ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿರ್‌ಭೂಮ್‌ ಹಿಂಸಾಚಾರ: ಬಿಜೆಪಿ ವರದಿಯಿಂದ ಸಿಬಿಐ ತನಿಖೆಗೆ ಅಡ್ಡಿ –ಮಮತಾ ಆರೋಪ

Last Updated 30 ಮಾರ್ಚ್ 2022, 9:27 IST
ಅಕ್ಷರ ಗಾತ್ರ

ಕೋಲ್ಕತ್ತ: ಬಿರ್‌ಭೂಮ್‌ನಲ್ಲಿನ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಸತ್ಯಶೋಧನಾ ಸಮಿತಿಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಸಲ್ಲಿಸಿರುವ ವರದಿಯಿಂದ ಸಿಬಿಐ ತನಿಖೆಗೆ ಅಡ್ಡಿಯಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ವರದಿಯಲ್ಲಿ ಬಿರ್‌ಭೂಮ್‌ನ ಟಿಎಂಸಿ ಜಿಲ್ಲಾಧ್ಯಕ್ಷ ಅನುಬ್ರತಾ ಮೊಂಡಲ್ ಅವರ ಹೆಸರನ್ನು ಉಲ್ಲೇಖಿಸಲಾಗಿದೆ. ಇದು ಬಿಜೆಪಿಯ ಪ್ರತೀಕಾರದ ಮನೋಭಾವವನ್ನು ತೋರಿಸುತ್ತದೆ’ ಎಂದು ಮಮತಾ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯವರು ವರದಿಯಲ್ಲಿ ನಮ್ಮ ಪಕ್ಷದ (ಟಿಎಂಸಿ) ಜಿಲ್ಲಾಧ್ಯಕ್ಷರ ಹೆಸರನ್ನು ಉಲ್ಲೇಖಿಸಿದ್ದಾರೆ. ಇದು ಪಕ್ಷಪಾತ ಮತ್ತು ಸೇಡಿನ ವರ್ತನೆಯಾಗಿದೆ. ಅನುಬ್ರತಾ ಮೊಂಡಲ್ ಅವರನ್ನು ಬಂಧಿಸಬೇಕು ಎಂದು ಬಿಜೆಪಿಯವರು ಸಂಚು ರೂಪಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪ್ರಕರಣ ಕುರಿತು ಬಿಜೆಪಿ ಸಲ್ಲಿಸಿರುವ ವರದಿಯಿಂದಾಗಿ ಸಿಬಿಐ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿದಂತೆ ಆಗುತ್ತದೆ. ಬಿಜೆಪಿಯ ಈ ಧೋರಣೆಯನ್ನು ನಾನು ಖಂಡಿಸುತ್ತೇನೆ’ ಎಂದು ಹೇಳಿದ್ದಾರೆ.

ಸಿಬಿಐ ತನಿಖೆಯಲ್ಲಿ ಯಾವುದೇ ರಾಜಕೀಯ ಪಕ್ಷವೂ ಹಸ್ತಕ್ಷೇಪ ಮಾಡಬಾರದು ಎಂದು ಅವರು ತಿಳಿಸಿದ್ದಾರೆ.

ಮಾರ್ಚ್‌ 22ರಂದು ಬಿರ್‌ಭೂಮ್ ಜಿಲ್ಲೆಯ ರಾಮ್‌ಪುರಹಾಟ್‌ನ ಟಿಎಂಸಿ ಪಂಚಾಯಿತಿ ಸದಸ್ಯನ ಹತ್ಯೆ ನಡೆದಿತ್ತು. ಅದರ ಬೆನ್ನಲ್ಲೇ ಪಕ್ಕದ ಬೋಗ್‌ತುಇ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ಮನೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಕೃತ್ಯದಲ್ಲಿ 9 ಜನರು ಜೀವಂತವಾಗಿ ಸುಟ್ಟುಹಾಕಲಾಗಿತ್ತು. ಗಾಯಗೊಂಡಿದ್ದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಕಲ್ಕತ್ತ ಹೈಕೋರ್ಟ್‌ನ ಆದೇಶದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣದ ತನಿಖೆ ನಡೆಸುತ್ತಿದೆ. ಪಶ್ಚಿಮ ಬಂಗಾಳ ಸರ್ಕಾರ ರಚಿಸಿದ್ದ ಎಸ್‌ಐಟಿ ಈ ಹಿಂದೆ ಪ್ರಕರಣದ ತನಿಖೆ ನಡೆಸುತ್ತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT