ಮಂಗಳವಾರ, ಫೆಬ್ರವರಿ 7, 2023
27 °C

‘ಚಿಲುಮೆ’ ವಿರುದ್ಧದ ಪ್ರಕರಣ ಮತ್ತೊಬ್ಬ ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮತದಾರರ ವೈಯಕ್ತಿಕ ಮಾಹಿತಿ ಕಳವು ಹಾಗೂ ದುರ್ಬಳಕೆ ಆರೋಪದಡಿ ಚಿಲುಮೆ ಸಂಸ್ಥೆ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಅನಿಲ್‌ ಎಂಬುವವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 12ಕ್ಕೆ ಏರಿದೆ.

‘ಚಿಲುಮೆ ಸಂಸ್ಥೆಯ ಸಂಸ್ಥಾಪಕ ರವಿಕುಮಾರ್ ಜೊತೆಗೆ ಒಡನಾಟ ಹೊಂದಿದ್ದ ಅನಿಲ್, ಮತದಾರರ ಮಾಹಿತಿ ಸಂಗ್ರಹಿಸುವ ಕೆಲಸಕ್ಕೆ ಸಹಾಯ ಮಾಡಿದ್ದ. ರವಿಕುಮಾರ್‌ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಅನಿಲ್ ಹೆಸರು ಬಾಯ್ಬಿಟ್ಟಿದ್ದ. ಈ ಮಾಹಿತಿ  ಆಧರಿಸಿ ಅನಿಲ್‌ನನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಸಮೀಕ್ಷೆ ಮಾಡಲು ಮುಂದಾಗಿದ್ದ ಚಿಲುಮೆ ಸಂಸ್ಥೆ ಸಿಬ್ಬಂದಿ, ಅದೇ ಕ್ಷೇತ್ರ ವ್ಯಾಪ್ತಿಯಲ್ಲಿ ಕಚೇರಿ ತೆರೆದಿದ್ದರು. ಕಚೇರಿ ನಿರ್ವಹಣೆ ಜವಾಬ್ದಾರಿ ವಹಿಸಿಕೊಂಡಿದ್ದ ಅನಿಲ್, ಸಿಬ್ಬಂದಿ ನೇಮಕ ಹಾಗೂ ಸಾರಿಗೆ ಸೌಕರ್ಯ ಕಲ್ಪಿಸುವ ಕೆಲಸವನ್ನೂ ಮಾಡುತ್ತಿದ್ದ. ಪ್ರಕರಣ ದಾಖಲಾಗುತ್ತಿದ್ದಂತೆ ಈತ ಪರಾರಿಯಾಗಿದ್ದ’ ಎಂದು ತಿಳಿಸಿದರು.

ಅಧಿಕಾರಿಗಳ ವಿಚಾರಣೆ ಮುಂದುವರಿಕೆ: ಪ್ರಕರಣದಲ್ಲಿ ಬಂಧಿಸಲಾಗಿರುವ ಬಿಬಿಎಂಪಿ ಕಂದಾಯ ಅಧಿಕಾರಿಗಳಾದ ಸುಹೇಲ್‌ ಅಹಮದ್‌, ಕೆ.ಚಂದ್ರಶೇಖರ್‌, ಮಹೇಶ್‌ ಹಾಗೂ ಉಪ ಕಂದಾಯ ಅಧಿಕಾರಿ ವಿ.ಬಿ. ಭೀಮಾಶಂಕರ್‌ ಅವರ ವಿಚಾರಣೆಯನ್ನು ‍ಪೊಲೀಸರು ಮುಂದುವರಿಸಿದ್ದಾರೆ.

‘ಮತದಾರರ ಸಮೀಕ್ಷೆಯೇ ಕಾನೂನುಬಾಹಿರ. ಇಂಥ ಸಮೀಕ್ಷೆ ಕೈಗೊಳ್ಳಲು ತೀರ್ಮಾನಿಸಿದ್ದ ಚಿಲುಮೆ ಸಂಸ್ಥೆಗೆ ಬಂಧಿತ ಅಧಿಕಾರಿಗಳು ಸಹಕಾರ ನೀಡಿದ್ದರು. ಮತಗಟ್ಟೆ ಅಧಿಕಾರಿ (ಬಿಎಲ್‌ಒ) ಗುರುತಿನ ಚೀಟಿಗಳನ್ನೂ ಅಕ್ರಮವಾಗಿ ಮಾಡಿಕೊಟ್ಟಿದ್ದರು. ಆರೋಪಿತ ಅಧಿಕಾರಿಗಳು, ಹಿರಿಯ ಅಧಿಕಾರಿಗಳ ಸೂಚನೆಯಂತೆ ಕೆಲಸ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಸೂಕ್ತ ಪುರಾವೆಗಾಗಿ ಹುಡುಕಾಟ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು