ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಧ್ಯಮಕ್ಕೆ ಆರೋಪಿಗಳ ವೈಯಕ್ತಿಕ ಮಾಹಿತಿ ನೀಡದಂತೆ ಪೊಲೀಸರಿಗೆ ಸರ್ಕಾರದ ಎಚ್ಚರಿಕೆ

ಹೈಕೋರ್ಟ್‌ ಸೂಚನೆ
Last Updated 13 ಆಗಸ್ಟ್ 2021, 2:05 IST
ಅಕ್ಷರ ಗಾತ್ರ

ಬೆಂಗಳೂರು: ತನಿಖಾ ಹಂತದಲ್ಲಿರುವ ಪ್ರಕರಣಗಳ ಆರೋಪಿಗಳ ಭಾವಚಿತ್ರ, ವೈಯಕ್ತಿಕ ಮಾಹಿತಿ ಸೇರಿದಂತೆ ಯಾವುದೇ ಮಾಹಿತಿಯನ್ನು ಸೋರಿಕೆ ಮಾಡಬಾರದು ಎಂದು ಎಂದು ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಕಟ್ಟಪ್ಪಣೆ ವಿಧಿಸಿದೆ. ಹೈಕೋರ್ಟ್ ಸೂಚನೆ ಮೇರೆಗೆ ಸರ್ಕಾರ ಈ ಕ್ರಮ ಕೈಗೊಂಡಿದೆ.

ತನಿಖಾ ಹಂತದಲ್ಲಿರುವ ಪ್ರಕರಣಗಳ ಕುರಿತು ಮಾಧ್ಯಮದವರಿಗೆ ಯಾವುದೇ ರೀತಿಯ ಮಾಹಿತಿ ಸೋರಿಕೆ ಮಾಡಿದರೆ ಶಿಸ್ತುಕ್ರಮ ಜರುಗಿಸುವುದಾಗಿಯೂ ಸರ್ಕಾರ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಗೃಹ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್‌, ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಅಂಥ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಅಪರಾಧ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವ ಪೊಲೀಸರು, ತನಿಖೆಗೆ ಪೂರ್ಣಗೊಳಿಸಿ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಸುವ ಮೊದಲೇ ಆರೋಪಿಗಳ ಭಾವಚಿತ್ರ, ವಿಡಿಯೊ ಹಾಗೂ ಸಂಪೂರ್ಣ ಮಾಹಿತಿಯನ್ನು ಬಹಿರಂಗಪಡಿಸುವ ಬಗ್ಗೆ ವ್ಯಕ್ತಿಯೊಬ್ಬರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಈ ಬಗ್ಗೆ ಮಾರ್ಗಸೂಚಿ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿತ್ತು.

ಸುತ್ತೋಲೆಯಲ್ಲಿ ಏನಿದೆ ?

* ತನಿಖೆ ಪ್ರಗತಿಯಲ್ಲಿರುವಾಗ ಆರೋಪಿಗಳ ವೈಯಕ್ತಿಕ ವಿಷಯ, ಪಾತ್ರದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ಸೋರಿಕೆ ಮಾಡಬಾರದು.

* ಪ್ರಕರಣ ದಾಖಲಿಸಿಕೊಂಡ ನಂತರ ತನಿಖೆ ಮುಗಿದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವವರೆಗೆ ದೂರುದಾರರ ಬಗ್ಗೆ, ಆರೋಪಿಗಳ ಬಗ್ಗೆ ಮಾಹಿತಿ ನೀಡುವಂತಿಲ್ಲ.

* ಮಾಧ್ಯಮಗಳಿಗೆ ಮಾಹಿತಿ ಹಂಚಿಕೆ ಅಥವಾ ಸೋರಿಕೆ ವಿಷಯದಲ್ಲಿ ತನಿಖಾಧಿಕಾರಿಗಳಿಂದ ಲೋಪದೋಷ ಎಸಗುವುದು, ಮಾಹಿತಿ ನೀಡುವುದು ಕಂಡುಬಂದರೆ ಶಿಸ್ತು ಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆಗೆ ಶಿಫಾರಸು ಮಾಡಲಾಗುವುದು.

* ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಪ್ರಕರಣ ಕುರಿತು ಎಫ್ಐಆರ್ ದಾಖಲಾಗಿರುವ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT