ಶುಕ್ರವಾರ, ಜುಲೈ 30, 2021
28 °C

ಮತ್ತೆ ಕಾಂಗ್ರೆಸ್‌ ಕದ ತಟ್ಟಿದ ಎ. ಮಂಜು?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ತ್ಯಜಿಸಿ ಬಿಜೆಪಿ ಸೇರಿದ್ದ ಹಾಸನ ಜಿಲ್ಲೆ ಅರಕಲಗೂಡು ಕ್ಷೇತ್ರದ ಮಾಜಿ ಶಾಸಕ ಎ. ಮಂಜು, ತಮ್ಮ ಬೆಂಬಲಿಗರ ಮೂಲಕ ಮತ್ತೆ ಕಾಂಗ್ರೆಸ್‌ ಕದ ತಟ್ಟಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿದ್ದ ಅವರು ಜೆಡಿಎಸ್‌ನ ಪ್ರಜ್ವಲ್‌ ರೇವಣ್ಣ ವಿರುದ್ಧ ಸೋಲು ಕಂಡಿದ್ದರು. ಬಳಿಕ, ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ವದಂತಿಗಳು ಹರಿದಾಡುತ್ತಿದ್ದವು. ಆದರೆ, ಅದನ್ನು  ನಿರಾಕರಿಸಿದ್ದ ಅವರು, ‘ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ’ ಎಂದಿದ್ದರು.

ಆದರೆ, ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿದ ಮಂಜು ಬೆಂಬಲಿಗರು, ಮಂಜು ಮತ್ತೆ ಕಾಂಗ್ರೆಸ್‌ ಸೇರುವ ಒಲವು ವ್ಯಕ್ತಪಡಿಸಿರುವ ಬಗ್ಗೆ ತಿಳಿಸಿದ್ದಾರೆ. ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

1999ರಲ್ಲಿ ಬಿಜೆಪಿಯಿಂದ ಶಾಸಕನಾಗಿ ಆಯ್ಕೆಯಾಗಿದ್ದ ಮಂಜು, ಬಳಿಕ ಕಾಂಗ್ರೆಸ್‌ ಸೇರಿ 2013ರಲ್ಲಿ ಶಾಸಕರಾಗಿದ್ದರು. ಅಲ್ಲದೆ, ಪಶು ಸಂಗೋಪನೆ ಸಚಿವರಾಗಿದ್ದರು.

ಲೋಕಸಭೆ ಚುನಾವಣೆಯಲ್ಲಿ ಸೋತ ಮೇಲೆ ಮಂಜು ರಾಜಕೀಯವಾಗಿ ನೇಪಥ್ಯಕ್ಕೆ ಸರಿದಿದ್ದಾರೆ. ಹಾಸನ ಜಿಲ್ಲಾ ಬಿಜೆಪಿಯಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ. ಇದಕ್ಕೆ ಬಿಜೆಪಿ ಶಾಸಕ ಪ್ರೀತಂ ಗೌಡ ಕಾರಣ ಎನ್ನಲಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅರಕಲಗೂಡಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ಗೆಲುವು ಸುಲಭವಲ್ಲ ಎಂಬ ಕಾರಣಕ್ಕೆ ಅವರು ಮತ್ತೆ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎಂದು ಹೇಳಲಾಗಿದೆ.

ಪಕ್ಷಕ್ಕೆ ಮರಳುವ ಮಂಜು ಅವರ ಅಪೇಕ್ಷೆಗೆ ಶಿವಕುಮಾರ್‌ ಒಪ್ಪಿಗೆ ಸೂಚಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು