ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್‌ ವಲಸಿಗರ ಪೈಕಿ ಮತ್ತೆ 10 ಮಂದಿಗೆ ಕೋವಿಡ್‌-–19

Last Updated 25 ಡಿಸೆಂಬರ್ 2020, 20:16 IST
ಅಕ್ಷರ ಗಾತ್ರ

ಬೆಂಗಳೂರು: ಹೊಸ ಸ್ವರೂಪದ ಕೊರೊನಾ ವೈರಾಣು ಕಾಣಿಸಿಕೊಂಡಿರುವ ಬ್ರಿಟನ್‌ನಿಂದ ರಾಜ್ಯಕ್ಕೆ ಬಂದವರ ಪೈಕಿ ಮತ್ತೆ 10 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಅಲ್ಲಿಂದ ಮರಳಿದವರಲ್ಲಿ ಈವರೆಗೆ ಸೋಂಕಿತರಾದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

14 ಜನರ ಪೈಕಿ ಐವರು ಶಿವಮೊಗ್ಗದವರಾಗಿದ್ದು, ಉಳಿದಂತೆ ಚಿಕ್ಕಮಗಳೂರಿನ ಎರಡು ವರ್ಷದ ಮಗು ಹಾಗೂ ಪುರುಷರೊಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಉಳಿದವರು ಬೆಂಗಳೂರಿನವರಾಗಿದ್ದಾರೆ.

ಇಂಗ್ಲೆಂಡಿನಿಂದ ಬಂದವರಲ್ಲಿ 403 ಮಂದಿಗೆ ಆರ್‌ಟಿ–ಪಿಸಿಆರ್ ಪರೀಕ್ಷೆಯನ್ನು ಶುಕ್ರವಾರ ನಡೆಸಲಾಗಿದೆ. ಅದರಲ್ಲಿ 249 ಮಂದಿಯ ಪರೀಕ್ಷೆಯ ಫಲಿತಾಂಶ ಬಂದಿಲ್ಲ. ಅಲ್ಲಿಂದ ಬಂದವರಲ್ಲಿ ಈವರೆಗೆ ಒಟ್ಟು 1,419 ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. 744 ಮಂದಿಗೆ ಸೋಂಕು ತಗುಲಿಲ್ಲ ಎನ್ನುವುದು ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. ಇನ್ನೂ 661 ಮಂದಿ ವರದಿಗೆ ಎದುರು ನೋಡುತ್ತಿದ್ದಾರೆ. ವಿವಿಧ ದೇಶಗಳಿಂದ ಬಂದ 1,202 ಮಂದಿಯನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆ ಮಾಡಲಾಗಿದೆ. ಈವರೆಗೆ 2.65 ಲಕ್ಷ ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ.

ರಾಜ್ಯದಲ್ಲಿ ಹೊಸದಾಗಿ 1,005 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇಲ್ಲಿಯವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 9.14 ಲಕ್ಷ ದಾಟಿದೆ. ಈ ತಿಂಗಳು 25 ದಿನಗಳಲ್ಲಿ 29,592 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 1,183 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಸೋಂಕಿತರಲ್ಲಿ 5 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,044ಕ್ಕೆ ತಲುಪಿದೆ.

8.88 ಲಕ್ಷ ಮಂದಿ ಗುಣಮುಖ: ಒಂದೇ ದಿನ 89 ಸಾವಿರ ಆರ್‌ಟಿ–ಪಿಸಿಆರ್ ಸೇರಿದಂತೆ 98 ಸಾವಿರ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 1.35 ಕೋಟಿ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಕೋವಿಡ್ ಪೀಡಿತರಲ್ಲಿ 1,102 ಮಂದಿಗೆ ಕಾಯಿಲೆ ವಾಸಿಯಾಗಿದ್ದು, ಇದರಿಂದಾಗಿ ಚೇತರಿಸಿಕೊಂಡವರ ಸಂಖ್ಯೆ 8.88 ಲಕ್ಷಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳು ಮತ್ತಷ್ಟು ಇಳಿಕೆ ಕಂಡಿದ್ದು, ಸದ್ಯ 13,508 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 208 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ.

ಬೆಂಗಳೂರಿನಲ್ಲಿ 578 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.85 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 79 ಪ್ರಕರಣ
ಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 52,124ಕ್ಕೆ ತಲುಪಿದೆ. ಹಾಸನದಲ್ಲಿ 43, ಕಲಬುರ್ಗಿಯಲ್ಲಿ 34, ದಕ್ಷಿಣ ಕನ್ನಡದಲ್ಲಿ 30, ಮಂಡ್ಯದಲ್ಲಿ 24 ಪ್ರಕರಣಗಳು ಹೊಸದಾಗಿ ಪತ್ತೆಯಾಗಿವೆ. ರಾಜ್ಯದ 28 ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT