ಸೋಮವಾರ, ಜುಲೈ 26, 2021
22 °C
ಡಿಜಿಟಲ್ ಕಲಿಕಾ ಯೋಜನೆಯಡಿ ₹ 163 ಕೋಟಿ ವೆಚ್ಚ: ಮುಖ್ಯಮಂತ್ರಿ

‘1.55 ಲಕ್ಷ ವಿದ್ಯಾರ್ಥಿಗಳಿಗೆ ‘ಟ್ಯಾಬ್‌’ ವಿತರಣೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕೋವಿಡ್ ಸಂದರ್ಭದಲ್ಲಿ ಕಲಿಕೆಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಡಿಜಿಟಲ್ ಕಲಿಕಾ ಯೋಜನೆಯಡಿ ₹ 163 ಕೋಟಿ ವೆಚ್ಚದಲ್ಲಿ ಸರ್ಕಾರಿ ಕಾಲೇಜುಗಳ 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ವಿತರಿಸಲಾಗುತ್ತಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ವಿಧಾನಸೌಧ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ಮಾರ್ಟ್ ತರಗತಿಗಳ ಉದ್ಘಾಟಿಸಿ ಮತ್ತು ಕೆಲವು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಟ್ಯಾಬ್ಲೆಟ್ ಪಿಸಿ ವಿತರಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 87 ಸರ್ಕಾರಿ ಪಾಲಿಟೆಕ್ನಿಕ್ ಹಾಗೂ 14 ಸರ್ಕಾರಿ  ಎಂಜಿನಿಯರಿಂಗ್ ಕಾಲೇಜುಗಳಲ್ಲಿ ₹ 27.77 ಕೋಟಿ ವೆಚ್ಚದಲ್ಲಿ 2,500 ಸ್ಮಾರ್ಟ್ ತರಗತಿಗಳ ಸ್ಥಾಪಿಸಲಾಗಿದೆ. ಪ್ರತಿ ಸ್ಮಾರ್ಟ್ ತರಗತಿಯಲ್ಲಿ ಮಲ್ಟಿ ಮೀಡಿಯಾ ಪ್ರೊಜೆಕ್ಟರ್, ಯುಪಿಎಸ್, ಅಂಡ್ರಾಯ್ಡ್‌ ಬಾಕ್ಸ್, ವೈ-ಫೈ ಅಳವಡಿಸಲಾಗಿದ್ದು, ಬಹುಮಾಧ್ಯಮಗಳ ಬಳಕೆ ಮಾಡಲಾಗುವುದು’ ಎಂದರು.

‘ನಗರ ಹಾಗೂ ಗ್ರಾಮೀಣ ಪ್ರದೇಶದ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತಾರತಮ್ಯ ಇಲ್ಲದೆ ಕಲಿಕೆ ನಿರಂತರವಾಗಿ ಮುಂದುವರಿಸಲು ಮತ್ತು ಉನ್ನತ ಶಿಕ್ಷಣದಿಂದ ವಂಚಿತರಾಗದೆ ವಿದ್ಯಾರ್ಥಿಗಳು ಭವಿಷ್ಯ ಕಟ್ಟಿಕೊಳ್ಳಲು ಈ ಯೋಜನೆ ಅನುಕೂಲ ಆಗಲಿದೆ’ ಎಂದರು.

ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ‘ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ಗಳ ಮೂಲಕ ಕಲಿಕಾ ನಿರ್ವಹಣಾ ವ್ಯವಸ್ಥೆ ಮಾಡಿರುವ ದೇಶದ ಮೊದಲ ರಾಜ್ಯ ಕರ್ನಾಟಕ’ ಎಂದರು.

‘ಉನ್ನತ ಶಿಕ್ಷಣದಲ್ಲಿ ಮುಂಚೂಣಿಯಲ್ಲಿರುವ ತಂತ್ರಜ್ಞಾನದ ಅವಿಷ್ಕಾರ ಎಲ್ಲ ವಿದ್ಯಾರ್ಥಿಗಳಿಗೆ ಉಪಯೋಗವಾಗಬೇಕು. ಈಗಿನ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಕಲಿಕೆಯನ್ನು ಕಸಿದುಕೊಂಡಂತೆ ಆಗಬಾರದು ಎನ್ನುವ ದೃಷ್ಟಿಯಿಂದ ಆಧುನಿಕ ಉಪಕರಣಗಳನ್ನು ಅಳವಡಿಸಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ
ಶಿಕ್ಷಣ ನೀಡಲು ಪ್ರಯತ್ನಿಸಲಾಗುತ್ತಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು