ಗುರುವಾರ , ಆಗಸ್ಟ್ 11, 2022
28 °C

ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಎಂಸಿ ತೊರೆದ ಯಶವಂತ ಸಿನ್ಹಾ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆಯುತ್ತಿರುವುದಾಗಿ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಹೇಳಿದ್ದಾರೆ.

ಪ್ರತಿಪಕ್ಷಗಳಿಂದ ರಾಷ್ಟ್ರಪತಿ ಚುನಾವಣೆಗೆ ಜಂಟಿ ಅಭ್ಯರ್ಥಿಯಾಗಿ ಆಯ್ಕೆಯಾಗಬೇಕಿದ್ದರೆ ಪಕ್ಷದ ಸದಸ್ಯತ್ವ ತೊರೆಯಬೇಕು ಎಂದು ಕಾಂಗ್ರೆಸ್ ಮತ್ತು ಎಡಪಕ್ಷಗಳು ಆಗ್ರಹಿಸಿದ್ದವು. ಹೀಗಾಗಿ ಪ್ರತಿಪಕ್ಷಗಳ ಸಭೆಗೂ ಮುನ್ನವೇ ಸಿನ್ಹಾ ಅವರು ಟಿಎಂಸಿ ತೊರೆಯುವ ನಿರ್ಧಾರ ಕೈಗೊಂಡಿದ್ದಾರೆ.

ಇದನ್ನೂ ಓದಿ: 

‘ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪಕ್ಷದಲ್ಲಿ ನನಗೆ ನೀಡಿದ ಗೌರವ ಮತ್ತು ಪ್ರತಿಷ್ಠೆಗೆ ಆಭಾರಿಯಾಗಿದ್ದೇನೆ. ರಾಷ್ಟ್ರೀಯ ಹಿತಾಸಕ್ತಿಗಾಗಿ ಮತ್ತು ಪ್ರತಿಪಕ್ಷಗಳ ಒಗ್ಗಟ್ಟಿಗಾಗಿ ನಾನು ಪಕ್ಷ ತ್ಯಜಿಸಬೇಕಾದ ಅನಿವಾರ್ಯತೆ ಎದುರಾಗಿದೆ. ನನ್ನ ನಿರ್ಧಾರವನ್ನು ಅವರು (ಮಮತಾ) ಗೌರವಿಸುತ್ತಾರೆ ಎಂಬ ಭರವಸೆ ಇದೆ’ ಎಂದು ಸಿನ್ಹಾ ಟ್ವೀಟ್ ಮಾಡಿದ್ದಾರೆ.

ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮಹಾತ್ಮ ಗಾಂಧಿ ಅವರ ಮೊಮ್ಮಗ, ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರು ಸೋಮವಾರ ನಿರಾಕರಿಸಿದ್ದರು. ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಸಹ ಚುನಾವಣೆಯಲ್ಲಿ ಸ್ಪರ್ಧಿಸಲು ನೀಡಿದ್ದ ಪ್ರಸ್ತಾವವನ್ನು ಈ ಹಿಂದೆಯೇ ತಿರಸ್ಕರಿಸಿದ್ದಾರೆ. ಹೀಗಾಗಿ ಪ್ರತಿಪಕ್ಷಗಳು ಯಶವಂತ ಸಿನ್ಹಾ ಅವರನ್ನು ಜಂಟಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಚಿಂತನೆ ನಡೆಸಿವೆ ಎಂದು ಸೋಮವಾರ ವರದಿಯಾಗಿತ್ತು.

ಬಿಜೆಪಿಯ ಮಾಜಿ ನಾಯಕ ಸಿನ್ಹಾ ಅವರು ಕಳೆದ ವರ್ಷ ತೃಣಮೂಲ ಕಾಂಗ್ರೆಸ್‌ಗೆ (ಟಿಎಂಸಿ) ಸೇರ್ಪಡೆಯಾಗಿದ್ದರು. ರಾಷ್ಟ್ರಪತಿ ಚುನಾವಣೆಗೆ ಸಿನ್ಹಾ ಅವರನ್ನು ಜಂಟಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ವಿರೋಧ ಪಕ್ಷಗಳ ಕೆಲವು ನಾಯಕರು ಪ್ರಸ್ತಾಪಿಸಿದ್ದು, ಬೆಂಬಲವನ್ನೂ ವ್ಯಕ್ತಪಡಿಸಿದ್ದಾರೆ ಎಂದು ಟಿಎಂಸಿಯ ಹಿರಿಯ ನಾಯಕರೊಬ್ಬರು ಸೋಮವಾರ ತಿಳಿಸಿದ್ದರು.

ಇವನ್ನೂ ಓದಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು