ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು– ಮೈಸೂರು ನಡುವಿನ ದಶಪಥ ಕಾಮಗಾರಿ ವೈಜ್ಞಾನಿಕವಾಗಿಲ್ಲ: ಸುಮಲತಾ

Last Updated 19 ಆಗಸ್ಟ್ 2021, 4:26 IST
ಅಕ್ಷರ ಗಾತ್ರ

ಮಂಡ್ಯ: ಬೆಂಗಳೂರು– ಮೈಸೂರು ನಡುವೆ ನಡೆಯುತ್ತಿರುವ ದಶಪಥ ಕಾಮಗಾರಿ ವೈಜ್ಞಾನಿಕವಾಗಿಲ್ಲ. ಸ್ಥಳೀಯ ಅಗತ್ಯಗಳನ್ನು ಪರಿಗಣಿಸದೇ ಕಾಮಗಾರಿ ಮಾಡಲಾಗುತ್ತಿದ್ದು ಇದರಿಂದ ಜನರಿಗೆ ತೊಂದರೆಯಾಗಲಿದೆ’ ಎಂದು ಸಂಸದೆ ಸುಮಲತಾ ಬುಧವಾರ ಅಸಮಾಧಾನ ವ್ಯಕ್ತಪಡಿಸಿದರು.

ಮದ್ದೂರು ತಾಲ್ಲೂಕು ಕೋಡಿಹಳ್ಳಿ ಗ್ರಾಮದಲ್ಲಿ ಜನರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು ‘ಹೆದ್ದಾರಿಯ ವಿವಿಧೆಡೆ ಸಮರ್ಪಕವಾಗಿ ಪ್ರವೇಶ, ನಿರ್ಗಮನ ಮಾರ್ಗಗಳನ್ನು ನಿರ್ಮಾಣ ಮಾಡಿಲ್ಲ. ಸೇವಾ ರಸ್ತೆಗಳು ಕೂಡ ವೈಜ್ಞಾನಿಕವಾಗಿ ನಡೆಯುತ್ತಿಲ್ಲ. ಈ ಬಗ್ಗೆ ಈಗಾಗಲೇ ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರ ಗಮನಕ್ಕೂ ತರಲಾಗಿದೆ’ ಎಂದು ಹೇಳಿದರು.

‘ಹೆದ್ದಾರಿಯುದ್ದಕ್ಕೂ ಹಳ್ಳಿಗಳ ಜನರು ದೂರು ಸಲ್ಲಿಸುತ್ತಿದ್ದಾರೆ. ಯಾವುದೇ ಕಾಮಗಾರಿ ನಡೆದರೂ ಅದರಿಂದ ಸ್ಥಳೀಯರಿಗೆ ತೊಂದರೆಯಾಗಬಾರದು. ಸ್ಥಳೀಯರ ಓಡಾಟಕ್ಕೆ ಅವಕಾಶ ಕಲ್ಪಿಸಿ ಕಾಮಗಾರಿ ಮಾಡಬೇಕು. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೂ ದೂರು ನೀಡಿದ್ದೆ. ಬೇಡಿಕೆ ಈಡೇರುವುದಾಗಿ ಭರವಸೆ ನೀಡಿದ್ದರು, ಆದರೆ ಯಾವುದೇ ಭರವಸೆ ಈಡೇರಿಲ್ಲ’ ಎಂದರು.

‘ಅವೈಜ್ಞಾನಿಕ ಕಾಮಗಾರಿಯ ಬಗ್ಗೆ ಪ್ರಶ್ನೆ ಮಾಡಿದರೆ ನಾನು ಅಭಿವೃದ್ಧಿಗೆ ಅಡ್ಡಿ ವ್ಯಕ್ತಪಡಿಸುತ್ತೇನೆ ಎಂಬಂತೆ ಬಿಂಬಿಸಲಾಗುತ್ತದೆ. ಸ್ಥಳೀಯರ ವಿರೋಧದ ನಡುವೆಯೂ ಕಾಮಗಾರಿ ನಡೆಸುವುದು ಸರಿಯಲ್ಲ. ಸ್ಥಳೀಯರ ಬೇಡಿಕೆಗಳನ್ನು ಪರಿಶೀಲಿಸಿ ಅವರನ್ನು ವಿಶ್ವಾಸಕ್ಕೆ ಪಡೆದು ಕಾಮಗಾರಿ ನಡೆಸಬೇಕು. ಮತ್ತೊಮ್ಮೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರೊಂದಿಗೆ ಮಾತನಾಡಲಾಗುವುದು’ ಎಂದರು.

ಸಾಮೂಹಿಕ ಆತ್ಮಹತ್ಯೆ ಬೆದರಿಕೆ: ಕೋಡಿಹಳ್ಳಿ ಗ್ರಾಮದಲ್ಲಿ ಸಂಪರ್ಕ ಸೇತುವೆ ನಿರ್ಮಾಣ ಮಾಡದ್ದರೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಗ್ರಾಮಸ್ಥರು ಬೆದರಿಕೆ ಹಾಕಿದರು.

‘ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ತಂತ್ರಜ್ಞರನ್ನು ಸ್ಥಳಕ್ಕೆ ಕರೆಸಿ ಅವರಿಗೆ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟು ಸಂಪರ್ಕ ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು ಸುಮಲತಾ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT