ಬೆಂಗಳೂರು: ‘ಬೇಸಿಗೆಯಲ್ಲಿ ಬೆಳೆಗಳಿಗೆ ನೀರು ಹರಿಸಲು ವಿದ್ಯುತ್ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೈತರಿಗೆ ಭರವಸೆ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ತಮ್ಮನ್ನು ಭೇಟಿಯಾದ ರೈತರ ನಿಯೋಗದ ಜತೆ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿದರು.
’ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ ಏಳು ತಾಸು ಮೂರು ಫೇಸ್ ವಿದ್ಯುತ್ ಪೂರೈಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ವಿದ್ಯುತ್ ಕೊರತೆಯಾದಲ್ಲಿ ಹೊರರಾಜ್ಯಗಳಿಂದ ಪಡೆಯುವ ಕುರಿತು ಸಹ ಚಿಂತನೆ ಮಾಡಲಾಗುವುದು’ ಎಂದು ತಿಳಿಸಿದರು.
‘ರಾಜ್ಯದ ವಿವಿಧೆಡೆ ಕೆಐಎಡಿಬಿ ಭೂಸ್ವಾಧೀನಪಡಿಸಿಕೊಳ್ಳುವ ಸಂದರ್ಭದಲ್ಲಿ ಜಮೀನು ಕಳೆದುಕೊಂಡವರಿಗೆ ಅಲ್ಲಿ ಸ್ಥಾಪಿಸಲಾಗುವ ಉದ್ಯಮಗಳಲ್ಲಿ ಉದ್ಯೋಗ ನೀಡಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿ ರಚಿಸಲಾಗುವುದು’ ಎಂದು ತಿಳಿಸಿದರು.
‘ಮಂಡ್ಯದ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಸರ್ಕಾರವೇ ನಡೆಸಲು ನಿರ್ಧರಿಸಿ, ಚಾಲನೆಯೂ ನೀಡಲಾಗಿದೆ. ಮುಂದಿನ ಹಣಕಾಸು ವರ್ಷದಲ್ಲಿ ಇನಷ್ಟು ಸಶಕ್ತಗೊಳಿಸಲಾಗುವುದು. ಕಬ್ಬಿಗೆ ಎಸ್ಎಪಿ ನೀಡುವ ಕುರಿತಂತೆ ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿರುವ ವೀರ ಪುಲಿಕೇಶಿ ಸಹಕಾರಿ ಬ್ಯಾಂಕ್ ರೈತರಿಗೆ ಕಿರುಕುಳ ನೀಡುತ್ತಿರುವುದಾಗಿ ರೈತ ಮುಖಂಡರು ಮುಖ್ಯಮಂತ್ರಿ ಅವರ ಗಮನ ಸೆಳೆದರು. ‘ಈ ಬ್ಯಾಂಕಿಗೆ ಕೂಡಲೇ ನೋಟೀಸ್ ನೀಡಲಾಗುವುದು’ ಎಂದು ಬೊಮ್ಮಾಯಿ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.