ ನಾವು 350 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದೆ. ಕಳೆದ ಚುನಾವಣೆ ವೇಳೆ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿರುವ ಬಿಜೆಪಿ ಸರ್ಕಾರದ ವಿರುದ್ಧ ಜನರು ಹೊಂದಿರುವ ಆಕ್ರೋಶವನ್ನು ಗಮನಿಸಿದರೆ ನಾವು 400 ಸ್ಥಾನಗಳನ್ನು ಗೆಲ್ಲಬಹುದಾಗಿದೆʼ‌ ಎಂದು ವಿಶ್ವಾಸ ವ್ಯಕ್ತಪಡಿಸಿದಾರೆ.

ಮುಂದಿನ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಹೇಗಿರಲಿದೆ ಎಂದು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,  ಬಿಜೆಪಿಯು ಯಾವುದೇ ಮ್ಯಾನಿಫೆಸ್ಟೋ (ಪ್ರಣಾಳಿಕೆ) ಹೊಂದಿಲ್ಲ. ಆದರೆ, ಮನಿ-ಫೆಸ್ಟೋ (ಹಣದ ಹಬ್ಬ) ಮಾಡಲಿದೆ. ಕಳೆದ ಸಮಾಜವಾದಿ ಸರ್ಕಾರದ ಅವಧಿಯಲ್ಲಿ ಜಾರಿಯಾಗಿದ್ದ ಯೋಜನೆಗಳಿಗೆ ಮರುನಾಮಕರಣ ಮಾಡಿರುವ ಬಿಜೆಪಿ, ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ ಏನನ್ನೂ ಮಾಡಿಲ್ಲʼ ಎಂದು ಆರೋಪಿಸಿದರು.

ಕೋವಿಡ್‌ ಔಷಧಗಳ ಕಳ್ಳಸಾಗಾಣೆ ವಿಚಾರದಲ್ಲಿ ರಾಜ್ಯವು ಮೊದಲ ಸ್ಥಾನದಲ್ಲಿದೆ ಎಂದು ಗಂಭೀರ ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ, ರಾಜ್ಯದಲ್ಲಿ ಲಾಕಪ್‌ ಡೆತ್‌ಗಳು, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗಿವೆ. ಕೆಲಸ ಕೇಳುವ ಯುವಕರ ಮೇಲೆ ಹಲ್ಲೆ ನಡೆಸುವುದೂ ಸೇರಿದಂತೆ ಮಹಿಳೆಯರಿಗೆ ಅಸುರಕ್ಷಿತ ತಾಣವಾಗಿ ರಾಜ್ಯವು ಬದಲಾಗಿದೆ ಎಂದು ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿರುದ್ಧವೂ ವಾಗ್ದಾಳಿ ನಡೆಸಿರುವ ಯಾದವ್‌, ʼಮುಖ್ಯಮಂತ್ರಿಗೆ ಲ್ಯಾಪ್‌ಟಾಪ್‌ ಬಳಸುವುದಕ್ಕೆ ಬರುವುದಿಲ್ಲ ಎಂಬ ಕಾರಣಕ್ಕೆ ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ವಿತರಿಸಿಲ್ಲʼ ಎಂದು ವ್ಯಂಗ್ಯವಾಗಿ ಕುಟುಕಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು