ಬುಧವಾರ, ಡಿಸೆಂಬರ್ 1, 2021
20 °C
ಪ್ರಮೋದ್‌ ಸಾವಂತ್‌ ವಿರುದ್ಧ ಭ್ರಷ್ಟಾಚಾರದ ಆರೋಪ; ಪ್ರಧಾನಿಗೆ ಮಾಹಿತಿ ನೀಡಿದ್ದ ಸತ್ಯಪಾಲ್‌ ಮಲಿಕ್‌

ಭ್ರಷ್ಟಾಚಾರ ಆರೋಪ: ಗೋವಾ ಸಿ.ಎಂ ವಿರುದ್ಧ ಕ್ರಮ ಏಕಿಲ್ಲ -ಕಾಂಗ್ರೆಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರನ್ನು ವಜಾಗೊಳಿಸಬೇಕು ಎಂದು ಕಾಂಗ್ರೆಸ್‌ ಮಂಗಳವಾರ ಒತ್ತಾಯಿಸಿದೆ.

ಗೋವಾದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ಅವರು ಸಾವಂತ್‌ ಅವರ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿರುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಗೋವಾ ಸರ್ಕಾರದ ಮುಖ್ಯಮಂತ್ರಿ ಸಾವಂತ್‌ ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ.

‘ಗೋವಾ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಲು ಸಮಿತಿ ರಚಿಸಬೇಕು. ಕಾಲಮಿತಿಯಲ್ಲಿ ತನಿಖೆ ನಡೆಸಬೇಕು’ ಎಂದು ಕಾಂಗ್ರೆಸ್‌ನ ಮುಖ್ಯ ವಕ್ತಾರ ರಣದೀಪ್‌ ಸುರ್ಜೇವಾಲ ಹಾಗೂ ಪಕ್ಷದ ಗೋವಾ ಉಸ್ತುವಾರಿ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಅಗತ್ಯ ವಸ್ತುಗಳನ್ನು ಮನೆ-ಮನೆಗೆ ಮಾರಾಟ ಮಾಡಲು ಕೇವಲ ಒಂದು ಕಂಪನಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಇದರಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಪ್ರಧಾನಿಗೆ ತಿಳಿಸಿದ ನಂತರ ಗೋವಾ ರಾಜ್ಯಪಾಲ ಹುದ್ದೆಯಿಂದ ತಮ್ಮನ್ನು ವಜಾಗೊಳಿಸಲಾಯಿತು ಎಂದು ಹೇಳಿದ್ದಾರೆ. ಲಾಕ್‌ಡೌನ್ ಸಮಯದಲ್ಲಿ ಗಣಿಗಾರಿಕೆ ಲಾರಿಗಳಿಗೆ ಅನುಮತಿ ನೀಡಲಾಗಿತ್ತು. ಅದು ಸೋಂಕು ಹರಡಲು ಪ್ರಮುಖ ಕಾರಣವೂ ಆಗಿದೆ ಎಂದು ಪ್ರಸ್ತುತ ಮೇಘಾಲಯದ ರಾಜ್ಯಪಾಲರಾಗಿರುವ ಮಲಿಕ್ ಅವರು ಹೇಳಿದ್ದಾರೆ.

‘ದೊಡ್ಡ ಪ್ರಮಾಣದಲ್ಲಿಯೇ ಭ್ರಷ್ಟಾಚಾರ ನಡೆದಿದೆ. ಈ ಕುರಿತ ಆರೋಪಗಳ ಬಗ್ಗೆ ಮಾಹಿತಿ ಇದ್ದರೂ ಪ್ರಧಾನಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ, ಆದರೆ, ಮಾಹಿತಿ ನೀಡಿದವರ ವಿರುದ್ಧ ಕ್ರಮ ಜರುಗಿಸಿದ್ದಾರೆ’ ಎಂದು ಸುರ್ಜೇವಾಲ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. 

‘ಪ್ರಧಾನಿ ಕ್ರಮ ಕೈಗೊಳ್ಳದಿದ್ದರೆ, ಚೌಕಿದಾರ್‌ ಚೋರ್ ಎಂಬ ಅನುಮಾನ ಬರುತ್ತದೆ. ಪ್ರಧಾನಿ ಅವರು ಏಕೆ ಕ್ರಮ ತೆಗೆದುಕೊಳ್ಳಲಿಲ್ಲ? ಭ್ರಷ್ಟರನ್ನು ಅವರು ರಕ್ಷಿಸುತ್ತಿದ್ದಾರೆ. ಸಾವಂತ್ ಅವರಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯುವ ನೈತಿಕ ಹಕ್ಕಿಲ್ಲ’ ಎಂದು ದಿನೇಶ್‌ ಗುಂಡೂರಾವ್‌ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು