ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಅಶ್ವತ್ಥನಾರಾಯಣ ವಿರುದ್ಧ ನ್ಯಾಯಾಲಯಕ್ಕೆ 3 ಖಾಸಗಿ ದೂರು

ನೀತಿ ಸಂಹಿತೆ ಉಲ್ಲಂಘನೆ; ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು
Last Updated 26 ಮೇ 2022, 12:36 IST
ಅಕ್ಷರ ಗಾತ್ರ

ಮಂಡ್ಯ: ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಜಿಲ್ಲಾ ಮಟ್ಟದ ಮಾದರಿ ನೀತಿ ಸಂಹಿತೆ ತಂಡದ ಮುಖ್ಯಸ್ಥರು ವರದಿ ನೀಡಿದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಸಚಿವರ ವಿರುದ್ಧ ನ್ಯಾಯಾಲಯದಲ್ಲಿ ಮೂರು ಖಾಸಗಿ ದೂರುಗಳನ್ನು ದಾಖಲಿಸಿದ್ದಾರೆ.

ಮೇ 16ರಂದು ಸಚಿವ ಸಿ.ಎನ್. ಅಶ್ವತ್ಥ ನಾರಾಯಣ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್‌), ಮಹಿಳಾ ಕಾಲೇಜು, ಮಾಂಡವ್ಯ ಸಮೂಹ ಸಂಸ್ಥೆ, ಮಂಡ್ಯ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್‌ ಪರ ಮತಯಾಚನೆ ಮಾಡಿದ್ದರು. ಸಚಿವರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ, ವಕೀಲ ಸುಂಡಹಳ್ಳಿ ಮಂಜುನಾಥ್‌ ಸಹಾಯಕ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದರು.

ಈ ಬಗ್ಗೆ ಪರಿಶೀಲನೆ ನಡೆಸಿದ ಜಿಲ್ಲಾ ಮಟ್ಟದ ಮಾದರಿ ನೀತಿ ಸಂಹಿತೆ ತಂಡದ ಮುಖ್ಯಸ್ಥರೂ ಆದ ಜಿಲ್ಲಾ ಪಂಚಾಯಿತಿ ಸಿಇಒ ದಿವ್ಯಾಪ್ರಭು, ಸಚಿವರು ನೀತಿಸಂಹಿತೆ ಉಲ್ಲಂಘನೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು ಕ್ರಮ ಕೈಗೊಳ್ಳುವಂತೆ ವರದಿ ನೀಡಿದ್ದರು. ಇದರ ಆಧಾರ ಮೇಲೆ ಚುನಾವಣಾ ಸಂಚಾರಿ ದಳದ ಮುಖ್ಯಸ್ಥರಾದ ಶಾಹೇದಾ ಅಹಮದಿ ಅವರು 2ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರ ನ್ಯಾಯಾಲಯ, ಪ್ರಧಾನ ಸಿವಿಲ್‌ ನ್ಯಾಯಾಧೀಶರ ನ್ಯಾಯಾಲಯ, ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.

ಮೂರೂ ನ್ಯಾಯಾಲಯ ದೂರುಗಳನ್ನು ದಾಖಲು ಮಾಡಿಕೊಂಡಿವೆ. 2ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರ ನ್ಯಾಯಾಲಯ ಸಚಿವರ ವಿರುದ್ಧ ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶಿಸಿದೆ. ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಾಗುವ ಸಾಧ್ಯತೆ ಇದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಸರ್ಕಾರಿ ಕಾರು ದುರ್ಬಳಕೆ ಮಾಡಿಕೊಂಡು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಗುರುವಾರ ಬಿಜೆಪಿ ಮುಖಂಡರು ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ನಗರದ ಚಂದ್ರದರ್ಶನ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್‌ ಸಭೆಗೆ ಸರ್ಕಾರಿ ಕಾರ್‌ನಲ್ಲಿ ಬಂದಿದ್ದಾರೆ, ಅದರಲ್ಲಿಯೇ ವಾಪಸ್‌ ತೆರಳಿದ್ದಾರೆ. ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ನಡೆಯುತ್ತಿದ್ದರೂ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT