ಬೆಂಗಳೂರು: 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಹೊರಡಿಸಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ದರ್ಜೆ ಹೊಂದಿರುವ ಜಿ. ಕುಮಾರ್ ನಾಯಕ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಆಯುಕ್ತ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಕುಮಾರ್ ನಾಯಕ್ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯಲ್ಲಿದ್ದರು. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಎಂ.ಬಿ. ರಾಜೇಶ್ ಗೌಡ ಅವರನ್ನು ಬಿಡಿಎ ಆಯುಕ್ತರ ಹುದ್ದೆಯಿಂದ ವರ್ಗಾವಣೆ ಮಾಡಿದ ಬಳಿಕ ನಾಯಕ್ ಅವರಿಗೆ ಆ ಹುದ್ದೆಯ ಹೆಚ್ಚುವರಿ ಪ್ರಭಾರ ವಹಿಸಲಾಗಿತ್ತು. ಈವರೆಗೂ ಅವರು ಆಯುಕ್ತರ ಹುದ್ದೆಯ ಹೆಚ್ಚುವರಿ ಪ್ರಭಾರದಲ್ಲಿದ್ದರು. ಈಗ ಬಿಡಿಎ ಆಯುಕ್ತರ ಹುದ್ದೆಯನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಮನಾಗಿ ಮೇಲ್ದರ್ಜೆಗೇರಿಸಿ ವರ್ಗಾವಣೆ ಮಾಡಲಾಗಿದೆ.
ವರ್ಗಾವಣೆಗೊಂಡ ಇತರರು: ಇ.ವಿ. ರಮಣ ರೆಡ್ಡಿ– ಅಭಿವೃದ್ಧಿ ಆಯುಕ್ತ; ಕಪಿಲ್ ಮೋಹನ್– ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ ಹಾಗೂ ಹೆಚ್ಚುವರಿಯಾಗಿ ಪ್ರವಾಸೋದ್ಯಮ ಇಲಾಖೆಯ ಪ್ರಭಾರ. ಜಿ. ಕುಮಾರ ನಾಯಕ್– ಆಯುಕ್ತ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ. ಎಸ್.ಆರ್. ಉಮಾಶಂಕರ್– ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ. ರಶ್ಮಿ ವಿ. ಮಹೇಶ್– ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ (ವಿಕೋಪ ನಿರ್ವಹಣೆ, ಭೂಮಿ ಮತ್ತು ನಗರ ಆಸ್ತಿ ಹಕ್ಕುಗಳ ದಾಖಲೆ ವಿಭಾಗ).
ಸೆಲ್ವಕುಮಾರ್ ಎಸ್.– ಪ್ರಧಾನ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಇಲಾಖೆಯ ಹೆಚ್ಚುವರಿ ಪ್ರಭಾರ. ಮನೋಜ್ ಜೈನ್– ಕಾರ್ಯದರ್ಶಿ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ. ಶಿವಶಂಕರ್ ಎನ್.– ವ್ಯವಸ್ಥಾಪಕ ನಿರ್ದೇಶಕ, ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ; ನಳಿನಿ ಅತುಲ್– ನಿರ್ದೇಶಕ, ಸಾಮಾಜಿಕ ಲೆಕ್ಕಪರಿಶೋಧನೆ ವಿಭಾಗ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಭಾಗ.
ಮೊಹಮ್ಮದ್ ರೋಷನ್– ವ್ಯವಸ್ಥಾಪಕ ನಿರ್ದೇಶಕ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ; ಭೋಯರ್ ಹರ್ಷಲ್ ನಾರಾಯಣರಾವ್– ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಬೆಳಗಾವಿ ಜಿಲ್ಲಾ ಪಂಚಾಯಿತಿ. ಭನ್ವಾರ್ ಸಿಂಗ್ ಮೀನಾ– ಪ್ರಧಾನ ವ್ಯವಸ್ಥಾಪಕ, ಪುನರ್ವಸತಿ ಮತ್ತು ಪರಿಹಾರ ಹಾಗೂ ಭೂಸ್ವಾಧೀನ, ಕೃಷ್ಣಾ ಮೇಲ್ದಂಡೆ ಯೋಜನೆ, ಬಾಗಲಕೋಟೆ. ಪ್ರಕಾಶ್ ಜಿ. ನಿಟ್ಟಾಲಿ– ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ. ನೊಂಗ್‌ಜೈ ಮೊಹಮ್ಮದ್ ಅಲಿ ಅಕ್ರಮ್ ಶಾ– ಹೆಚ್ಚುವರಿ ಮಿಷನ್ ನಿರ್ದೇಶಕ–2, ಸಕಾಲ ಮಿಷನ್.
ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ. ಮಾಧುಸ್ವಾಮಿ ಅವರ ಆಪ್ತ ಕಾರ್ಯದರ್ಶಿ ಕೆಎಎಸ್ ಅಧಿಕಾರಿ ರವಿ ಎಂ. ತಿರ್ಲಾಪುರ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಯ ಹೆಚ್ಚುವರಿ ಪ್ರಭಾರ ನೀಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.