ಶುಕ್ರವಾರ, ಅಕ್ಟೋಬರ್ 7, 2022
28 °C

ಇ.ಡಿ ಜಪ್ತಿ ಮಾಡಿದ ಹಣ ನನಗೆ ಸೇರಿದ್ದಲ್ಲ: ಮಾಜಿ ಸಚಿವ ಪಾರ್ಥ ಚಟರ್ಜಿ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ‘ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಜಪ್ತಿ ಮಾಡಿರುವ ಹಣ ನನಗೆ ಸೇರಿದ್ದಲ್ಲ. ನನ್ನ ವಿರುದ್ಧ ಷಡ್ಯಂತರ ನಡೆಸುತ್ತಿರುವವರು ಯಾರು ಎಂಬುದಕ್ಕೆ ಕಾಲವೇ ಉತ್ತರಿಸಲಿದೆ’ ಎಂದು ಮಾಜಿ ಸಚಿವ ಪಾರ್ಥ ಚಟರ್ಜಿ ಭಾನುವಾರ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಆರೋಗ್ಯ ತಪಾಸಣೆಗಾಗಿ ಅವರನ್ನು ಜೋಕಾದಲ್ಲಿರುವ ಇಎಸ್‌ಐ ಆಸ್ಪತ್ರೆಗೆ ಭಾನುವಾರ ಕರೆದುಕೊಂಡು ಬರಲಾಗಿತ್ತು. ಈ ವೇಳೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ‘ನನಗಾಗದವರು ನಡೆಸಿರುವ ಪಿತೂರಿಗೆ ಬಲಿಪಶುವಾಗಿದ್ದೇನೆ. ಪಕ್ಷದಿಂದ ಅಮಾನತು ಮಾಡಿರುವುದು ಬೇಸರ ತರಿಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಚಿವ ಸ್ಥಾನದಿಂದ ನನ್ನನ್ನು ವಜಾಗೊಳಿಸಿದ್ದಾರೆ. ಅವರ ನಿರ್ಧಾರ ಸರಿಯಾಗಿಯೇ ಇದೆ’ ಎಂದಿದ್ದಾರೆ. 

ಪಾರ್ಥ ಅವರ ಆಪ್ತೆ ಅರ್ಪಿತಾ ಮುಖರ್ಜಿಗೆ ಸೇರಿದ ಎರಡು ಫ್ಲ್ಯಾಟ್‌ಗಳಲ್ಲಿ ಶೋಧ ಕಾರ್ಯ ನಡೆಸಿದ್ದ ಇ.ಡಿ ಅಧಿಕಾರಿಗಳು ಕೋಟ್ಯಂತರ ನಗದು ಹಾಗೂ ಚಿನ್ನಾಭರಣ ಜಪ್ತಿ ಮಾಡಿದ್ದರು. 

‘ಬಂಧನದ ನಂತರ ಪಾರ್ಥ ಅವರು ಏಕೆ ಮೌನವಾಗಿದ್ದಾರೆ. ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ತಾವು ನಿರಪರಾಧಿ ಎಂಬುದನ್ನು ಸಾಬೀತುಪಡಿಸಲಿ. ಹಗರಣಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಕುನಾಲ್‌ ಘೋಷ್‌ ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು