ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡವ, ದೀನ ದಲಿತರಿಗೆ ಸಮರ್ಪಿತವಾದ ಸರ್ಕಾರ: ಪ್ರಹ್ಲಾದ ಜೋಶಿ 

ಫಲಾನುಭವಿಗಳ ಸಮ್ಮೇಳನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿಮತ
Last Updated 18 ಮಾರ್ಚ್ 2023, 14:15 IST
ಅಕ್ಷರ ಗಾತ್ರ

ವಿಜಯಪುರ: ಬಡ, ದಿನ ದಲಿತ ಶೋಷಿತ, ವಂಚಿತರಿಗಾಗಿ ಯೋಚಿಸಿ ಯೋಜನೆ ರೂಪಿಸಿ ಜಾರಿಗೊಳಿಸಿದ ನಮ್ಮ ಸರ್ಕಾರ ಜನರಿಗೆ ಸಮರ್ಪಿತವಾದ ಸರ್ಕಾರವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯ್ತಿ ಆಶ್ರಯದಲ್ಲಿ ಶನಿವಾರ ನಗರದ ಸೈನಿಕ್‌ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮಾಜದ ಪ್ರತಿಯೊಂದು ವರ್ಗದ ಕಟ್ಟಕಡೆಯ ವ್ಯಕ್ತಿಯ ಬದುಕಿನ ಸುಧಾರಣೆಗೆ ಹಲವು ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಲಾಗಿದೆ ಎಂದು ಹೇಳಿದರು.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಲಜೀವನ ಮಿಷನ್, ಜಲಧಾರೆ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ 11.45 ಕೋಟಿ ಮನೆಗಳಿಗೆ ಕುಡಿಯುವ ನೀರು ಪೂರೈಸುವ ನಳಗಳ ಸಂಪರ್ಕ ಕಲ್ಪಿಸಲಾಗಿದೆ. ಬರುವ 2026ನೇ ವರ್ಷದೊಳಗಾಗಿ ದೇಶದದಲ್ಲಿರುವ ಪ್ರತಿ ಮನೆಗಳಿಗೆ ನಳಗಳಿಂದ ನೀರು ಒದಗಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.

ವಿಜಯಪುರ ಜಿಲ್ಲೆಗೆ ಪ್ರಧಾನಮಂತ್ರಿ ಜಲಜೀವನ ಯೋಜನೆಯಡಿ ₹ 1 ಸಾವಿರ ಕೋಟಿ ಹಾಗೂ ಜಲಧಾರೆ ಯೋಜನೆಯಡಿ ₹ 3 ಸಾವಿರ ಕೋಟಿ ಸೇರಿದಂತೆ ಒಟ್ಟು ₹ 4 ಸಾವಿರ ಕೋಟಿಯನ್ನು ಒದಗಿಸಲಾಗಿದೆ ಎಂದರು.

ಪ್ರಧಾನಮಂತ್ರಿ ಜನಧನ್‌ ಯೋಜನೆಯಡಿ 42 ಕೋಟಿ ಹೊಸ ಬ್ಯಾಂಕ್‌ ಖಾತೆಗಳನ್ನು ತೆರೆಯಲಾಗಿದೆ. ಈ ಖಾತೆಗಳಿಗೆ ಆಧಾರ್‌ ಹಾಗೂ ಮೊಬೈಲ್ ಸಂಖ್ಯೆಗೆ ಜೋಡಣೆ ಮಾಡುವ ಮೂಲಕ ಯೋಜನೆಗಳ ಲಾಭ ಫಲಾನುಭವಿಗಳಿಗೆ ದೊರೆಯುವಂತೆ ಮಾಡಲಾಗಿದೆ ಎಂದು ಹೇಳಿದರು.

ಸರ್ಕಾರ ಡಿಬಿಟಿ ಮೂಲ ನೇರ ನಗದು ವರ್ಗಾವಣೆಯನ್ವಯ ಸರ್ಕಾರದ ಯೋಜನೆಯ ಹಣ ಪ್ರತಿ ಫಲಾನುಭವಿ ಖಾತೆಗೆ ನೇರವಾಗಿ ಜಮೆ ಮಾಡುವ ಯೋಜನೆ ಜಾರಿಗೊಳಿಸಿದ್ದು, ಡಿಬಿಟಿ ಮೂಲಕ ₹ 25 ಲಕ್ಷ ಕೋಟಿಯನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಹೇಳಿದರು.

ಪ್ರಧಾನಮಂತ್ರಿಯವರ ದೂರದೃಷ್ಟಿ ಯೋಚನೆಯಿಂದ ಕೋವಿಡ್‍ದಂತಹ ಕ್ಲಿಸ್ಟಕರ ಪರಿಸ್ಥಿತಿಯನ್ನು ನಮ್ಮ ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ನಮ್ಮ ದೇಶದಲ್ಲಿಯೇ ಲಸಿಕೆ ತಯಾರು ಮಾಡಿ, ನೀಡುವುದರಿಂದಲೇ ಇಂದು ಎಲ್ಲರೂ ಸುರಕ್ಷಿತವಾಗಿ, ಮಾಸ್ಕ್‌ ಇಲ್ಲದೇ ಬದುಕುವಂತಾಗಿದೆ. 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯ ಒದಗಿಸುವ ಮೂಲಕ ಜನರ ಕಷ್ಟಗಳಿಗೆ ಸ್ಪಂದಿಸಿದೆ. ಆಯುಷ್ಮಾನ್‌ ಭಾರತ ಆರೋಗ್ಯ ಯೋಜನೆಯಡಿ 39 ಲಕ್ಷ ಜನರಿಗೆ ಉಚಿತ ಚಿಕಿತ್ಸೆ ಒದಗಿಸಲಾಗಿದೆ ಎಂದು ಹೇಳಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ವಿಜಯಪುರದಲ್ಲಿ ಟೆಕ್ಸ್‌ಟೈಲ್ ಪಾರ್ಕ್, ಅತ್ಯಾಧುನಿಕ ಕೋಲ್ಡ್ ಸ್ಟೋರೇಜ್ ನಿರ್ಮಿಸಲಾಗುತ್ತಿದೆ. ಇದರಿಂದ ಇಲ್ಲಿಯ ಸಾವಿರಾರು ಜನರಿಗೆ ಉದ್ಯೋಗ ದೊರೆಯಲಿದೆ. ತೊರವಿಯಲ್ಲಿ ದ್ರಾಕ್ಷಿಗೆ ವಿಶ್ವ ಮಾರುಕಟ್ಟೆ ಸ್ಥಾಪನೆಯಾಗಿ ವಿಜಯಪುರದಲ್ಲಿ ಬೆಳೆಯುವ ಬೆಳೆಗಳಿಗೆ ಅಂತರರಾಷ್ಟ್ರೀಯ ದರ ದೊರೆತು, ಇಲ್ಲಿನ ರೈತರಿಗೆ ಅನುಕೂಲವಾಗಲಿದೆ ಎಂದರು.

ಶಾಸಕ ಸೋಮನಗೌಡ ಪಾಟೀಲ, ದೇವಾನಂದ ಚವ್ಹಾಣ, ರಮೇಶ ಭೂಸನೂರ, ಸಾವಯವ ಬೀಜ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ದ್ರಾಕ್ಷಿ-ವೈನ್ ಬೋರ್ಡ್ ಅಧ್ಯಕ್ಷ ಎಂ.ಎಸ್. ರುದ್ರಗೌಡರ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪರಶುರಾಮ ರಜಪೂತ, ಜಿಲ್ಲಾಧಿಕಾರಿ ವಿಜಯಮಹಾಂತೇಶ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ ಶಿಂಧೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ ಇದ್ದರು.

***

ಪ್ರಧಾನಿ ಮೋದಿ ಆಡಳಿತದಿಂದ ಅಚ್ಛೆ ದಿನ್ ಜನರಿಗೆ ಬಂದಿದೆ. ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರಿಗೆ ಅಚ್ಛೆ ದಿನ್ ಬಂದಿಲ್ಲ, ಬರುವುದಿಲ್ಲ

–ಪ್ರಹ್ಲಾದ ಜೋಶಿ, ಕೇಂದ್ರ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT