ಗುರುವಾರ , ಆಗಸ್ಟ್ 11, 2022
21 °C

ರೈತರಿಗೆ ‘ಒಂದು ಜಿಲ್ಲೆ, ಒಂದು ಉತ್ಪನ್ನ ತರಬೇತಿ’: ಕೃಷಿ ಸಚಿವ ಬಿ.ಸಿ. ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಆಹಾರ ಸಂಸ್ಕರಿಸುವ ಸಣ್ಣ ಉದ್ದಿಮೆಗಳ ಮಧ್ಯೆ ಸ್ಪರ್ಧಾತ್ಮಕತೆ ಹೆಚ್ಚಿಸುವ ಉದ್ದೇಶದಿಂದ ರೈತರಿಗೆ ‘ಒಂದು ಜಿಲ್ಲೆ. ಒಂದು ಉತ್ಪನ್ನ (ಬೆಳೆ)’ ತರಬೇತಿ ನೀಡಲು ನಿರ್ಧರಿಸಲಾಗಿದೆ’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

‘ಆತ್ಮ ನಿರ್ಭರ್ ಭಾರತ’ ಅಭಿಯಾನದ ಭಾಗವಾಗಿ ‘ಪ್ರಧಾನ ಮಂತ್ರಿ ಸಣ್ಣ ಆಹಾರ ಸಂಸ್ಕರಣಾ ಉದ್ದಿಮೆಗಳ ಕ್ರಮಬದ್ಧಗೊಳಿಸುವಿಕೆ’ ಯೋಜನೆಯನ್ನು ರಾಜ್ಯ ಸರ್ಕಾರದ ಸಹಯೋಗದಲ್ಲಿ ಅನುಷ್ಠಾನಗೊಳಿಸಲು ಕೇಂದ್ರ ಆಹಾರ ಸಂಸ್ಕರಣಾ ಉದ್ದಿಮೆಗಳ ಸಚಿವಾಲಯ ಉದ್ದೇಶಿಸಿದೆ’ ಎಂದರು.

‘ಒಂದು ಜಿಲ್ಲೆ, ಒಂದು ಉತ್ಪನ್ನ ಅಥವಾ ಬೆಳೆಯನ್ನು ಪ್ರೋತ್ಸಾಹಿಸುವುದು ಯೋಜನೆಯ ಉದ್ದೇಶವಾಗಿದೆ. ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳು ಈ ಯೋಜನೆಯಡಿ ಉತ್ಪನ್ನಗಳನ್ನು ಗುರುತಿಸಿ, ಉತ್ಪನ್ನದ ಮೌಲ್ಯವರ್ಧನೆ, ಸಂಸ್ಕರಣೆ, ಪ್ಯಾಕಿಂಗ್, ಬ್ರಾಂಡ್ ಅಭಿವೃದ್ಧಿ, ಮಾರುಕಟ್ಟೆಗೆ ಪ್ರೋತ್ಸಾಹಿಸಲು ತರಬೇತಿ ನೀಡಲಾಗುವುದು’ ಎಂದು ಸಚಿವರು ಹೇಳಿದರು.

ಅಸಂಘಟಿತ ವಲಯದಲ್ಲಿರುವ ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಪ್ರೋತ್ಸಾಹಿಸಲು ಮೈಸೂರಿನಲ್ಲಿರುವ ಸಿಎಫ್‌ಟಿಆರ್‌ಐನಲ್ಲಿ (ಕೌನ್ಸಿಲ್ ಆಫ್ ಸೈಂಟಿಫಿಕ್ & ಇಂಡಸ್ಟ್ರಿಯಲ್ ರಿಸರ್ಚ್) ರೈತರಿಗೆ ತರಬೇತಿ ನೀಡುವ ಬಗ್ಗೆ ಸಂಸ್ಥೆಯ ಮುಖ್ಯಸ್ಥರು ಮತ್ತು ವಿಜ್ಞಾನಿಗಳ ಜೊತೆ ಕೃಷಿ ಸಚಿವರು ಸಭೆ ಚರ್ಚೆ ನಡೆಸಿದರು.

‘ಮುಂದಿನ ಜ. 11 ‌ರಿಂದ ಮಾರ್ಚ್ 30ರವರೆಗೆ ತರಬೇತಿ ನಡೆಸಲು ಉದ್ದೇಶಿಸಲಾಗಿದೆ. ಕೃಷಿ ಇಲಾಖೆಯ ಕೆಪೆಕ್ (ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ) ಪ್ರತಿ ತಾಲ್ಲೂಕಿನಿಂದ ಇಬ್ಬರು ರೈತರನ್ನು ಆಯ್ಕೆ ಮಾಡಿ, 50 ಮಂದಿಯ ಗುಂಪು ರಚಿಸಿ ಒಟ್ಟು 500 ಮಂದಿಗೆ ತರಬೇತಿ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಆರು ದಿನ ನಡೆಯುವ ಈ ತರಬೇತಿಯಲ್ಲಿ ಕೊನೆಯ ಎರಡು ದಿನ ಮಾರ್ಕೆಟಿಂಗ್ ಮತ್ತು ಬ್ರಾಂಡಿಂಗ್‌ ಬಗ್ಗೆ ಒತ್ತು ನೀಡಲು ಕೃಷಿ ಸಚಿವರು ಸಲಹೆ ನೀಡಿದರು. ವಿಶೇಷವಾಗಿ ಮೆಕ್ಕೆಜೋಳ, ತೊಗರಿ ಹಾಗೂ ಸಿರಿಧಾನ್ಯಗಳ ಉತ್ಪನ್ನಗಳಿಗೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆಯೂ ಸಭೆಯಲ್ಲಿ ಸಚಿವರು ಚರ್ಚಿಸಿದರು.

‘ಅಸಂಘಟಿತ ವಲಯದಲ್ಲಿರುವ ಆಹಾರ ಸಂಸ್ಕರಿಸುವ ಸಣ್ಣ ಉದ್ದಿಮೆಗಳನ್ನು, ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು ಮತ್ತು ಅವುಗಳನ್ನು ಸಂಘಟಿತ ವಲಯಕ್ಕೆ ತರುವುದು ಹಾಗೂ ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಹಾಗೂ ಉತ್ಪಾದಕ ಸಹಕಾರಿ ಸಂಘಗಳಿಗೆ ಉತ್ತೇಜನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ’ ಎಂದು ಸಚಿವರು ಹೇಳಿದರು.

ಸಿಎಫ್‌ಟಿಆರ್‌ಐ ನಿರ್ದೇಶಕ ಜಿತೇಂದ್ರ ಜಾಧವ್‌, ಮುಖ್ಯಸ್ಥ ಉಮೇಶ್ ಹೆಬ್ಬಾರ್, ವಿಜ್ಞಾನಿಗಳು ಸಭೆಯಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು