ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ತರಗತಿಗೆ ಶೇ 50ಕ್ಕೂ ಹೆಚ್ಚು ಹಾಜರಿ

ನಾಲ್ಕನೇ ದಿನದ ಹಾಜರಾತಿಯಲ್ಲಿ ಹೆಚ್ಚಳ– ಸುರೇಶ್‌ಕುಮಾರ್
Last Updated 4 ಜನವರಿ 2021, 19:41 IST
ಅಕ್ಷರ ಗಾತ್ರ

ಬೆಂಗಳೂರು: ‘ಎಸ್ಸೆಸ್ಸೆಲ್ಸಿ ತರಗತಿಗೆ ಶೇ 51.95 ಹಾಗೂ ದ್ವಿತೀಯ ಪಿಯುಸಿ ತರಗತಿಗೆ ಶೇ 55ರಷ್ಟು ವಿದ್ಯಾರ್ಥಿಗಳು ಸೋಮವಾರ ಹಾಜರಾಗಿದ್ದಾರೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ತಿಳಿಸಿದ್ದಾರೆ.

‘ರಾಜ್ಯದಲ್ಲಿರುವ 5,492 ಪದವಿಪೂರ್ವ ಕಾಲೇಜುಗಳಲ್ಲಿ ದಾಖಲಾಗಿರುವ 3,62,704 ವಿದ್ಯಾರ್ಥಿಗಳ ಪೈಕಿ 1,99,553 (ಶೇ 55) ವಿದ್ಯಾರ್ಥಿಗಳು, 16,850 ಪ್ರೌಢಶಾಲೆಗಳಲ್ಲಿ 10ನೇ ತರಗತಿಗೆ ದಾಖಲಾಗಿರುವ 9,29,130 ವಿದ್ಯಾರ್ಥಿಗಳ ಪೈಕಿ 4,81,728(ಶೇ 51.95) ವಿದ್ಯಾರ್ಥಿಗಳು ಹಾಜರಾಗಿದ್ದಾರೆ’ ಎಂದೂ ಅವರು ವಿವರಿಸಿದ್ದಾರೆ.

‘6ರಿಂದ 9ನೇ ತರಗತಿಗಳಿಗೆ ನಡೆಯುತ್ತಿರುವ ಪರಿಷ್ಕೃತ ವಿದ್ಯಾಗಮ ತರಗತಿಗಳಿಗೆ 4,71,823 ವಿದ್ಯಾರ್ಥಿಗಳು ಸೋಮವಾರ ಹಾಜರಾಗಿದ್ದಾರೆ. ಪ್ರಸ್ತುತ ವರ್ಷದ ಶಾಲಾರಂಭದ ನಾಲ್ಕನೇ ದಿನವಾದ ಸೋಮವಾರ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದ್ದು, ಶಾಲೆ–ಕಾಲೇಜು ಆರಂಭಿಸಿರುವುದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದಂತಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಶಿಕ್ಷಕರಿಗೆ ಕೊರೊನಾ: ‘ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಚಿಕ್ಕ ಕುರುವತ್ತಿ ಸರ್ಕಾರಿ ಪ್ರೌಢಶಾಲೆ ಮತ್ತು ಖಾಸಗಿ ಶಾಲೆಯೊಂದರ ತಲಾ ಒಬ್ಬ ಶಿಕ್ಷಕರು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಹಿರಿಯ ಪ್ರಾಥಮಿಕ ಶಾಲೆಯ ಒಬ್ಬ ಶಿಕ್ಷಕರು ಮತ್ತು ಕಳಸ ತಾಲ್ಲೂಕಿನ ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಶಾಲೆಗಳನ್ನು ಮುಂದಿನ ಸೋಮವಾರ ಆರಂಭಿಸಲಾಗುವುದು’ ಎಂದು ಸಚಿವರು ತಿಳಿಸಿದ್ದಾರೆ.

‘ವಿದ್ಯಾಗಮ ತರಗತಿಗಳು ಕೂಡಾ ಸುರಕ್ಷಿತ ವಾತಾವರಣದಲ್ಲಿ ನಡೆಯುತ್ತಿವೆ. ಶಾಲೆಗಳಲ್ಲಿ ಸುರಕ್ಷತೆ ಮತ್ತು ಎಸ್‍ಒಪಿ ಪಾಲನೆ ಕುರಿತು ಪೋಷಕರು, ವಿದ್ಯಾರ್ಥಿಗಳು ವಿಶ್ವಾಸ ಹೊಂದಿದ್ದಾರೆ. ಶಾಲೆಗಳು ಆರಂಭವಾಗದೆ, ಮಕ್ಕಳ ಭವಿಷ್ಯದ ಕುರಿತು ಆತಂಕದಲ್ಲಿದ್ದ ಪೋಷಕರು ಈಗ ಸಮಾಧಾನಗೊಂಡಿದ್ದಾರೆ’ ಎಂದೂ ಸಚಿವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT