ಶುಕ್ರವಾರ, ಮೇ 20, 2022
23 °C

ನಗರೋತ್ಥಾನ: ₹ 705 ಕೋಟಿ ಮೊತ್ತದ ಯೋಜನೆಗೆ ಒಪ್ಪಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಏಳು ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಮೃತ ನಗರೋತ್ಥಾನ ಯೋಜನೆಯ ನಾಲ್ಕನೇ ಹಂತದಲ್ಲಿ

₹ 705 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜು ಅಧ್ಯಕ್ಷತೆಯ ರಾಜ್ಯಮಟ್ಟದ ಸಮಿತಿ ಬುಧವಾರ ಅನುಮೋದನೆ ನೀಡಿದೆ.

ಮೈಸೂರು, ಉಡುಪಿ, ರಾಮನಗರ, ಕೊಡಗು, ಬಳ್ಳಾರಿ, ದಾವಣಗೆರೆ ಮತ್ತು ಬೆಳಗಾವಿ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ 2022–23 ಹಾಗೂ 2024–25ನೇ ಆರ್ಥಿಕ ವರ್ಷದವರೆಗೆ ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆಯಡಿ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ.

ಮೈಸೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ₹ 75 ಕೋಟಿ,  ಕೊಡಗು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ₹ 55 ಕೋಟಿ, ಬಳ್ಳಾರಿ ಜಿಲ್ಲೆಯಲ್ಲಿ ₹ 80 ಕೋಟಿ, ರಾಮನಗರ ಜಿಲ್ಲೆಯಲ್ಲಿ ₹ 125 ಕೋಟಿ, ದಾವಣಗೆರೆ ಜಿಲ್ಲೆಯಲ್ಲಿ ₹ 70, ಬೆಳಗಾವಿ ಜಿಲ್ಲೆಯಲ್ಲಿ ₹ 260 ಕೋಟಿ ಮತ್ತು ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ₹ 40 ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೊಳ್ಳಲು ಸಮಿತಿ ಒಪ್ಪಿಗೆ ನೀಡಿದೆ.

ಅಮೃತ ನಗರೋತ್ಥಾನ ಯೋಜನೆಯ ನಾಲ್ಕನೇ ಹಂತದಲ್ಲಿ ರಾಜ್ಯದ 302 ನಗರ ಸ್ಥಳೀಯ ಸಂಸ್ಥೆಗಳಲ್ಲಿ ₹ 3,885 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗನ್ನು ಆರಂಭಿಸುವ ಪ್ರಸ್ತಾವಕ್ಕೆ ಸಂಪುಟ ಸಭೆ ಜನವರಿಯಲ್ಲಿ ಒಪ್ಪಿಗೆ ನೀಡಿತ್ತು. ಅದಕ್ಕೆ ಪೂರಕವಾಗಿ ತಯಾರಿಸಿದ್ದ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

ಬೆಳಗಾವಿ, ರಾಮನಗರ, ಬಳ್ಳಾರಿ, ಚಿಕ್ಕಮಗಳೂರು, ಬಾಗಲಕೋಟೆ, ಉತ್ತರ ಕನ್ನಡ ಮತ್ತು ವಿಜಯನಗರ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಲ್ಲಿ ಅಮೃತ ನಗರೋತ್ಥಾನ ಯೋಜನೆಯ ಮೂರನೇ ಹಂತದ ಅನುದಾನದಲ್ಲಿ ಉಳಿಕೆಯಾಗಿರುವ ಮೊತ್ತವನ್ನು ಬಳಸಿಕೊಂಡು ಬದಲಿ ಕಾಮಗಾರಿಗಳನ್ನು ಕೈಗೊಳ್ಳುವ ಪ್ರಸ್ತಾವಕ್ಕೂ ಸಮಿತಿ ಒಪ್ಪಿಗೆ ಸೂಚಿಸಿದೆ.

ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ. ಅಜಯ್ ನಾಗಭೂಷಣ್, ಪೌರಾಡಳಿತ ಇಲಾಖೆ ನಿರ್ದೇಶಕಿ ಅರ್ಚನಾ, ಮುಖ್ಯ ಎಂಜಿನಿಯರ್ ಸತ್ಯನಾರಾಯಣ ಸಭೆಯಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು